
ಹುಬ್ಬಳ್ಳಿ (ಜ. 06): ನಗರದ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
ಜನವರಿ 1 ರಂದು ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 5 ರಂದು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಮಹಿಳೆಯ ಮೇಲೆ ಈಗಾಗಲೇ ಮೂರು ಪ್ರಕರಣಗಳು ದಾಖಲಾಗಿದ್ದು, ಜನವರಿ 1 ರಂದು ನಡೆದ ಘಟನೆಯ ಬಗ್ಗೆ ಅವರು ದೂರು ನೀಡಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದರು.
ಈ ಪ್ರಕರಣದಲ್ಲಿ ಕೇಶ್ವಾಪುರ ಠಾಣೆಯ ಸಿಪಿಐ ಮತ್ತು ಸಿಬ್ಬಂದಿ ಮೇಲೆ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ತಮ್ಮ ದೂರನ್ನು ದಾಖಲಿಸಿಕೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಂದಲೇ ತನಿಖೆಯಾಗಬೇಕು ಎಂಬ ಬೇಡಿಕೆ ಕೇಳಿಬಂದಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಕಮಿಷನರ್ ಎನ್. ಶಶಿಕುಮಾರ್, ಜನವರಿ 1 ರಿಂದ 5 ರವರೆಗೆ ನಡೆದ ಎಲ್ಲ ಬೆಳವಣಿಗೆಗಳ ಬಗ್ಗೆ ಸಮಗ್ರ ವಿಚಾರಣೆ ನಡೆಸಲಾಗುವುದು. ಸಂತ್ರಸ್ತೆ ಲಿಖಿತ ದೂರು ನೀಡಿದರೆ ಕೂಡಲೇ ಕ್ರಮ ಕೈಗೊಳ್ಳುತ್ತೇವೆ. ಡಿಸಿಪಿ ನಂದಗಾವಿ ಅವರ ನೇತೃತ್ವದಲ್ಲಿ ಈ ಬಗ್ಗೆ ಪಾರದರ್ಶಕ ತನಿಖೆ ನಡೆಯಲಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ಮಹೇಶ್ ಟೆಂಗಿನಕಾಯಿ ಕಿಡಿ
ಇದೇ ವಿಚಾರವಾಗಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಪೊಲೀಸರ ವೈಫಲ್ಯವನ್ನು ಪ್ರಶ್ನಿಸಿದ್ದಾರೆ. ಮಹಿಳೆಯನ್ನು ವಶಕ್ಕೆ ಪಡೆದಾಗ ಆಕೆ ವಿವಸ್ತ್ರಗೊಳ್ಳುತ್ತಾಳೆ ಎಂದರೆ ಅಲ್ಲಿರುವ ಪೊಲೀಸರು ಏನು ಮಾಡುತ್ತಿದ್ದರು? ಇಲಾಖೆಯ ವಾಹನದಲ್ಲಿ ವಿಡಿಯೋ ಮಾಡಿದ್ದು ಯಾರು? ಅದನ್ನು ಹರಿಬಿಟ್ಟವರು ಯಾರು? ಎಂದು ಪ್ರಶ್ನಿಸುವ ಮೂಲಕ ಘಟನೆಯ ತನಿಖೆಗೆ ಆಗ್ರಹಿಸಿದ್ದಾರೆ.
ಪ್ರತಿಭಟನೆ ಕೈಬಿಡಲು ಕಮಿಷನರ್ ಮನವಿ
ವಿಡಿಯೋ ಹರಿಬಿಟ್ಟವರು ಮತ್ತು ಘಟನೆಗೆ ಕಾರಣರಾದವರ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ತಿಳಿಸಿದ ಕಮಿಷನರ್, ಸದ್ಯಕ್ಕೆ ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ. ಸತ್ಯಾಸತ್ಯತೆಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ