CM Siddaramaiah: ಹೊಸಬಾಳೆ ಹೇಳಿಕೆ ಬಗ್ಗೆ ಮೋದಿ ನಿಲುವೇನು ಸ್ಪಷ್ಟಪಡಿಸಲಿ ? : ಸಿಎಂ ಸಿದ್ದರಾಮಯ್ಯ ಆಗ್ರಹ

Kannadaprabha News   | Kannada Prabha
Published : Jun 28, 2025, 01:12 PM ISTUpdated : Jun 28, 2025, 01:15 PM IST
CM siddaramaiah

ಸಾರಾಂಶ

ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ತೆಗೆದುಹಾಕುವಂತೆ ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ. 

ಬೆಂಗಳೂರು (ಜೂ.28) : ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದ ಕಿತ್ತುಹಾಕಬೇಕೆಂಬ ಆರ್‌ಎಸ್ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯವನ್ನು ದೇಶದ ಜನತೆಯ ಮುಂದಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆಡಳಿತಾರೂಢ ಬಿಜೆಪಿಯ ‘ಹೈಕಮಾಂಡ್’ ನಿಂದಲೇ ಈ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಪ್ರಧಾನಿ ಮೋದಿ ಅವರು ತಮ್ಮ ಅಭಿಪ್ರಾಯವನ್ನು ದೇಶದ ಜನತೆ ಮುಂದಿಡಬೇಕು. ಈ ಬಗ್ಗೆ 140 ಕೋಟಿ ಜನರ ಪರವಾಗಿ ನಾನು ಆಗ್ರಹಿಸುತ್ತಿದ್ದೇನೆ ಎಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ 400 ಸ್ಥಾನಗಳನ್ನು ಗೆದ್ದರೆ ಸಂವಿಧಾನವನ್ನು ಬದಲಾಯಿಸುವುದಾಗಿ ಬಿಜೆಪಿಯ ಕೆಲವು ಕೂಗುಮಾರಿಗಳಿಂದ ಘೋಷಣೆ ಮಾಡಿಸಿದ್ದ ಬಿಜೆಪಿ ಅದಕ್ಕೆ ತಕ್ಕ ಉತ್ತರ ಪಡೆದಿದೆ. ನಮ್ಮ ನಡುವಿನ ಒಂದಷ್ಟು ಜಾತ್ಯತೀತ ನಿಲುವಿನ ಪಕ್ಷಗಳು ಅಧಿಕಾರದ ಲಾಲಸೆಯಿಂದ ರಾಜಿ ಮಾಡಿಕೊಳ್ಳದೆ ಇದ್ದರೆ ಬಿಜೆಪಿ ಇಂದು ವಿರೋಧಪಕ್ಷದ ಸ್ಥಾನದಲ್ಲಿ ಕೂರಬೇಕಾಗಿತ್ತು. ಇದರ ನಂತರವೂ ಬಿಜೆಪಿ ತನ್ನ ಕುಟಿಲ ಪ್ರಯತ್ನವನ್ನು ಮುಂದುವರಿಸಿರುವುದು ವಿಷಾದನೀಯ.

ಈಗಲೂ ಎಚ್ಚೆತ್ತುಕೊಳ್ಳದೆ ತಮ್ಮ ಕುಟಿಲ ಪ್ರಯತ್ನವನ್ನು ಹೀಗೆಯೇ ಮುಂದುವರಿಸಿದರೆ ದೇಶದ ಪ್ರಜಾಪ್ರಭುತ್ವಪ್ರೇಮಿ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಭಾರತ ಸಮಾಜವಾದಿ ಮತ್ತು ಜಾತ್ಯತೀತ ದೇಶ ಎಂದು ಎಲ್ಲರೂ ಅರ್ಥಮಾಡಿಕೊಂಡಿದ್ದರು. ಹೀಗಾಗಿ ಸಂವಿಧಾನದ ಮೂಲಪೀಠಿಕೆಯಲ್ಲಿ ಈ ಪದಗಳನ್ನು ಪ್ರತ್ಯೇಕವಾಗಿ ಸೇರಿಸುವ ಅಗತ್ಯ ಪ್ರಾರಂಭದ ದಿನಗಳಲ್ಲಿ ಬರಲಿಲ್ಲ. ಆದರೆ ನಂತರದ ದಿನಗಳಲ್ಲಿ ಪ್ರಜಾಪ್ರಭುತ್ವದ ಮೂಲ ಆಶಯಗಳಾದ ಜಾತ್ಯತೀತತೆ ಮತ್ತು ಸಮಾಜವಾದದ ಮೇಲೆಯೇ ಆರ್‌ಎಸ್‌ಎಸ್‌ ಮತ್ತು ಜನಸಂಘಗಳು ದಾಳಿ ಮಾಡಲು ಶುರುಮಾಡಿದಾಗ ಪ್ರಧಾನಿ ಇಂದಿರಾ ಗಾಂಧಿಯವರು 42ನೇ ತಿದ್ದುಪಡಿ ಮೂಲಕ ಈ ಪದಗಳನ್ನು ಸೇರಿಸಬೇಕಾಯಿತು ಎನ್ನುವುದನ್ನು ಇಡೀ ದೇಶ ಇಂದು ಒಪ್ಪಿಕೊಂಡಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಂವಿಧಾನವನ್ನು ಆರ್‌ಎಸ್‌ಎಸ್‌ ವಿರೋಧಿಸುತ್ತಿರುವುದು ಹೊಸ ಬೆಳವಣಿಗೆಯೇನಲ್ಲ. ಭಾರತೀಯ ಜನತಾಪಕ್ಷ ಮತ್ತು ಅದರ ಮಾತೃಸಂಸ್ಥೆಯಾಗಿರುವ ಆರ್‌ಎಸ್‌ಎಸ್‌ ಸಂವಿಧಾನವನ್ನು ಅದರ ರಚನೆಯ ದಿನದಿಂದಲೇ ವಿರೋಧಿಸುತ್ತಾ ಬಂದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ್ದ ನಾಲ್ಕೇ ದಿನಕ್ಕೆ ಅದನ್ನು ವಿರೋಧಿಸಿ ಆರ್‌ಎಸ್‌ಎಸ್‌ ಮುಖವಾಣಿ ಆರ್ಗನೈಸರ್ ಪತ್ರಿಕೆ ಸಂಪಾದಕೀಯವನ್ನು ಬರೆದಿತ್ತು.

‘ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಭಾರತೀಯತೆಯಾಗಲಿ, ಪುರಾತನ ಭಾರತದ ಕಟ್ಟುಕಟ್ಟಳೆಗಳಾಗಲಿ ಇಲ್ಲ, ಇದೇ ಈ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ’ ಎಂದು ಆರ್ಗನೈಸರ್ ಪತ್ರಿಕೆ ಸಂಪಾದಕೀಯ ಬರೆದಿತ್ತು. ಜತೆಗೆ ಹಲವು ಆರ್‌ಎಸ್‌ಎಸ್ ನಾಯಕರು ಬಹಿರಂಗವಾಗಿ ಸಂವಿಧಾನ ವಿರೋಧಿಸಿದ್ದರು. ಈ ವಿರೋಧದ ಹೇಳಿಕೆಗಳನ್ನು ಈವರೆಗೆ ಬಿಜೆಪಿ ತಿರಸ್ಕರಿಸಿಲ್ಲ. ಬಿಜೆಪಿ ಈ ಕಳ್ಳಾಟವನ್ನು ದೇಶದ ಪ್ರಜ್ಞಾವಂತ ಜನ ಅರ್ಥಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!