
ಬೆಳಗಾವಿ (ಮೇ.2): ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಕೆ ಹಾಗೂ ಇತರ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವುದು ಪೊಲೀಸರನ್ನು ಎಚ್ಚರಗೊಳಿಸಿದೆ. ಜೈಲಿನೊಳಗೆ ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್‌ಗಳು ಪದೇಪದೇ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ದೂರು ನೀಡಿದ್ದು, ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣದ ಕುರಿತು ತನಿಖೆ ಚುರುಕುಗೊಂಡಿದೆ.
ಕಳೆದ ಒಂದೂವರೆ ವರ್ಷದಲ್ಲಿ ಜೈಲಿನೊಳಗೆ ಕನಿಷ್ಠ 12 ಮೊಬೈಲ್ ಬಳಕೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ವಿಶೇಷ ಪೊಲೀಸ್ ತಂಡ ರಚಿಸಿ, ಸಮಗ್ರ ತನಿಖೆ ಕೈಗೊಳ್ಳಲಾಗಿದೆ. ಜೈಲಿನೊಳಗೆ ಮೊಬೈಲ್‌ಗಳು ಹೇಗೆ ಹೋಗುತ್ತಿವೆ? ಯಾರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ ಎಂಬ ಬಗ್ಗೆ ಪೊಲೀಸರು ತಾಂತ್ರಿಕ ಹಾಗೂ ಮಾನವ ಗುಪ್ತಚರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಗಳು, ಕಾಲ್ ಡಿಟೇಲ್ಸ್ ರೆಕಾರ್ಡ್ ಸೇರಿದಂತೆ ವಿವಿಧ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ.
ತನಿಖೆ ವೇಳೆ ನಟೋರಿಯಸ್ ಆರೋಪಿ ಜಯೇಶ್ ಪೂಜಾರಿ ಹೆಸರು ಪ್ರಮುಖವಾಗಿ ಕೇಳಿ ಬಂದಿದೆ. ಆತ ಒಬ್ಬನೇ 28 ಮೊಬೈಲ್ ಫೋನ್‌ಗಳನ್ನು ಬಳಸಿರುವುದು ಎನ್‌ಐಎ ತನಿಖೆಯಲ್ಲಿ ಬಹಿರಂಗವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜೈಲಿನೊಳಗೇ ಕುಳಿತು ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದಾನೆ ಎಂಬ ಶಂಕೆಯೂ ವ್ಯಕ್ತವಾಗಿದೆ. ಜೈಲಿನಲ್ಲೇ ಇದ್ದುಕೊಂಡು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣವೂ ಜಯೇಶ ವಿರುದ್ಧ ದಾಖಲಾಗಿರುವ ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ. ಎನ್‌ಐಎ ನೀಡಿದ ಮಾಹಿತಿ ಆಧಾರದ ಮೇಲೆ ಜೈಲು ಅಧಿಕಾರಿಗಳು ಅಧಿಕೃತವಾಗಿ ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಪೊಲೀಸರು ತನಿಖೆ ವಿಸ್ತರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ