
ಬೆಂಗಳೂರು (ಅ.17): ಸಂಧ್ಯಾ ಸುರಕ್ಷಾ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ ಹಿರಿಯ ನಾಗರಿಕರಿಗೆ ಈ ವರ್ಷದ ಜನವರಿಯಿಂದ ಪಿಂಚಣಿ ಪಾವತಿಸದ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಅಖಿಲ ಕರ್ನಾಟಕ ವಯೋವೃದ್ಧರ ಒಕ್ಕೂಟ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಅರ್ಜಿ ಹಾಕದಿದ್ದರೂ ಸಿಗಲಿದೆ ವೃದ್ಧಾಪ್ಯ ವೇತನ ..
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆ ನಿರ್ದೇಶನಾಲಯ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು. ಜತೆಗೆ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿತು.
ಈ ವರ್ಷದ ಜನವರಿಯಿಂದ ಹಿರಿಯ ನಾಗರಿಕರಿಗೆ ಸಂಧ್ಯಾ ಸುರಕ್ಷಾ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ ಪಿಂಚಣಿ ಬಿಡುಗಡೆ ಮಾಡಿಲ್ಲ. ಆದ್ದರಿಂದ ಬಾಕಿ ಉಳಿದಿರುವ ವೃದ್ಧಾಪ್ಯ ವೇತನವನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಪಿಂಚಣಿ ಮತ್ತು ಸಾಮಾಜಿಕ ಭದ್ರತಾ ನಿರ್ದೇಶನಾಲಯಕ್ಕೆ ಸೂಚಿಸಬೇಕು. ಹಿರಿಯ ನಾಗರಿಕರ ವೃದ್ಧಾಪ್ಯ ವೇತನ ಹೆಚ್ಚಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ