
ಬೆಂಗಳೂರು (ಮೇ.29): ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (ಕೆಪಿಟಿಸಿಎಲ್) 404 ಸಹಾಯಕ ಎಂಜಿನಿಯರ್ (ಎಇ) ಮತ್ತು ಕಿರಿಯ ಎಂಜಿನಿಯರ್ (ಜೆಇ) ನೇಮಕ ಸಂಬಂಧ 2024ರ ಮೇ 8ರಂದು ಪ್ರಕಟಿಸಿದ್ದ ಆಯ್ಕೆ ಪಟ್ಟಿ ರದ್ದುಪಡಿಸಿರುವ ಹೈಕೋರ್ಟ್, ಶೀಘ್ರ ಮರು ಪರೀಕ್ಷೆ ನಡೆಸುವಂತೆ ಕೆಪಿಟಿಸಿಎಲ್ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶಿಸಿದೆ.
ಪರೀಕ್ಷೆಗೆ ಕೆಲವೇ ದಿನಗಳ ಮುನ್ನ ನೆಗೆಟಿವ್ ಮಾರ್ಕಿಂಗ್ ಕುರಿತು ಆದೇಶ ಹೊರಡಿಸಿದ ಕ್ರಮ ಪ್ರಶ್ನಿಸಿ ಅಭ್ಯರ್ಥಿಗಳಾದ ಬೆಂಗಳೂರಿನ ನವೀನ್ ಕುಮಾರ್ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. 2024ರ ಫೆ.18ರಂದು ನಡೆಸಿದ ಪರೀಕ್ಷೆಗೆ ಹಾಜರಾದ ಎಲ್ಲ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ. ಒಂದು ವೇಳೆ ನೆಗೆಟಿವ್ ಮಾರ್ಕಿಂಗ್ ಇದ್ದರೆ ಆ ಬಗ್ಗೆ ಮೊದಲೇ ಅಭ್ಯರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಕೆಪಿಟಿಸಿಎಲ್ 2017ರ ಆ.3ರಂದು ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಎಇ ಮತ್ತು ಜೆಇ ಸೇರಿ 404 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಅದಕ್ಕಾಗಿ ತಾಂತ್ರಿಕ ಪತ್ರಿಕೆ ಹಾಗೂ ಕನ್ನಡ ಪತ್ರಿಕೆ-2 ಪರೀಕ್ಷೆಯನ್ನೂ 2018ರ ಜನವರಿಯಲ್ಲಿ ನಡೆಸಲಾಗಿತ್ತು. ನಂತರ ಕೆಪಿಟಿಸಿಎಲ್ 2018ರಲ್ಲಿ ನಡೆಸಿದ ಎಲ್ಲ ಪರೀಕ್ಷೆ ರದ್ದುಗೊಳಿಸಿ ಹೊಸದಾಗಿ ನೇಮಕಾತಿ ಪರೀಕ್ಷೆ ನಡೆಸುವ ಹೊಣೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ವಹಿಸಿತ್ತು.
ಕೆಇಎ 2022ರ ಫೆಬ್ರವರಿಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ಕನ್ನಡ ಪತ್ರಿಕೆಗೆ 150 ಅಂಕ ನಿಗದಿಪಡಿಸಲಾಗಿತ್ತು. ಆಗ ಕೆಲವರು ಕೋರ್ಟ್‌ಗೆ ಹೋಗಿದ್ದರು. ನಂತರ ಹೊಸದಾಗಿ ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಇದಾದ ಬಳಿಕ ನ್ಯಾಯಾಲಯದಲ್ಲಿ ಮತ್ತೊಂದು ಸುತ್ತಿನ ಕಾನೂನು ಹೋರಾಟ ನಡೆದಿತ್ತು. ಹೀಗೆ ಹಲವು ಸುತ್ತಿನ ಕಾನೂನು ಹೋರಾಟ ಮತ್ತು ಪರಿಷ್ಕೃತ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು.
ನೇಮಕಾತಿ ಪ್ರಕ್ರಿಯೆ ಹಲವು ವರ್ಷಗಳ ಕಾಲ ನೆನೆಗುದಿಗೆ ಬಿದ್ದಿದೆ ಎನ್ನುವ ಕಾರಣಕ್ಕೆ ಹೈಕೋರ್ಟ್‌ನ ವಿಭಾಗೀಯ ಪೀಠ, ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (ಕೆಪಿಟಿಸಿಎಲ್) 404 ಸಹಾಯಕ ಅಭಿಯಂತರ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶ ನೀಡುವಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ