
ಬೆಂಗಳೂರು(ಅ.23): ರಾಜ್ಯದ 117 ಪುರಸಭೆ ಹಾಗೂ 100 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಹೈಕೋರ್ಟ್ ಗುರುವಾರ ಒಪ್ಪಿಗೆ ನೀಡಿದೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಅ.8ರಂದು ಹೊರಡಿಸಿದ್ದ ಅಧಿಸೂಚನೆಗೆ ಅ.19ರಂದು ನೀಡಿದ್ದ ತಡೆಯಾಜ್ಞೆ ಆದೇಶವನ್ನು ಹಿಂಪಡೆದಿರುವ ಹೈಕೋರ್ಟ್, ನ.10ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಹಲವು ಆಕಾಂಕ್ಷಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಚುನಾಯಿತ ಸದಸ್ಯರು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ದಾವಣಗೆರೆ ಜಿಲ್ಲೆ ಚನ್ನಗಿರಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿದಂತೆ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ನಿಗದಿತ ಮೀಸಲು ಪಟ್ಟಿಪ್ರಕಾರ ಚುನಾವಣೆ ನಡೆಸಲಿ,ಆದರೆ ಅರ್ಜಿದಾರರು ಪ್ರಶ್ನಿಸಿರುವ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗಳು ಅರ್ಜಿಯ ಅಂತಿಮ ಫಲಿತಾಂಶಕ್ಕೆ ಒಳಪಡಲಿದೆ ಎಂದು ಸ್ಪಷ್ಟಪಡಿಸಿದೆ.
ಕೋವಿಡ್ ನಿಯಮ ಉಲ್ಲಂಘನೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಇದಕ್ಕೂ ಮುನ್ನ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಮೀಸಲಾತಿ ನಿಗದಿಪಡಿಸುವಾಗ ನಿಯಮಾವಳಿ ಪಾಲಿಸಲಾಗಿದೆ. ಅರ್ಜಿಗಳು ಮೆರಿಟ್ ಆಧಾರದಲ್ಲಿ ವಿಚಾರಣಾ ಮಾನ್ಯತೆ ಹೊಂದಿರಬಹುದು. ಆದರೆ, ಚುನಾವಣಾ ಪ್ರಕ್ರಿಯೆ ಪ್ರಾರಂಭಗೊಂಡ ಬಳಿಕ ನ್ಯಾಯಾಲಯ ಮಧ್ಯಪ್ರವೇಶ ಮಾಡುವಂತಿಲ್ಲ ಎಂದು ಹಲವು ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಲ್ಲದೆ, ಚುನಾವಣೆಗೆ ತಡೆ ನೀಡಿದರೆ ಚುನಾವಣೆ ಪ್ರಕ್ರಿಯೆ ಮತ್ತಷ್ಟುವಿಳಂಬವಾಗಲಿದೆ. ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ವಿಭಾಗೀಯ ನ್ಯಾಯಪೀಠ ಅ.21ರಂದು ನೀಡಿರುವ ಆದೇಶ ಪರಿಗಣಿಸಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಅನುಮತಿ ನೀಡಬೇಕು ಎಂದು ಕೋರಿದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಅಧಿಸೂಚನೆಗೆ ನೀಡಲಾಗಿದ್ದ ತಡೆಯನ್ನು ತೆರವುಗೊಳಿಸಿ ಚುನಾವಣೆ ನಡೆಸುವಂತೆ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ. ಅದೇ ಆಧಾರದಲ್ಲಿ ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ ಮೀಸಲಾತಿ ಅಧಿಸೂಚನೆಗೆ ತಡೆ ನೀಡಿ ಅ.19ರಂದು ತಾನು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹಿಂಪಡೆಯುತ್ತಿರುವುದಾಗಿ ಹೇಳಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ