ಕೇವಲ 25 ದಿನದಲ್ಲಿ ವಾಡಿಕೆಗಿಂತ ಶೇ.58ರಷ್ಟು ಹೆಚ್ಚು ಸುರಿದ ಹಿಂಗಾರು ಮಳೆ: 25 ಮಂದಿ ಸಾವು!

By Sathish Kumar KHFirst Published Oct 26, 2024, 3:36 PM IST
Highlights

ಕರ್ನಾಟಕದಲ್ಲಿ ಅಕ್ಟೋಬರ್ 1 ರಿಂದ 25 ರವರೆಗೆ 181 ಮಿ.ಮೀ ಮಳೆಯಾಗಿದ್ದು, ಇದು ಸರಾಸರಿಗಿಂತ 58% ಹೆಚ್ಚು. ಈ ಅತಿವೃಷ್ಟಿಯಿಂದಾಗಿ 25 ಜನರು ಸಾವನ್ನಪ್ಪಿದ್ದಾರೆ ಮತ್ತು ಗಣನೀಯ ಬೆಳೆ ಹಾನಿಯಾಗಿದೆ.

ಬೆಂಗಳೂರು (ಅ.26): ರಾಜ್ಯದಲ್ಲಿ 2024ರ ಹಿಂಗಾರು ಅವಧಿಯ ಅಕ್ಟೋಬರ್‌ 1ರಿಂದ 25ರ ವರೆಗೆ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ. ಇದೇ ಅವಧಿಯಲ್ಲಿ ಮಳೆ ಹಾನಿಯಿಂದಾಗಿ 25 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಹಿಂಗಾರು ಮಳೆ ಅಧಿಕವಾದ್ದರಿಂದ ಹಾನಿಯ ಕುರಿತು ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್‌ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ. ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್‌ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು ಎಂದು ತಿಳಿಸಿದರು.

Latest Videos

ಹಿಂಗಾರು ಅವಧಿಯಲ್ಲಿ (ಕಳೆದ 25 ದಿನಗಳಲ್ಲಿ) ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077 ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20 ಲಕ್ಷ ರೂ. ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಬೆಂಗಳೂರಿನಿಂದ 2000 ಹೆಚ್ಚುವರಿ ಬಸ್‌ ಒದಗಿಸಿದ KSRTC: ಮುಂಗಡ ಬುಕಿಂಗ್‌ಗೆ ಶೇ.10 ಡಿಸ್ಕೌಂಟ್

ಬೆಳೆ ಹಾನಿ ಕುರಿತು ಸ್ಥಳ ಪರಿಶೀಲನೆ ನಡೆಸಿದ ಆಧಾರದಲ್ಲಿ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ. ಅತಿವೃಷ್ಟಿಯಿಂದಾಗಿ ಒಟ್ಟು 74,993 ಹೆಕ್ಟೇರ್‌ ಪ್ರದೇಶದಲ್ಲಿ ಅಂದಾಜು ಕೃಷಿ ಬೆಳೆ ಹಾನಿ, 30,941ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿ ಅಂದಾಜಿಸಲಾಗಿದೆ. ಒಟ್ಟು 1,05,937ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಅಂದಾಜಿಸಲಾಗಿದೆ. ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4 ದಿನಗಳಲ್ಲಿ ಸಮೀಕ್ಷೆ  ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 551.25ಕೋಟಿ ಹಾಗೂ ತಹಶೀಲ್ದಾರ್‌ ಅವರ ಖಾತೆಯಲ್ಲಿ ರೂ. 115.71 ಕೋಟಿ ಸೇರಿದಂತೆ ಒಟ್ಟು ರೂ. 666.96 ಕೋಟಿ ಹಣ ಲಭ್ಯವಿದೆ. ಮುಂಗಾರಿನಲ್ಲಿ 80ಸಾವಿರ ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಬೆಳೆ ಪರಿಹಾರ ನೀಡಲಾಗುತ್ತಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 63,647 ಕೆರೆ, ಕಲ್ಯಾಣಿಗಳ ಅಭಿವೃದ್ದಿ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿದೆ. ಅತಿವೃಷ್ಟಿಯಿಂದಾಗಿ 12,553ಕಿಮೀ ಗ್ರಾಮೀಣ ರಸ್ತೆಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ 1106 ಸಣ್ಣ ಸೇತುವೆ, ಮೋರಿಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳಿಗೆ ಉಂಟಾಗಿರುವ ಹಾನಿ ಕುರಿತು ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನ ಕಂಪನಿಗಳಲ್ಲಿ ಕನ್ನಡಿಗ ಉದ್ಯೋಗಿಗಳೇ ಅಲ್ಪಸಂಖ್ಯಾತರು!

ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು. ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು. ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

click me!