ಇಂದಿನಿಂದ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ..!

By Kannadaprabha NewsFirst Published May 7, 2024, 5:30 AM IST
Highlights

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ತಮಿಳುನಾಡು, ಆಂಧ್ರಪ್ರದೇಶ ಜತೆಗೆ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.
 
ಬೆಂಗಳೂರು(ಮೇ.07): ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ತಮಿಳುನಾಡು, ಆಂಧ್ರಪ್ರದೇಶ ಜತೆಗೆ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.

ಅನಿರೀಕ್ಷಿತ ಮಳೆಗೆ ತುಸು ತಣ್ಣಗಾದ ಬೆಂಗಳೂರು: ಏಕಾಏಕಿ ಗುಡುಗು, ಮಿಂಚು

ಮೈಸೂರು, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಸೋಮವಾರ ಸಂಜೆ ಮಳೆಯಾಗಿದೆ. ಅದರಲ್ಲೂ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ರಾಮನಗರ ಸೇರಿದಂತೆ ಮತ್ತಿತರ ಕಡೆ ಭಾರೀ ಮಳೆ ಸುರಿದೆ.

ಮಂಗಳವಾರದಿಂದ ದಕ್ಷಿಣ ಕನ್ನಡ, ಉಡುಪಿಯ ಜತೆಗೆ ಚಿಕ್ಕಮಗಳೂರು, ಶಿವಮೊಗ್ಗ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಕೊಪ್ಪಳ, ಯಾದಗಿರಿ, ದಾವಣಗೆರೆ, ಕಲಬುರಗಿ, ಬೀದರ್‌ ಸೇರಿದಂತೆ ಮತ್ತಿತರ ಜಿಲ್ಲೆಗಳಿಗೆ ಮಳೆ ವಿಸ್ತರಣೆಯಾಗಲಿದೆ. ಮೇ 11ರ ನಂತರ ಮಳೆಯ ಪ್ರಮಾಣ ತಗ್ಗಲಿದ್ದು, ಕೆಲ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

click me!