ವಾಹನದ ನಂಬರ್‌ ಪ್ಲೇಟಲ್ಲಿ ಸರ್ಕಾರದ ಲಾಂಛನ, ಚಿಹ್ನೆ ದುರ್ಬಳಕೆ: ಹೈಕೋರ್ಟ್ ನೋಟಿಸ್

By Kannadaprabha NewsFirst Published Feb 28, 2024, 5:58 AM IST
Highlights

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ನಿರ್ದೇಶಕರು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯದ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿತು.

ಬೆಂಗಳೂರು(ಫೆ.28):  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕೃತ ಲಾಂಛನ, ಚಿಹ್ನೆ ದುರ್ಬಳಕೆಯನ್ನು ತಡೆಯುವ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ನಿರ್ದೇಶಕರು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯದ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿತು.

ಮಾಜಿ ಸಚಿವ ಶ್ರೀರಾಮುಲುಗೆ ಬಂಧನದ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್!

ಮಾನವ ಹಕ್ಕುಗಳ ಆಯೋಗ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಂವಿಧಾನಿಕ ಸಂಸ್ಥೆಗಳ ಹೆಸರು, ಲಾಂಛನ ಮತ್ತು ಚಿಹ್ನೆ ಹೋಲುವಂತಹ ಹೆಸರು, ಲಾಂಛನ ಮತ್ತು ಚಿಹ್ನೆಗಳನ್ನು ಖಾಸಗಿ ವ್ಯಕ್ತಿಗಳು ಮತ್ತು ಸಂಘ-ಸಂಸ್ಥೆಗಳು ತಮ್ಮ ವಾಹನಗಳ ನಂಬರ್‌ ಪ್ಲೇಟ್‌ಗಳ ಮೇಲೆ ಹಾಕಿಕೊಳ್ಳುತ್ತಿರುವ ಬಗ್ಗೆ ಹೈಕೋರ್ಟ್‌ ನ್ಯಾಯಮೂರ್ತಿ ಆರ್. ದೇವದಾಸ್ ಅವರ ಏಕಸದಸ್ಯ ಈ ಹಿಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಜತೆಗೆ, ಇದನ್ನು ತಡೆಯಲು ಕಾಯ್ದೆ-ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಆ ನಿಟ್ಟಿನಲ್ಲಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವಂತೆ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಗೆ 2023ರ ಜೂ.9ರಂದು ನಿರ್ದೇಶಿತ್ತು. ಅದರಂತೆ ಈ ಅರ್ಜಿ ದಾಖಲಿಸಲಾಗಿದೆ.

ಖಾಸಗಿ ವ್ಯಕ್ತಿಗಳು, ಸಂಘ ಸಂಸ್ಥೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕೃತ ಲಾಂಛನ, ಚಿಹ್ನೆ ದುರ್ಬಳಕೆಯನ್ನು ತಡೆಯಬೇಕಿದೆ. ಆ ನಿಟ್ಟಿನಲ್ಲಿ ರಾಷ್ಟ್ರ ಲಾಂಛನ ಮತ್ತು ಹೆಸರು (ಅನುಚಿತ ಬಳಕೆ ನಿಷೇಧ) ಅಧಿನಿಯಮ-1950, ಲಾಂಛನ ಮತ್ತು ಹೆಸರು (ಅನುಚಿತ ಬಳಕೆ ನಿಷೇಧ) ನಿಯಮಗಳು-1982, ಭಾರತದ ರಾಷ್ಟ್ರ ಲಾಂಛನ (ಅನುಚಿತ ಬಳಕೆ ನಿಷೇಧ) ಕಾಯ್ದೆೆ-2005, ರಾಷ್ಟ್ರ ಲಾಂಛನ (ಬಳಕೆ ನಿಯಂತ್ರಣ) ನಿಯಮಗಳು-2007 ಮತ್ತು 2010 ಹಾಗೂ ಕರ್ನಾಟಕ ಮೋಟಾರು ವಾಹನ ಅಧಿನಿಯಮದ ನಿಯಮ (145)(ಎ) ಮತ್ತು ಕೇಂದ್ರ ಮೋಟಾರು ವಾಹನ ಅಧಿನಿಯಮದ ನಿಯಮ (50) ಮತ್ತು (51)ನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

click me!