
ಬೆಂಗಳೂರು (ಫೆ.13): ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರ್ಕಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಸೋಮವಾರ ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಪ್ರತಿ ವರ್ಷ ನಡೆಯುವ ಶಾಸ್ತ್ರವಷ್ಟೆ. ಪ್ರತಿ ವರ್ಷದ ಸಂಪ್ರದಾಯದಂತೆ ವಿಧಾನಸಭೆ ಕಲಾಪಗಳು ನಡೆಯುತ್ತವೆ. ಸರ್ಕಾರದ ಮುಂದಿನ ವರ್ಷದ ನೀಲನಕ್ಷೆ ಹಾಗೂ ಸಾಧನೆಗಳ ನೋಟವನ್ನು ಕೊಡಬೇಕು. ಅದನ್ನು ಮಾಡದ ಕೆಲಸಗಳ ಬಗ್ಗೆ ಡಂಗೂರ ಹೊಡೆಯುವ ಕೆಲಸ ಅಷ್ಟೇ ಆಯಿತು. ಸ್ಪಷ್ಟ ಬಹುಮತದ ಸರ್ಕಾರ ನೀಡಿದರೂ ಅಸ್ಪಷ್ಟವಾಗಿ ಆಡಳಿತ ನಡೆಸುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಪ್ರತಿದಿನವೂ ಮಾಧ್ಯಮಗಳಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡು ಹೋಗುತ್ತಿದ್ದಾರೆ. ಆದರೆ, ಜನರಿಗೆ ಸರಿಯಾಗಿ ತಲುಪದ ಗ್ಯಾರಂಟಿಗಳ ಬಗ್ಗೆ ರಾಜ್ಯಪಾಲರಿಂದ ಸುಳ್ಳು ಭಾಷಣ ಮಾಡಿಸಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪಟ್ಟಿ ಒಂದೇ ಬಾರಿಗೆ ಬಿಡುಗಡೆ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರಿನಲ್ಲಿ ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆಂದು ದೊಡ್ಡ ದೊಡ್ಡ ಹೇಳಿಕೆಗಳನ್ನು ಕೊಟ್ಟಿದ್ದನ್ನು ನೋಡಿದ್ದೇವೆ. ಸಂಗಮದಿಂದ ಮೇಕೆದಾಟು ಪಾದಯಾತ್ರೆ ಮಾಡಿದ್ದನ್ನೂ ನೋಡಿದ್ದೇವೆ. ಆ ಮೇಕೆದಾಟು ಕಳೆದ 8 ತಿಂಗಳಲ್ಲಿ ಎಲ್ಲಿ ಶುರುವಾಯಿತೋ ಈಗಲೂ ಅಲ್ಲಿಯೇ ನಿಂತಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಏನಾಯಿತು? ಅಭಿವೃದ್ಧಿ ಯೋಜನೆಗಳಿಗೆ ಹಣ ಕೇಳಲೇಬೇಡಿ ಎನ್ನುವಂಥ ಪರಿಸ್ಥಿತಿಯಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ರಾಜ್ಯದ ಆಡಳಿತಾತ್ಮಕ ಇತಿಹಾಸದಲ್ಲಿ ಇಷ್ಟು ಬೇಕಾಬಿಟ್ಟಿಯಾಗಿ ಅಧಿಕಾರ ಹಂಚಿಕೆ ಮಾಡಿ ಖಜಾನೆಗೆ ನಷ್ಟ ಉಂಟು ಮಾಡಿರುವ ಉದಾಹರಣೆ ಇಲ್ಲ ಎಂದು ಟೀಕಾಪ್ರಹಾರ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ