
ಬೆಂಗಳೂರು (ಜೂ.28): ದ್ವೇಷ ಹರಡಲು ಹಾಗೂ ಕೋಮು ಸಾಮರಸ್ಯ ಕದಡಲು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ (ಸುಮೊಟೋ) ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಪ್ಪಣೆ ಮಾಡಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಸಮಾಜದಲ್ಲಿ ಶಾಂತಿ ಭಂಗ ಉಂಟುವ ಶಕ್ತಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ. ದ್ವೇಷ ಪಸರಿಸಲು ಹಾಗೂ ಕೋಮು ಸಾಮರಸ್ಯ ಕದಡಲು ಪ್ರಚೋದನೆಯ ಭಾಷಣ ಮಾಡುವವರ ವಿರುದ್ಧ ದೂರುಗಳು ಸಲ್ಲಿಕೆಯಾದರೆ ಕೂಡಲೇ ಕ್ರಮ ಜರುಗಿಸಬೇಕು. ಈ ಬಗ್ಗೆ ದೂರುಗಳು ಬಾರದೆ ಹೋದರೆ ಸುಮೋಟೋ ಕೇಸ್ ದಾಖಲಿಸುವಂತೆ ಸೂಚಿಸಿದ್ದೇನೆ ಎಂದರು.
ಪೊಲೀಸ್ ಠಾಣೆಯಲ್ಲಿ ಬಲಾಢ್ಯನಾಗಲಿ ಅಥವಾ ದೀನನಾಗಲಿ ಎಲ್ಲರಿಗೂ ಒಂದೇ ನ್ಯಾಯ ಸಿಗಬೇಕು. ಪೊಲೀಸರ ತನಿಖೆಯ ಗುಣಮಟ್ಟ ಸುಧಾರಣೆಯಾಗಬೇಕು. ಅಪರಾಧ ಎಸಗಿದವರಿಗೆ ತಕ್ಕ ಶಿಕ್ಷೆಯಾಗಬೇಕು. ಹಿರಿಯ ಅಧಿಕಾರಿಗಳು ನಿಯಮಿತವಾಗಿ ಠಾಣೆಗಳಿಗೆ ಭೇಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ದ್ವೇಷ ಭಾಷಣ ಬಗ್ಗೆ ಕ್ರಮ ಕೈಗೊಳ್ಳದ ಅಧಿಕಾರಿ ಮೇಲೆ ಕ್ರಮ: ಸಿಎಂ ಎಚ್ಚರಿಕೆ
ಬೆಂಗಳೂರು: ಮಂಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಪ್ರದೇಶದ ಕೋಮು ದ್ವೇಷದ ಕೊಲೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿ ಮುಖ್ಯಮಂತ್ರಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು.ಸಾರ್ವಜನಿಕ ಸಭೆಗಳಲ್ಲಿ ದ್ವೇಷ ಭಾಷಣ ಮಾಡುವವರು ಹಾಗೂ ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ, ನೀವು (ಪೊಲೀಸರು) ಕ್ರಮ ತೆಗೆದುಕೊಳ್ಳದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಸಭೆಯಲ್ಲಿ ಮುಖ್ಯಮಂತ್ರಿ ಅವರು ಎಚ್ಚರಿಕೆ ಕೊಟ್ಟಿದ್ದಾರೆ ಎನ್ನಲಾಗಿದೆ.ಕೋಮು ಘರ್ಷಣೆ ಮತ್ತು ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚಾಗಿ ಆಗುತ್ತಿವೆ. ಇತರೆ ಜಿಲ್ಲೆಗಳಲ್ಲಿ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು ಮೂಲದಿಂದಲೇ ಪತ್ತೆ ಹಚ್ಚಿ. ಅವನು ಯಾರೇ ಇದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಕಟ್ಟು ನಿಟ್ಟಾಗಿ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ