
ಬೆಂಗಳೂರು (ಮಾ.29): ಲೋಕಾಯುಕ್ತ ವಿಶೇಷ ಪೊಲೀಸ್ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ.ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ನಿರ್ದೇಶಿಸಿ ಹೊರಡಿಸಿದ ಆದೇಶವು ಗಣಿಗಾರಿಕೆ ಅಕ್ರಮ ಪ್ರಕರಣಕ್ಕೆ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಸಾಯಿ ವೆಂಕಟೇಶ್ವರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಮುಂದುವರಿಯಲು ಲೋಕಾಯುಕ್ತ ಎಸ್‌ಐಟಿಗೆ ಇದ್ದ ಅಡ್ಡಿ ನಿವಾರಣೆಯಾಗಿದ್ದು, ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ.
ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಆರೋಪ ಸಂಬಂಧ ಸಂಜಯನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಆಧರಿಸಿ ದಶಕದ ಹಿಂದೆ ಸಾಯಿ ವೆಂಕಟೇಶ್ವರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ಅವರಿಗೆ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನು ರದ್ದತಿಗೆ ಲೋಕಾಯುಕ್ತ ಪೊಲೀಸರು ಮನವಿ ಮಾಡಬಾರದು. ಒಂದೊಮ್ಮೆ ಈಗಾಗಲೇ ನಿರೀಕ್ಷಣಾ ಜಾಮೀನು ರದ್ದತಿ ಕೋರಿದ್ದರೆ ಅದನ್ನು ಮುಂದುವರೆಸಬಾರದು ಎಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿ ಹೈಕೋರ್ಟ್ ಈ ಹಿಂದೆ ಮಧ್ಯಂತರ ಆದೇಶ ಮಾಡಿತ್ತು. ಈ ಆದೇಶದಿಂದ ಸಾಯಿ ವೆಂಕಟೇಶ್ವರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಮುಂದುವರಿಯಲು ಲೋಕಾಯುಕ್ತ ಎಸ್‌ಐಟಿ ಅಡ್ಡಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಐಟಿ ಮಧ್ಯಂತರ ಅರ್ಜಿಯೊಂದನ್ನು ಸಲ್ಲಿಸಿಚಂದ್ರಶೇಖರ್ ಪ್ರಕರಣದಲ್ಲಿ ನೀಡಿರುವ ಆದೇಶವನ್ನು ಈ ಪ್ರಕರಣಕ್ಕೆ ಮಾತ್ರ ಸೀಮಿತಗೊಳಿಸುವಂತೆ ಕೋರಿತ್ತು. ಆ ಅರ್ಜಿ ಪುರಸ್ಕರಿಸಿರುವ ನ್ಯಾ. ಪ್ರದೀಪ್ ಸಿಂಗ್ ಯೆರೂ ಅವರ ಏಕಸದಸ್ಯ ಪೀಠ ಈ ಆದೇಶ ಮಾಡಿದೆ. ಇದೇ ವೇಳೆ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಮತ್ತು ಶಾಸಕ ಸುರೇಶ್ ಬಾಬು ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಪೊಲೀಸರಿಗೆ ಸೂಚಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಪೀಠ ಮತ್ತೆ ವಿಸ್ತರಿಸಿದೆ.
ಬೆಂಗಳೂರು ವಿವಿಯಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿರುವ 381 ಹೊರಗುತ್ತಿಗೆ ನೌಕರರು ಬೀದಿ ಪಾಲು?
ಜೆಡಿಎಸ್ ಸಭೆ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಭಾನುವಾರ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಪಕ್ಷದ ದ್ವೈವಾರ್ಷಿಕ ಚುನಾವಣೆ, ಸದಸ್ಯತ್ವ ಅಭಿಯಾನ ಹಾಗೂ ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ, ವಿಧಾನಮಂಡಲ ಕಲಾಪದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಸದಸ್ಯತ್ವ ನೋಂದಣಿಯನ್ನು ಎಲ್ಲಾ ಮುಖಂಡರು ಗಂಭೀರವಾಗಿ ಪರಿಗಣಿಸಬೇಕು. ಸಂಘಟನೆಯ ಬಗ್ಗೆ ಅಸಡ್ಡೆ ಬೇಡ. ಈ ಹಿಂದೆ 23 ಜಿಲ್ಲೆಗಳು ಇದ್ದವು. ನಾನು ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಪ್ರವಾಸ ಮಾಡಿದ್ದೇನೆ. ಕಷ್ಟಪಟ್ಟು ಪಕ್ಷ ಕಟ್ಟಿದ್ದೇನೆ. ಈಗಲೂ ಓಡಾಟ ಮಾಡುತ್ತಿದ್ದೇನೆ. ಪಕ್ಷ ಕಟ್ಟುವುದು ಸುಲಭದ ಕೆಲಸವಲ್ಲ. ಹೀಗಾಗಿ ಯಾರೊಬ್ಬರೂ ಸಂಘಟನೆಯನ್ನು ಲಘುವಾಗಿ ತೆಗೆದುಕೊಳ್ಳಬಾರದು ಎಂದು ದೇವೇಗೌಡರು ಈ ವೇಳೆ ಮುಖಂಡರಿಗೆ ತಾಕೀತು ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ