
ಬೆಂಗಳೂರು(ಜೂ.15): ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ನಿರ್ದೇಶಿಸುವಂತೆ ಕೋರಿರುವ ಅರ್ಜಿ ಸಂಬಂಧ ಸಿಐಡಿ ಪೊಲೀಸರು ಮತ್ತು ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪ್ರಕರಣದ ದೂರುದಾರ ಮಹಿಳೆ ಪುತ್ರನೂ ಆದ ಸಂತ್ರಸ್ತೆ ಸಹೋದರ ಶಶಾಂಕ್ ಸಿಂಗ್ ಸಲ್ಲಿಸಿದ್ದ ತಕರಾರು ಅರ್ಜಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾಗಿರುವ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತರು, ಸಿಐಡಿ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಪ್ರಕರಣದಲ್ಲಿ ಆರೋಪಿ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿತು.
ಪೋಕ್ಸೋ ಕೇಸ್‌ನಲ್ಲಿ ಯಡಿಯೂರಪ್ಪಗೆ ರಿಲೀಫ್: ಕೋಟಿ ಹೃದಯಗಳ ಪ್ರಾರ್ಥನೆ ಫಲಿಸಿದೆ, ವಿಜಯೇಂದ್ರ
ಯಡಿಯೂರಪ್ಪ ಅವರು ನನ್ನ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಕುರಿತು ತಾಯಿ 2024ರ ಮಾ.14ರಂದು ಸದಾಶಿವನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ಗೆ ದೂರು ನೀಡಿದ್ದರು. ಪೊಲೀಸರು ಪೋಕ್ಸೋ ಕಾಯ್ದೆ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್ 354(ಎ) ಅಡಿಯಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿತ್ತು. ಆದರೆ, ದೂರು ದಾಖಲಾಗಿ ಎರಡು ತಿಂಗಳು ಕಳೆದರೂ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.
ಅಲ್ಲದೆ, ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸುವ ಮೂಲಕ ಸತ್ಯಾಂಶ ತಿಳಿಯಬೇಕು. ಅಗತ್ಯವಿರುವ ಸಿಸಿಟಿವಿ ದೃಶ್ಯಗಳು, ಮೆಮೊರಿ ಕಾರ್ಡ್ ಮತ್ತು ಹಾರ್ಡ್ ಡಿಸ್ಕ್ ಅನ್ನು ವಶಪಡಿಸಿಕೊಳ್ಳಬೇಕು. ತನಿಖೆಯನ್ನು ಚುರುಕುಗೊಳಿಸಿ ಒಂದು ತಿಂಗಳ ಒಳಗೆ ವರದಿ ಸಲ್ಲಿಸಲು ನಗರ ಪೊಲೀಸ್ ಆಯುಕ್ತರು ಮತ್ತು ಸಿಐಡಿ ಇನ್ಸ್‌ಪೆಕ್ಟರ್‌ಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ವಕೀಲ ಬಾಲನ್ ವಾದ ಮಂಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ