ಕಾರವಾರಕ್ಕೆ 200 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ₹100 ಕೋಟಿ ಕೊಟ್ಟ ಸರ್ಕಾರ!

Published : May 21, 2026, 10:23 PM IST
Karnataka Cabinet Meeting

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯು ಕಾರವಾರದಲ್ಲಿ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಇದರೊಂದಿಗೆ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಾಯಿ-ಮಗು ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.

ಬೆಂಗಳೂರು (ಮೇ 21): ಉತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗೆ ಸ್ಪಂದಿಸಿದ ಸರ್ಕಾರ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (KIMS) ಆವರಣದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಇನ್ನು ಜೈಲುಗಳ ಆವರಣದಲ್ಲಿ ಪೆಟ್ರೋಲ್ ಬಂಕ್ ಹಾಗೂ ವ್ಯಾಪಾರಿ ಮಳಿಗೆ ಆರಂಭಿಸಲೂ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಆರೋಗ್ಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸಲು ಮತ್ತು ಕಾರಾಗೃಹ ಇಲಾಖೆಯ ಆದಾಯ ಹೆಚ್ಚಿಸಲು ಹಲವು ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಕಾರವಾರಕ್ಕೆ ಬಂತು 'ಸೂಪರ್ ಸ್ಪೆಷಾಲಿಟಿ' ಬಲ

ಉತ್ತರ ಕನ್ನಡ ಜಿಲ್ಲೆಯ ಜನರಿಗೆ ತುರ್ತು ಮತ್ತು ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (KIMS) ಆವರಣದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಬೃಹತ್ ಕಟ್ಟಡ ನಿರ್ಮಾಣಕ್ಕೆ ಅಂದಾಜು 100 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಇದರಿಂದ ಜಿಲ್ಲೆಯ ಜನರು ಇನ್ನು ಮುಂದೆ ಗಂಭೀರ ಕಾಯಿಲೆಗಳ ಚಿಕಿತ್ಸೆಗಾಗಿ ಮಂಗಳೂರು ಅಥವಾ ಗೋವಾಕ್ಕೆ ಅಲೆಯುವುದು ತಪ್ಪಲಿದೆ.

ಉತ್ತರ ಕರ್ನಾಟಕದಲ್ಲಿ ತಾಯಿ-ಮಗು ಆಸ್ಪತ್ರೆಗಳು

ಹೈದರಾಬಾದ್ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ಮುಂದಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಮತ್ತು ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ತಲಾ 50 ಹಾಸಿಗೆಗಳ ಸಾಮರ್ಥ್ಯದ 'ತಾಯಿ ಮತ್ತು ಮಕ್ಕಳ ಆರೋಗ್ಯ' (MCH) ಆಸ್ಪತ್ರೆಗಳನ್ನು ನಿರ್ಮಿಸಲು ಒಟ್ಟು 38 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ. ಇದು ಗ್ರಾಮೀಣ ಭಾಗದ ಮಹಿಳೆಯರಿಗೆ ಮತ್ತು ನವಜಾತ ಶಿಶುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ.

ಡಿಜಿಟಲೀಕರಣ ಮತ್ತು ನಮ್ಮ ಕ್ಲಿನಿಕ್ ಬಲವರ್ಧನೆ

ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿನ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ (ABArK) ಕ್ಲೇಮ್ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸಲು 17.85 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಲು ನಿರ್ಧರಿಸಲಾಗಿದೆ. ಇನ್ನು ರಾಜ್ಯದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 'ನಮ್ಮ ಕ್ಲಿನಿಕ್'ಗಳಿಗೆ ಅಗತ್ಯವಿರುವ ಪ್ರಯೋಗಾಲಯ ಉಪಕರಣಗಳು ಮತ್ತು ಆರ್‌ಡಿ ಕಿಟ್ (RD KIT) ಖರೀದಿಸಲು 22 ಕೋಟಿ ರೂಪಾಯಿಗಳನ್ನು 15ನೇ ಹಣಕಾಸು ಆಯೋಗದ ಅನುದಾನದಡಿ ಬಳಸಲು ಅನುಮೋದನೆ ನೀಡಲಾಗಿದೆ.

ಜೈಲಿನ ಆವರಣದಲ್ಲಿ ಪೆಟ್ರೋಲ್ ಬಂಕ್‌ಗಳು!

ಕಾರಾಗೃಹ ಇಲಾಖೆಯ ಜಮೀನನ್ನು ಸದ್ಬಳಕೆ ಮಾಡಿಕೊಳ್ಳಲು ಸರ್ಕಾರ ವಿನೂತನ ಯೋಜನೆ ರೂಪಿಸಿದೆ. ಬೆಂಗಳೂರಿನ ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ) ಮತ್ತು ಧಾರವಾಡ ಕೇಂದ್ರ ಕಾರಾಗೃಹದ ಆವರಣದಲ್ಲಿ ಪೆಟ್ರೋಲ್ ಬಂಕ್ ಹಾಗೂ ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಡೀಲರ್‌ಶಿಪ್ ಮಾದರಿಯಲ್ಲಿ ಬೆಂಗಳೂರಿನಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ಮತ್ತು ಧಾರವಾಡದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (HPCL) ವತಿಯಿಂದ ಈ ಮಳಿಗೆಗಳು ಕಾರ್ಯನಿರ್ವಹಿಸಲಿವೆ. ಇದು ಸರ್ಕಾರದ ಆದಾಯ ಹೆಚ್ಚಿಸುವುದಲ್ಲದೆ, ಸುಧಾರಣಾ ಮಾರ್ಗದಲ್ಲಿರುವ ಕೈದಿಗಳಿಗೆ ಉದ್ಯೋಗಾವಕಾಶ ನೀಡುವ ಸಾಧ್ಯತೆಯೂ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಗನವಾಡಿ ಶಾಲೆ ಮಕ್ಕಳಿಗೆ ₹3000 ಕಿಟ್; ಪ್ರತಿ ಜಿಲ್ಲೆಯ 15 SSLC ಟಾಪರ್‌ಗಳಿಗೆ ಉಚಿತ ಶಿಕ್ಷಣ ಯೋಜನೆ!
ದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ ನೀಡಿದ್ದ ವಿಲ್ಸನ್ ಗಾರ್ಡನ್ ನಾಗ ರಿಲೀಸ್; ಆದರೆ, ದಾಸನಿಗೆ ಬಿಡುಗಡೆ ಭಾಗ್ಯ ಬರಲಿಲ್ಲ!