
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ವಿಶೇಷ ಸೌಲಭ್ಯ ನೀಡಿದ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರವು, ಕಾರಾಗೃಹಗಳ ಆಡಳಿತ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆ ತರುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಆರ್.ಹಿತೇಂದ್ರ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸಿದೆ.
ಒಂದು ತಿಂಗಳಲ್ಲಿ ವರದಿ ನೀಡುವಂತೆ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಈ ಉನ್ನತ ಮಟ್ಟದ ಸಮಿತಿಗೆ ಸೂಚಿಸಿದ್ದು, ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಹಾಗೂ ವ್ಯವಸ್ಥೆಯಲ್ಲಿ ಲೋಪದೋಷಗಳನ್ನು ಸರಿಪಡಿಸಿ ಬದಲಾವಣೆಗೆ ನಿರ್ಧರಿಸಿದ್ದಾರೆ.
ಅಲ್ಲದೆ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೆ.ಸುರೇಶ್ ಅವರನ್ನು ವರ್ಗಾವಣೆಗೊಳಿಸಿದ್ದು, ಅಧೀಕ್ಷಕ (ಎಸ್ಪಿ) ಎ.ಎಂ.ಮ್ಯಾಗೇರಿ ಹಾಗೂ ಸಹಾಯಕ ಅಧೀಕ್ಷಕ (ಎಎಸ್‌ಪಿ) ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸಲಾಗಿದೆ.
ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ (ಚೀಫ್ ಸೂಪರಿಂಟೆಂಡೆಂಟ್) ಹುದ್ದೆಗೆ ಐಪಿಎಸ್ ಅಧಿಕಾರಿ ಅನ್ಶುಕುಮಾರ್ ಅವರನ್ನು ನೇಮಿಸಲಾಗಿದೆ. ಅನ್ಶುಕುಮಾರ್ ಅವರು ಈ ಹಿಂದೆ ಕೂಡ ಕಾರಾಗೃಹ ಇಲಾಖೆ ಕೇಂದ್ರ ಕಚೇರಿಯಲ್ಲಿ ಎಸ್‌ಪಿಯಾಗಿದ್ದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ವಿಶೇಷ ಸೌಲಭ್ಯ ಪ್ರಕರಣ ಹಿನ್ನೆಲೆಯಲ್ಲಿ ಸೋಮವಾರ ನಗರದ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಎಡಿಜಿಪಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚನೆ ಕುರಿತು ಮಾಹಿತಿ ನೀಡಿದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ಎಲ್ಲ ಜೈಲುಗಳ ವ್ಯವಸ್ಥೆಯಲ್ಲಿ ಸುಧಾರಣೆಗೆ ನಿರ್ಧರಿಸಲಾಗಿದೆ. ಅಲ್ಲದೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ಕುರಿತು ವಿಚಾರಣೆ ನಡೆಸಿ ಕ್ರಮ ಜರುಗಿಸುತ್ತೇವೆ. ಇದಕ್ಕಾಗಿ ಎಡಿಜಿಪಿ ಆರ್.ಹಿತೇಂದ್ರ ನೇತೃತ್ವದಲ್ಲಿ ಸಶಸ್ತ್ರ ಮೀಸಲು ಪಡೆಯ (ಕೆಎಸ್‌ಆರ್‌ಪಿ) ಐಜಿಪಿ ಸಂದೀಪ್ ಪಾಟೀಲ್ ಹಾಗೂ ಎಸ್ಪಿಗಳಾದ ರಿಷ್ಯಂತ್, ಅಮರನಾಥ ರೆಡ್ಡಿ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.
ಈ ಸಮಿತಿಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ನಿರ್ದೇಶಿಸಿದ್ದೇನೆ. ಸಮಿತಿ ವರದಿ ಆಧರಿಸಿ ಕಾರಾಗೃಹಗಳ ಆಡಳಿತ ವ್ಯವಸ್ಥೆಗೆ ಬದಲಾವಣೆಗೆ ನಿರ್ಧರಿಸಲಾಗಿದೆ. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ಕೂಡ ಈ ಸಮಿತಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೆರವು ನೀಡಲಿದ್ದಾರೆ. ಈ ವರದಿಯನ್ನು ಬಹಿರಂಗಪಡಿಸುತ್ತೇವೆ ಎಂದು ಮಾಹಿತಿ ನೀಡಿದರು.
ಕೇಂದ್ರ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಎಲ್ಲ ಕಾರಾಗೃಹಗಳ ಸಿಸಿಟಿವಿ ಮೇಲ್ವಿಚಾರಣೆಗೆ ನಿಯಂತ್ರಣ ಕೊಠಡಿ (ಕಮಾಂಡ್ ಸೆಂಟರ್) ಸ್ಥಾಪಿಸಲಾಗುತ್ತದೆ. ಪ್ರತಿ ತಿಂಗಳು ಕಾರಾಗೃಹಗಳಿಗೆ ಎಡಿಜಿಪಿ ಹಾಗೂ ಎಐಜಿಪಿಗಳು ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದ್ದೇನೆ ಎಂದು ಸಚಿವರು ಹೇಳಿದರು.
ಐದು ವರ್ಷಗಳಿಂದ ಒಂದೇ ಕೇಂದ್ರ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ-ಸಿಬ್ಬಂದಿ ವರ್ಗಾವಣೆ ಮಾಡಲಾಗುತ್ತದೆ. ಮಂಗಳೂರು ಹಾಗೂ ಬೆಂಗಳೂರಿನ ಪರಪ್ಪನ ಕೇಂದ್ರ ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆಯಿಂದ ತೊಂದರೆಯಾಗುತ್ತಿದೆ ಎಂದು ಆ ಜೈಲುಗಳ ಸುತ್ತಮುತ್ತಲಿನ ಸ್ಥಳೀಯರು ಆಕ್ಷೇಪಿಸಿದ್ದಾರೆ. ಹೀಗಿದ್ದರೂ ಜೈಲಿನಲ್ಲಿ ಕೈದಿಗಳು ಹೇಗೆ ಮೊಬೈಲ್ ಬಳಸುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಮೊಬೈಲ್ ಪೂರೈಕೆದಾರರನ್ನು ಪತ್ತೆ ಹಚ್ಚಬೇಕು ಹಾಗೂ ಜಾಮರ್ ತಾಂತ್ರಿಕ ದೋಷ ನಿವಾರಣೆಗೆ ಕ್ರಮ ಜರುಗಿಸುವಂತೆ ನಿರ್ದೇಶಿಸಿದ್ದೇನೆ ಎಂದರು.
ಈ ಸಭೆಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ಆಂತರಿಕ ಭದ್ರತಾ ವಿಭಾಗದ (ಎಡಿಜಿಪಿ) ಚಂದ್ರಶೇಖರ್ ಉಪಸ್ಥಿತರಿದ್ದರು.
ನೇಮಕಾತಿಗೆ ಅಸ್ತು: ಸಚಿವರು
ರಾಜ್ಯ ಕಾರಾಗೃಹ ಇಲಾಖೆಗೆ ವೀಕ್ಷಕರು 983 (ವಾರ್ಡನ್‌ಗಳು), 15 ಜೈಲರ್‌ಗಳು ಹಾಗೂ 17 ಸಹಾಯಕ ಅಧೀಕ್ಷಕರು (ಎಎಸ್‌ಪಿ)ಗಳ ನೇಮಕಾತಿಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅದರಲ್ಲಿ ತಕ್ಷಣವೇ 197 ವೀಕ್ಷಕರು, 17 ಜೈಲರ್‌ಗಳು ಹಾಗೂ ಮೂರು ಎಎಸ್‌ಪಿಗಳ ನೇಮಕಾತಿಗೆ ಸಮ್ಮತಿಸಲಾಗಿದೆ ಎಂದು ಗೃಹ ಸಚಿವರು ಹೇಳಿದರು.
ಪರಪ್ಪನ ಅಗ್ರಹಾರ ಜೈಲಿಗೆ ಐಪಿಎಸ್
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ (ಚೀಫ್ ಸೂಪರಿಂಟೆಂಡೆಂಟ್) ಹುದ್ದೆಗೆ ಐಪಿಎಸ್ ಅಧಿಕಾರಿಯನ್ನು ನೇಮಿಸಲಾಗುತ್ತದೆ. ಇದಕ್ಕಾಗಿ ಕಾರಾಗೃಹ ಇಲಾಖೆಯ ಅಧಿಕಾರಿ-ಸಿಬ್ಬಂದಿ ನೇಮಕಾತಿ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಇದುವರೆಗೆ ಬಂಧೀಖಾನೆ ಇಲಾಖೆಯ ಮುಖ್ಯಸ್ಥ ಹಾಗೂ ಕೇಂದ್ರ ಕಚೇರಿಯ ಆಡಳಿತ ವಿಭಾಗದ ಎಸ್ಪಿ ಹುದ್ದೆಗೆ ಐಪಿಎಸ್ ಅಧಿಕಾರಿಗಳಿರುತ್ತಿದ್ದರು. ಈಗ ಕೇಂದ್ರ ಕಾರಾಗೃಹ ಮುಖ್ಯಸ್ಥ ಹುದ್ದೆಗೆ ಐಪಿಎಸ್ ಅಧಿಕಾರಿ ನೇಮಕವಾಗಲಿದೆ. ಇನ್ನು ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಕಾರಾಗೃಹಗಳ ಮುಖ್ಯಸ್ಥ ಹುದ್ದೆಗೆ ಕಾರಾಗೃಹ ಇಲಾಖೆಯ ವೃಂಧದ ಅಧಿಕಾರಿಗಳ ನೇಮಕಕ್ಕೆ ಮಾತ್ರ ಅವಕಾಶವಿತ್ತು. ಈ ನಿಯಮ ಬದಲಾವಣೆಗೆ ಸರ್ಕಾರ ಮುಂದಾಗಿದೆ.
ವಿಡಿಯೋ ಸೋರಿಕೆ ಹಿಂದೆ
ಧನ್ವೀರ್ ಕೈವಾಡ ಶಂಕೆ:
ನಟನ ತೀವ್ರ ವಿಚಾರಣೆ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿನ ಕೈದಿಗಳಿಗೆ ವಿಐಪಿ ಸವಲತ್ತು ಕಲ್ಪಿಸಿದ ವಿಡಿಯೋ ಬಹಿರಂಗದ ಹಿಂದೆ ಕನ್ನಡ ನಟ ಧನ್ವೀರ್ ಕೈವಾಡದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಧನ್ವೀರ್ ಅವರನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸೋಮವಾರ ವಶಕ್ಕೆ ಪಡೆದು ಸುದೀರ್ಘವಾಗಿ ವಿಚಾರಣೆ ನಡೆಸಿ ಕಳುಹಿಸಿದ್ದಾರೆ. ಈ ವೇಳೆ ತನಗೆ ಯಾವುದೇ ಮಾಹಿತಿ ಇಲ್ಲ. ನನಗೂ ಜೈಲ್ ವಿಡಿಯೋ ಬಹಿರಂಗಕ್ಕೂ ಸಂಬಂಧವಿಲ್ಲ ಎಂದು ಧನ್ವೀರ್ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ