
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಎರಡನೇ ಆರೋಪಿ ಶಿವಕುಮಾರ್ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಬುಧವಾರ ನಡೆದ ಪ್ರಕರಣದ ವಿಚಾರಣೆ ವೇಳೆ ಹಾಜರಿದ್ದ ಶಿವಕುಮಾರ್ ತನ್ನನ್ನು ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಿದರು. ಬಳಿಕ ನ್ಯಾಯಾಲಯ ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸೂರಜ್ ರೇವಣ್ಣ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಮೇ 16ಕ್ಕೆ ಮುಂದೂಡಿತು.
ಜೆಡಿಎಸ್ ಕಾರ್ಯಕರ್ತರೊಬ್ಬರು ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಸಂಬಂಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂರಜ್ ರೇವಣ್ಣ ಮತ್ತು ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಪೊಲೀಸರು ಜೂ.23ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಸುಮಾರು ತಿಂಗಳ ಕಾಲ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದ ಸೂರಜ್ ರೇವಣ್ಣ ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದರು.
ಮತ್ತೊಂದೆಡೆ ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ಅವರು ಸಂತ್ರಸ್ತನ ವಿರುದ್ಧವೇ ಪ್ರತಿ ದೂರು ನೀಡಿದ್ದರು. ದೂರುದಾರ 5 ಕೋಟಿ ರು.ಗೆ ಬ್ಲ್ಯಾಕ್ ಮೇಲ್ ಮಾಡಿದ್ದರು. ಹಣ ನೀಡದಿದ್ದಕ್ಕೆ ಸೂರಜ್ ರೇವಣ್ಣ ಅವರ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಮಾಡಿದ್ದಾರೆ ಎಂದು ಪ್ರತಿ ದೂರಿನಲ್ಲಿ ಆರೋಪಿಸಿದ್ದರು. ಪ್ರಕರಣದ ಗಂಭೀರತೆ ಅರಿತ ರಾಜ್ಯ ಸರ್ಕಾರವು ತನಿಖೆಗೆ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿತ್ತು.
ಇದನ್ನೂ ಓದಿ: ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣಗೆ ಮತ್ತೆ ಹಿನ್ನಡೆ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಕೈಬಿಡಲು ಕೋರ್ಟ್ ನಕಾರ
ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಪೊಲೀಸರು ಆರೋಪಿಯ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಕಾರಣ ನೀಡಿ 2025ರ ಡಿಸೆಂಬರ್‌ನಲ್ಲಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಈ ‘ಬಿ’ ರಿಪೋರ್ಟ್ ತಿರಸ್ಕರಿಸಿದ್ದ ನ್ಯಾಯಾಲಯವು, ಮರು ತನಿಖೆಗೆ ಆದೇಶಿಸಿತ್ತು. ಈ ನಡುವೆ ಸೂರಜ್ ರೇವಣ್ಣ ಈ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು.
ಇದನ್ನೂ ಓದಿ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ