
ಬೆಂಗಳೂರು (ಜು.24): ಅರಣ್ಯ ಭೂಮಿ ಒತ್ತುವರಿ ಮಾಡಿದ ಆರೋಪ ಸಂಬಂಧ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅರಣ್ಯ ಭೂಮಿ ಒತ್ತುವರಿ ಮಾಡಿದ ಆರೋಪದಲ್ಲಿ 2006ರಲ್ಲಿ ಕನಕಪುರ ವಲಯ ಅರಣ್ಯಾಧಿಕಾರಿ ದಾಖಲಿಸಿದ್ದ ಎಫ್ಐಆರ್ ಹಾಗೂ ಅದರ ಸಂಬಂಧ 2025ರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರಂಭವಾಗಿರುವ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶಾಸಕ ಇಕ್ಬಾಲ್ ಹುಸೇನ್ ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ಈ ಆದೇಶ ಮಾಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ, 2006ರಲ್ಲಿ ದಾಖಲಾದ ಪ್ರಕರಣ ಇದಾಗಿದೆ. ಪ್ರಕರಣದಲ್ಲಿ ಯಾವುದೇ ಪ್ರಗತಿ ಆಗಿರಲಿಲ್ಲ. ಅರ್ಜಿದಾರರು 2023ರಲ್ಲಿ ಶಾಸಕರಾಗಿ ಆಯ್ಕೆಯಾದ ಕೂಡಲೇ ಪ್ರಕರಣಕ್ಕೆ ಜೀವ ಪಡೆದುಕೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆಗೊಂಡು ವಿಚಾರಣಾ ಪ್ರಕ್ರಿಯೆ ಆರಂಭವಾಗಿದೆ ಎಂದು ವಿವರಿಸಿದರು. ಈ ವಾದ ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಿತು. ಅಲ್ಲದೆ, ಪ್ರತಿವಾದಿಯಾಗಿರುವ ಕನಕಪುರ ವಲಯ ಅರಣ್ಯಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆ.28ಕ್ಕೆ ಮುಂದೂಡಿತು.
ಯಕ್ಷಗಾನಕ್ಕೆ ತಡೆ: ಆಯೋಜಕರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್: ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾರ್ಕಳ ಮುಂಡ್ಲಿ ಗ್ರಾಮದಲ್ಲಿ ಜ.14ರಂದು ಆಯೋಜಿಸಲಾಗಿದ್ದ ಯಕ್ಷಗಾನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಶ್ರೀ ಈಶ್ವರ ಯಕ್ಷಗಾನ ಸಂಘದ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಧ್ವನಿವರ್ಧಕ ಬಳಕೆಗೆ ಪೊಲೀಸ್ ಇಲಾಖೆಯ ಅನುಮತಿ ಇಲ್ಲದ ಹಿನ್ನೆಲೆಯಲ್ಲಿ, ಅಜೆಕಾರು ಠಾಣಾಧಿಕಾರಿ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿದ್ದರು.
ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ ಹಾಗೂ ಧ್ವನಿವರ್ಧಕ ಸೇವೆ ನೀಡಿದ ಅಜೆಕಾರು ಸೌಂಡ್ಸ್ ಸಂಸ್ಥೆ ಮಾಲಕ ಅಪ್ಪು ನಾಯಕ್ ಅವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠವು, ಅರ್ಜಿ ದಾರರ ಪರವಾಗಿ ಮಂಡಿಸಲಾದ ವಾದ ಪರಿಗಣಿಸಿ, ಕ್ರಿಮಿನಲ್ ವಿಚಾರಣೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅರ್ಜಿ ದಾರರ ಪರವಾಗಿ ಹಿರಿಯ ನ್ಯಾಯವಾದಿ ಮಹೇಂದ್ರ ಎಸ್.ಎಸ್., ಬೆಂಗಳೂರು ಅವರು ವಾದ ಮಂಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ