ದೋಸ್ತಿ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್ - ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ನಡುವಣ ಪ್ರತಿಷ್ಠೆಯ ಕದನವಾಗಿರುವ 5 ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ.
ಬೆಂಗಳೂರು : ದೋಸ್ತಿ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್ - ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ನಡುವಣ ಪ್ರತಿಷ್ಠೆಯ ಕದನವಾಗಿರುವ 5 ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ.
ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಕ್ಷೇತ್ರಗಳು ಹಾಗೂ ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಸುಮಾರು 11 ಗಂಟೆ ವೇಳೆಗೆ ಫಲಿತಾಂಶದ ಚಿತ್ರಣ ದೊರಕಲಿದೆ.
ಮುಂದಿನ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ಪಾಲಿಗೆ ನಿರ್ಣಾಯಕ ಮಾತ್ರವಲ್ಲ, ಪಂಚ ಮುಖಂಡರಿಗೂ ಪ್ರತಿಷ್ಠೆಯ ಕಣವಾಗಿದೆ.
ಗೆಲುವು ಸಾಧಿಸಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾ ಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಚಿವ ಡಿ.ಕೆ. ಶಿವಕುಮಾರ್, ಶಾಸಕ ಬಿ. ಶ್ರೀರಾಮುಲು ತಮ್ಮ ರಾಜಕೀಯ ಅನುಭವವನ್ನು ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ಉಪಚುನಾವಣೆಯಲ್ಲಿ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಕಸರತ್ತು ನಡೆಸಿರುವ ಈ ಐವರು ನಾಯಕರು ಈ ಉಪಚುನಾವಣೆಯಲ್ಲಿ ತರಹೇವಾರಿ ತಂತ್ರ ಪ್ರತಿತಂತ್ರಗಳನ್ನು ಹೆಣೆಯುವ ಮೂಲಕ ಅವಿರತವಾಗಿ ಶ್ರಮಿಸಿದ್ದಾರೆ