
ಯಾದಗಿರಿ (ಸೆ.14): ಸೆಪ್ಟೆಂಬರ್ 17ರಂದು ನಡೆಯಲಿರುವ ಐತಿಹಾಸಿಕ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮೀಪಿಸುತ್ತಿದ್ದಂತೆಯೇ, ಈ ಭಾಗದಲ್ಲಿ ಮತ್ತೆ 'ಪ್ರತ್ಯೇಕ ರಾಜ್ಯ'ದ ಕೂಗು ಮುನ್ನೆಲೆಗೆ ಬಂದಿದೆ. ಸರ್ಕಾರದ ಮಲತಾಯಿ ಧೋರಣೆ ಹಾಗೂ ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆಯಲ್ಲಿ ಕಲ್ಯಾಣ ಕರ್ನಾಟಕವನ್ನು ಕಡೆಗಣಿಸಿರುವುದನ್ನು ಖಂಡಿಸಿ, ಉತ್ಸವದ ದಿನವೇ ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಹೋರಾಟಗಾರರು ಮುಹೂರ್ತ ನಿಗದಿ ಮಾಡಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದರೂ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಘೋರ ಅನ್ಯಾಯವಾಗಿದೆ ಎಂದು ಸ್ಥಳೀಯ ಹೋರಾಟಗಾರರು ಕಿಡಿಕಾರಿದ್ದಾರೆ. ಯಾದಗಿರಿ ಜಿಲ್ಲೆಯ ಗುರುಮಠಕಲ್, ಯಾದಗಿರಿ ಸೇರಿದಂತೆ ಬಹುತೇಕ ತಾಲೂಕುಗಳನ್ನು ಬರಪಟ್ಟಿಯಿಂದ ಕೈಬಿಟ್ಟಿರುವುದು ಜನರ ಆಕ್ರೋಶಕ್ಕೆ ತುಪ್ಪ ಸುರಿದಂತಾಗಿದೆ.
'ಯಾದಗಿರಿ ಜಿಲ್ಲೆಯ ಕೈಬಿಡಲಾದ ಉಳಿದ ಐದೂ ತಾಲೂಕುಗಳನ್ನು ಸೆಪ್ಟೆಂಬರ್ 16ರ ಒಳಗಾಗಿ ಸರ್ಕಾರ ಬರಪೀಡಿತ ಪಟ್ಟಿಗೆ ಸೇರಿಸಬೇಕು. ಇಲ್ಲವಾದಲ್ಲಿ ಸೆಪ್ಟೆಂಬರ್ 17ರಂದು ಇಡೀ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ (ಉತ್ಸವ) ಆಚರಿಸುವ ಹೊತ್ತಲ್ಲೇ, ನಾವು ಅನ್ಯಾಯವನ್ನು ವಿರೋಧಿಸಿ 'ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯದ ಧ್ವಜ' ಹಾರಿಸುತ್ತೇವೆ' ಎಂದು ಹೋರಾಟಗಾರರು ಕಡಾಖಂಡಿತವಾಗಿ ಎಚ್ಚರಿಕೆ ನೀಡಿದ್ದಾರೆ.
ಅನುದಾನ, ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳ ವಿಚಾರದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗವನ್ನು ದಶಕಗಳಿಂದಲೂ ಆಳುವ ಸರ್ಕಾರಗಳು ಕಡೆಗಣಿಸುತ್ತಲೇ ಬಂದಿವೆ. ಈಗ ನೈಸರ್ಗಿಕ ವಿಕೋಪದ ಸಂದರ್ಭದಲ್ಲೂ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸದೆ ತಾರತಮ್ಯ ಎಸಗಲಾಗುತ್ತಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಯಾದಗಿರಿಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಸಂಘಟನೆಗಳು ಸರ್ಕಾರಕ್ಕೆ ನೇರ ಸವಾಲು ಹಾಕಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ