ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ್ದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ಬೆಂಗಳೂರು (ಜು.15): ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ್ದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ದಾಖಲಿಸಿದ್ದ ಖಾಸಗಿ ದೂರು ಮತ್ತು ಆ ಕುರಿತ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ರೇವಣ್ಣ ಸರಿಯಾಗಿ ನಿಂಬೆಹಣ್ಣು ಮಂತ್ರಿಸಿಲ್ಲ: ಕಾಲೆಳೆದ ಅಶೋಕ್
ವಿಚಾರಣೆ ನೆಪದಲ್ಲಿ ಜಾರಿ ನಿರ್ದೇಶನಾಲಯವು ರಾಹುಲ್ ಗಾಂಧಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ವತಿಯಿಂದ 2022ರ ಜೂ.16ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿ ಪ್ರತಿಭಟನೆ ನಡೆಸಿದ್ದರು. ಇದರಿಂದ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅವರು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಸಂಬಂಧ 42ನೇ ಎಸಿಎಂಎಂ ನ್ಯಾಯಾಲಯ, ಡಿ.ಕೆ.ಶಿವಕುಮಾರ್‌ಗೆ ಸಮನ್ಸ್ ಜಾರಿ ಮಾಡಿತ್ತು. ಈ ಪ್ರಕರಣ ರದ್ದುಪಡಿಸಲು ಕೋರಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಡಿಕೆಶಿ ವಿರುದ್ಧದ ತನಿಖೆ ತಡ ಆಗಿಲ್ಲ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ತನಿಖೆ ಯಾವುದೇ ರೀತಿಯಲ್ಲೂ ವಿಳಂಬವಾಗಿಲ್ಲ ಎಂದು ಸಿಬಿಐ ವಕೀಲರು ಗುರುವಾರ ಹೈಕೋರ್ಟ್ ಮುಂದೆ ಬಲವಾಗಿ ವಾದ ಮಂಡಿಸಿದರು. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಕುರಿತ ಸಿಬಿಐ ತನಿಖೆ ರದ್ದುಪಡಿಸುವಂತೆ ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ವಿಚಾರಣೆ ನಡೆಸಿತು.
ಮೆಟ್ರೋ ಸುರಂಗ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ಈವರೆಗೆ ಸ್ವತಂತ್ರವಾಗಿ 596 ದಾಖಲೆ ಸಂಗ್ರಹಿಸಲಾಗಿದೆ. 84 ಸಾಕ್ಷಿಗಳನ್ನು ಪರಿಶೀಲಿಸಲಾಗಿದೆ. ತನಿಖೆ ಯಾವುದೇ ರೀತಿಯಲ್ಲೂ ವಿಳಂಬವಾಗಿಲ್ಲ. 2020ರ ಅ.3ಕ್ಕೆ ಎಫ್‌ಐಆರ್ ದಾಖಲಾಗಿದೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಸೂಕ್ತ ವಿವರಣೆ ನೀಡಲು ಸಾಧ್ಯವಿಲ್ಲ ಎಂದು ತಿಳಿದು ಅರ್ಜಿದಾರರು, ಎಫ್‌ಐಆರ್ ರದ್ದು ಕೋರಿ 2022ರ ಜು.28ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವಿವರಿಸಿದರು. ಅಂತಿಮವಾಗಿ ಸಿಬಿಐ ವಕೀಲರ ವಾದಕ್ಕೆ ಪ್ರತಿಕ್ರಿಯಿಸಲು ಡಿ.ಕೆ. ಶಿವಕುಮಾರ್ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಜು.21ಕ್ಕೆ ಮುಂದೂಡಿತು.