
ಬೆಂಗಳೂರು(ಫೆ.19): ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗುರುಗುಂಡ ಬ್ರಹ್ಮೇಶ್ವರ ಮಠದ ಆಸ್ತಿ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಗುರುಗುಂಡ ಬ್ರಹ್ಮೇಶ್ವರ ಮಠದ ಪೀಠಾಧಿಪತಿ ನಂಜಾವಧೂತ ಸ್ವಾಮೀಜಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಶಿರಾದ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಠಾಧೀೕಶರಾದ ಗಿರೀಶ್ ಕುಮಾರ್ ಅಲಿಯಾಸ್ ನಂಜಾವಧೂತ ಸ್ವಾಮೀಜಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಸ್ವಾಮೀಜಿಯ ಅರ್ಜಿಯನ್ನು ವಜಾಗೊಳಿಸಿದರು. ಆದರೆ, ಮತ್ತೊಬ್ಬ ಆರೋಪಿ ತಹಸೀಲ್ದಾರ್ ಪಾಥರಾಜ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲಾಗಿದೆ. ಪಾಥರಾಜ್ ವಿರುದ್ಧ ದೂರು ದಾಖಲಿಸಲು ಸರ್ಕಾರದಿಂದ ಪೂರ್ವಾನುಮತಿ ಪಡೆಯಲಾಗಿಲ್ಲ ಎಂಬ ಕಾರಣದಿಂದ ಅವರ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ರದ್ದುಪಡಿಸಿತು. ಸಿರಾ ತಾಲೂಕು ಪಟ್ಟನಾಯಕನಹಳ್ಳಿಯಲ್ಲಿ ಮಠಕ್ಕೆ ಸೇರಿದ ಆಸ್ತಿಯನ್ನು ಸ್ವಾಮೀಜಿ ಅಕ್ರಮವಾಗಿ ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.
ಡಿಕೆಶಿಗೆ ಸ್ವಾಮೀಜಿಗಳ ‘ಸಾಂತ್ವನ’ : ಎಲ್ಲವೂ ಸರಿ ಹೋಗುತ್ತೆ ಎಂದು ಸಮಾಧಾನ
ಆದರೆ, ಮಠದ ಆಸ್ತಿಯ ವಿಲ್ ಅನ್ನು ಈ ಹಿಂದೆಯೇ ಸಿವಿಲ್ ಕೋರ್ಟ್ ರದ್ದುಪಡಿಸಿತ್ತು. ಆ ಮಾಹಿತಿಯನ್ನು ಮುಚ್ಚಿಟ್ಟು ನಂಜಾವಧೂತ ಸ್ವಾಮೀಜಿ ಆಸ್ತಿಯನ್ನು ತನ್ನ ಹೆಸರಿಗೆ ಖಾತಾ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕೃಷ್ಣಪ್ಪ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ಈ ಬಗ್ಗೆ ನ್ಯಾಯಾಲಯ ಪೊಲೀಸ್ ತನಿಖೆಗೆ ಆದೇಶಿಸಿತ್ತು. ಅದರಂತೆ ತನಿಖೆ ನಡೆಸಿದ್ದ ಪೊಲೀಸರು ಸ್ವಾಮೀಜಿ ಮತ್ತು ಪಾಥರಾಜ್ ವಿರುದ್ಧ ದೋಷಾರೋಪ ಪಟ್ಟಿಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಶಿರಾದ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿತ್ತು. ಇದರಿಂದ ತಮ್ಮ ವಿರುದ್ಧದ ಪ್ರಕರಣ ಹಾಗೂ ಅದಕ್ಕೆ ಸಂಬಂಧಿಸಿದ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ನಂಜಾವಧೂತ ಸ್ವಾಮೀಜಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ