
ಹಾನಗಲ್ಲ : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದೆ. ಹಾವೇರಿ ಜಿಲ್ಲೆ ಅಕ್ಕಿಆಲೂರಿನ ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಬಳಿಕ, ಕಾಲೇಜಿನ ಪ್ರಾಚಾರ್ಯ ಡಾ। ವೀರೇಶ ಕುಮ್ಮೂರ ಅವರು ವಿದ್ಯಾರ್ಥಿಗಳ ಮನವೊಲಿಸಿದ್ದು, ಕಾಲೇಜಿನ ಸಮವಸ್ತ್ರ ಪಾಲನೆಗೆ ವಿದ್ಯಾರ್ಥಿಗಳು ಒಪ್ಪಿದ್ದಾರೆ. ಆ ಮೂಲಕ ವಿವಾದ ಸುಖಾಂತ್ಯಗೊಂಡಿದೆ.
ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಕೆಲ ವಿದ್ಯಾರ್ಥಿನಿಯರು ಬುರ್ಕಾ ಧರಿಸಿ ಬಂದಿದ್ದರು. ಇದರಿಂದ ಆಕ್ರೋಶಗೊಂಡ ಕೆಲ ವಿದ್ಯಾರ್ಥಿಗಳು, ಕೇಸರಿ ಶಾಲು ಧರಿಸಿ ಬಂದರು. ಇದು ಕಾಲೇಜಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವಿನ ಚರ್ಚೆಗೆ ಕಾರಣವಾಯಿತು.
ವಿಷಯ ತಿಳಿದ ಪ್ರಾಚಾರ್ಯ ಡಾ.ವೀರೇಶ ಕುಮ್ಮೂರ, ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಹಾಗೂ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳನ್ನು ಕರೆದು, ಬುದ್ಧಿ ಹೇಳಿದರು. ಕಾಲೇಜಿನ ಆವರಣದಲ್ಲಿ ಕಾಲೇಜಿನ ಸಮವಸ್ತ್ರವನ್ನೇ ಧರಿಸಬೇಕು. ಅನಗತ್ಯವಾಗಿ ಗೊಂದಲ ಸೃಷ್ಟಿಗೆ ಅವಕಾಶ ಮಾಡಿಕೊಡಬೇಡಿ. ಕಾಲೇಜಿನ ಶಿಸ್ತು ಉಲ್ಲಂಘನೆ ಸರಿ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರು. ಅವರ ಮಾತಿಗೆ ಎಲ್ಲರೂ ಸಮ್ಮತಿ ಸೂಚಿಸಿದ್ದು, ವಿವಾದ ಸುಖಾಂತ್ಯಗೊಂಡಿದೆ.
ಇದೇ ಕಾಲೇಜಿನಲ್ಲಿ ಒಂದು ತಿಂಗಳ ಹಿಂದೆ ಇಂತಹುದೇ ಘಟನೆ ನಡೆದಿತ್ತು. ಆಗಲೂ ಪ್ರಾಚಾರ್ಯರು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ತಿಳುವಳಿಕೆ ಹೇಳಿದ್ದರು ಎನ್ನಲಾಗಿದೆ. ಆದಾಗ್ಯೂ, ಮತ್ತೆ ಗುರುವಾರ ಈ ಘಟನೆ ಮರುಕಳಿಸಿದೆ. ಈ ಮಧ್ಯೆ, ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಜರುಗಿಸಲು ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕ ಸಿಬ್ಬಂದಿ ನಿರ್ಧರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ