ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವಾಗ? ಏನಿದು ದ್ವಿತೀಯ ಪಿಯು ಪರೀಕ್ಷೆಗೆ ವೆಬ್‌ಕಾಸ್ಟಿಂಗ್?

Published : Feb 21, 2025, 09:20 AM ISTUpdated : Feb 21, 2025, 09:26 AM IST
 ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವಾಗ? ಏನಿದು ದ್ವಿತೀಯ ಪಿಯು ಪರೀಕ್ಷೆಗೆ ವೆಬ್‌ಕಾಸ್ಟಿಂಗ್?

ಸಾರಾಂಶ

ಮುಂದಿನ ಮಾ.21ರಿಂದ ಏ.4ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಇದು ದಾಖಲೆ ಎಂದು ಶಾಲಾ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ತಿಳಿಸಿದ್ದಾರೆ.

 ಬೆಂಗಳೂರು (ಫೆ.21): ಮುಂದಿನ ಮಾ.21ರಿಂದ ಏ.4ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಇದು ದಾಖಲೆ ಎಂದು ಶಾಲಾ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ತಿಳಿಸಿದ್ದಾರೆ.

ಅಲ್ಲದೆ, ಮಾ.1ರಿಂದ 20ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ -1ಅನ್ನು 7,13, 862 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಪರೀಕ್ಷಾ ಅಕ್ರಮ ತಡೆಗೆ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೂ ವೆಬ್‌ಕಾಸ್ಟಿಂಗ್‌ ಕಣ್ಗಾವಲು ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ನಗರದ ಸಮಗ್ರ ಶಿಕ್ಷಣ ಕರ್ನಾಟಕ ಭವಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಎರಡೂ ಪರೀಕ್ಷೆಗಳ ಪೂರ್ವ ಸಿದ್ಧತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಈ ಹಿಂದೆ 2021ರಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದು ಅತಿ ಹೆಚ್ಚಿನ ಸಂಖ್ಯೆಯಾಗಿತ್ತು. ಈ ಬಾರಿ 8.96 ಲಕ್ಷಕ್ಕೂ ಹೆಚ್ಚು ಮಂದಿ ನೋಂದಾಯಿಸಿರುವುದು ದಾಖಲೆಯಾಗಿದೆ.

ಈ ಪೈಕಿ 8.42 ಲಕ್ಷಕ್ಕೂ ಹೆಚ್ಚು ಮಂದಿ ನಿತ್ಯ ತರಗತಿಗೆ ಹಾಜರಾದ ವಿದ್ಯಾರ್ಥಿಗಳಾಗಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳ ಸಂಖ್ಯೆ 38,091, ಖಾಸಗಿ ವಿದ್ಯಾರ್ಥಿಗಳು 15,529 ಮಂದಿ ಇದ್ದಾರೆ. ಒಟ್ಟು 2,818 ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಕ್ರಮ ತಡೆಗೆ ವೆಬ್‌ಕಾಸ್ಟಿಂಗ್ ಜೊತೆಗೆ 2,818 ಸ್ಥಾನಿಕ ಜಾಗೃತ ದಳ, ಜಿಲ್ಲಾ ಹಂತದಲ್ಲಿ 410 ಮತ್ತು ತಾಲೂಕು ಹಂತದಲ್ಲಿ 1662 ವಿಚಕ್ಷಣ ಜಾಗೃತ ದಳಗಳು ಕಾರ್ಯ ನಿರ್ವಹಿಸಲಿವೆ ಎಂದು ವಿವರಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಗೆ 7,13,862 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಈ ಪೈಕಿ 6,61,474 ಮಂದಿ ಶಾಲಾ ತರಗತಿ ವಿದ್ಯಾರ್ಥಿಗಳು. ಉಳಿದಂತೆ 34,071 ಪುನರಾವರ್ತಿತ, 18,317 ಖಾಸಗಿ ಅಭ್ಯರ್ಥಿಗಳಾಗಿದ್ದಾರೆ. ಈ ಬಾರಿ 5 ಮಂದಿ ತೃತೀಯ ಲಿಂಗಿಗಳು ನೋಂದಾಯಿಸಿಕೊಂಡಿದ್ದಾರೆ. ಒಟ್ಟು 1,171 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಪರೀಕ್ಷಾ ಅಕ್ರಮ ತಡೆಗೆ 2,342 ಸ್ಥಾನಿಕ ಜಾಗೃತ ದಳ, 504 ವಿಚಕ್ಷಣ ಜಾಗೃತ ದಳಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: SSLC ವಿದ್ಯಾರ್ಥಿಗಳಿಗೆ ಒಂದು ದಿನ ಕಾರ್ಯಾಗಾರ | Suvarna 30 News | Kannada News

ಪಿಯುಗೂ ವೆಬ್‌ಕಾಸ್ಟಿಂಗ್‌:

ಈ ಬಾರಿ ಎಸ್ಸೆಸ್ಸೆಲ್ಸಿ ಮಾತ್ರವಲ್ಲದೆ ದ್ವಿತೀಯ ಪಿಯು ಪರೀಕ್ಷೆಗೂ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸಿಸಿ ಕ್ಯಾಮರಾ ಇರಲಿದ್ದು ಅಲ್ಲಿನ ಚಿತ್ರಣವನ್ನು ಆಯಾ ಜಿಲ್ಲಾ ಮಟ್ಟದ ನಿಯಂತ್ರಣ ಕೊಠಡಿಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್‌ ಸಿಇಒ ಸೇರಿದಂತೆ ಉನ್ನತ ಅಧಿಕಾರಿಗಳು ಕೂತು ಪರಿಶೀಲಿಸಬಹುದು. ಯಾವುದೇ ಕೇಂದ್ರದಲ್ಲಿ ಅಕ್ರಮ ನಡೆಯುತ್ತಿರುವುದು ಕಂಡುಬಂದರೆ ತಕ್ಷಣ ಆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ವಿವರಿಸಿದರು.

ಇದನ್ನೂ ಓದಿ: ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಏರಿಕೆ ಖಚಿತ: ಸಚಿವ ಮಧು ಬಂಗಾರಪ್ಪ

ಉಳಿದಂತೆ ಪರೀಕ್ಷಾ ಅಕ್ರಮ ತಡೆಗೆ ಅಗತ್ಯ ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವ್ಯಾಪ್ತಿಯಲ್ಲಿನ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಕೇಂದ್ರಗಳನ್ನು ಮುಚ್ಚಿಸಲಾಗುತ್ತದೆ. ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳ ವಿರುದ್ಧ ಶಿಕ್ಷಣ ಕಾಯ್ದೆ ನಿಯಮಗಳಡಿ ಅಗತ್ಯವಾದ ಮುಂಜಾಗೃತ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಪರೀಕ್ಷೆ ನಡೆಸಲು ಸೂಕ್ತ ಪೊಲೀಸ್ ಬಂದೋಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ