ಪೊಲೀಸ್ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿ ಕೊಟ್ಟ ಗೃಹ ಸಚಿವ, 600 ಪಿಎಸ್‌ಐ, ಒಟ್ಟು 15000 ಪೊಲೀಸ್ ಹುದ್ದೆ ಭರ್ತಿ ಯಾವಾಗ?

Published : Nov 26, 2025, 11:00 PM IST
home minister Parameshwara statement on Belagavi session 2025

ಸಾರಾಂಶ

ಬೆಳಗಾವಿ ಚಳಿಗಾಲದ ಅಧಿವೇಶನದ ಭದ್ರತೆಗೆ 6,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಜೊತೆಗೆ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15,000 ಪೇದೆ ಮತ್ತು 600 ಪಿಎಸ್‌ಐ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ.

ಬೆಳಗಾವಿ (ನ.26) ಮುಂಬರುವ ಚಳಿಗಾಲದ ಅಧಿವೇಶನದ ಭದ್ರತಾ ಸಿದ್ಧತೆಗಳ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಇಂದು ಬೆಳಗಾವಿ ಎಸ್‌ಪಿ ಕಚೇರಿಯಲ್ಲಿ ಉತ್ತರ ವಲಯದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಅಧಿವೇಶನದ ಸಂದರ್ಭದಲ್ಲಿ ಎದುರಾಗಬಹುದಾದ ಪ್ರತಿಭಟನೆಗಳು ಮತ್ತು ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಚಳಿಗಾಲದ ಅಧಿವೇಶನದ ಭದ್ರತೆಗೆ 6,000 ಪೊಲೀಸ್ ಸಿಬ್ಬಂದಿ!

ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ, ಒಟ್ಟು 6,000 ಪೊಲೀಸ್ ಸಿಬ್ಬಂದಿಯನ್ನು ಚಳಿಗಾಲದ ಅಧಿವೇಶನದ ಭದ್ರತೆಗಾಗಿ ನಿಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು. ರೈತರು, ಎಂಇಎಸ್ ಕಾರ್ಯಕರ್ತರು, ಮೀಸಲಾತಿ ಹಾಗೂ ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿರುವುದರಿಂದ ಅವುಗಳನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ. ಸಿಬ್ಬಂದಿಗೆ ಊಟ, ವಸತಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಪೊಲೀಸ್ ಇಲಾಖೆಯ ಖಾಲಿ ಹುದ್ದೆಗಳು ಶೀಘ್ರ ಭರ್ತಿ?

ಇದೇ ವೇಳೆ, ಪೊಲೀಸ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯ ಕುರಿತು ಗೃಹ ಸಚಿವರು ಮಹತ್ವದ ಹೇಳಿಕೆಗಳನ್ನು ನೀಡಿದರು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 70,000 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಪೊಲೀಸ್ ಇಲಾಖೆಯಲ್ಲಿ ಒಳ ಮೀಸಲಾತಿ ಕಾರಣದಿಂದ ವಿಳಂಬವಾಗಿದ್ದ ನೇಮಕಾತಿ ಸಮಸ್ಯೆ ಈಗ ನಿವಾರಣೆಯಾಗಿದೆ. ಈಗಾಗಲೇ ನೇಮಕಾತಿಯಾದ 545 ಸಬ್ ಇನ್ಸ್‌ಪೆಕ್ಟರ್‌ಗಳ ತರಬೇತಿ ಮುಗಿಯುವ ಹಂತದಲ್ಲಿದೆ. ಜೊತೆಗೆ, ಇನ್ನೂ 600 ಖಾಲಿ ಇರುವ ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇಲಾಖೆಯಲ್ಲಿ ಸುಮಾರು 15 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲಾಗುತ್ತದೆ. ನೇಮಕಾತಿ ಆಕಾಂಕ್ಷಿಗಳಿಗೆ ಎರಡು ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಪೊಲೀಸರ ಕಾರ್ಯದ ಬಗ್ಗೆ ಗೃಹ ಸಚಿವ ಮೆಚ್ಚುಗೆ:

ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಗ್ಯಾಂಬ್ಲಿಂಗ್, ಮಟ್ಕಾ ಸೇರಿದಂತೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಲು ನಮ್ಮ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ನಮ್ಮ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ, ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ಕಬ್ಬು, ಮೆಕ್ಕೆಜೋಳ ಸೇರಿದಂತೆ ರೈತರ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಕ್ರಮವಹಿಸುತ್ತದೆ ಎಂದು ಅವರು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!