
ಧಾರವಾಡ (ಅ.29): ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಇತ್ತೀಚಿನ ನಿರ್ದೇಶನಕ್ಕೆ ರಾಜ್ಯ ಹೈಕೋರ್ಟ್‌ನ ಧಾರವಾಡ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಇದರಿಂದಾಗಿ, ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಕಡಿವಾಣ ಹಾಕಲು ಹೊರಟಿದ್ದ ರಾಜ್ಯ ಸರ್ಕಾರಕ್ಕೆ ಕೊಂಚ ಹಿನ್ನಡೆ ಆಗಿದೆ.
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗೆ ನಿಷೇಧ ಹೇರುವಂತೆ ಆಗ್ರಹಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ, ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆ ಮೂಲಕ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಪರೋಕ್ಷವಾಗಿ ಕಡಿವಾಣ ಹಾಕಲು ಸರ್ಕಾರ ಮುಂದಾಗಿತ್ತು.
ಸರ್ಕಾರದ ಈ ಆದೇಶ ಪ್ರಶ್ನಿಸಿ ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ, ವಿ.ಕೆ.ಫೌಂಡೇಶನ್, ಧಾರವಾಡದ ರಾಜೀವ್ ಮಲ್ಹಾರ ಕುಲಕರ್ಣಿ, ಬೆಳಗಾವಿಯ ಬೌದ್ಧ ಪ್ರಚಾರಕ ಉಮಾ ಚವ್ಹಾಣ ಎಂಬುವರು ಅ.24ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಮಂಗಳವಾರ ಅರ್ಜಿಯ ವಿಚಾರಣೆ ನಡೆಯಿತು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಗೂ ಮಲ್ಲಿಕಾರ್ಜುನ ಹಿರೇಮಠ, ‘ಸರ್ಕಾರದ ಈ ನಿರ್ದೇಶನ ಮೂಲಭೂತ ಸ್ವಾತಂತ್ರ್ಯಗಳ ಉಲ್ಲಂಘನೆಯಾಗಿದೆ. ನಾಗರಿಕರು ಸಭೆ ಸೇರುವ ಮತ್ತು ಸಂಘ ಕಟ್ಟುವ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಿದೆ. ಅನುಮತಿಯಿಲ್ಲದೆ 10 ಜನರು ಸಾರ್ವಜನಿಕ ಸ್ಥಳದಲ್ಲಿ ಸೇರಿದರೆ ಅಪರಾಧ ಎಂಬ ಸರ್ಕಾರದ ಆದೇಶ ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದಂತಾಗಲಿದೆ.
ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ, ತನ್ನ ಆದೇಶದ ಮೂಲಕ ಚಲಾಯಿಸಿದೆ. ಈ ಆದೇಶದ ಮೂಲಕ ಸಂವಿಧಾನದ ಆರ್ಟಿಕಲ್ 19 (1) ಎ, ಬಿ ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು’ ಎಂದು ವಾದಿಸಿದರು. ಅರ್ಜಿದಾರರ ಪರ ವಾದ ಅನುಮೋದಿಸಿದ ನ್ಯಾಯಪೀಠ, ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆ ನೀಡಿ, ಈ ವಿಚಾರವಾಗಿ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. ಜೊತೆಗೆ, ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ