
ಬೆಂಗಳೂರು (ಆಗಸ್ಟ್.10): ವೋಟರ್ ಐಡಿ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪ ಹಿನ್ನೆಲೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಕೇಂದ್ರ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ. ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಲಾಗಿದೆ. ಈ ದೂರಿಗೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಸಹಿ ಹಾಕಿದ್ದಾರೆ.ರಾಜಣ್ಣ ಅವರ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದು, ವಿರೋಧ ಪಕ್ಷಗಳಿಗೆ ಪ್ರಚೋದನೆ ನೀಡುವಂತಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಭೇಟಿ ನೀಡಿ ಮತಗಳ್ಳತನದ ವಿರುದ್ಧ ಧ್ವನಿ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸಚಿವರು, ಸಂಸದರು, ಶಾಸಕರು ಹಾಗೂ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರತಿಭಟಿಸಿದ್ದಾರೆ. ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕರಾದ ರಾಜಣ್ಣ ಅವರೇ ಈ ಪ್ರತಿಭಟನೆಯನ್ನೇ ಪ್ರಶ್ನಿಸಿ, ಮತಗಳ್ಳತನದ ಬಗ್ಗೆ ಗೊಂದಲ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ ಎಂದು ರಾಜಣ್ಣ ಹೇಳಿಕೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜಣ್ಣ ಅವರ ಈ ಗೊಂದಲಮಯ ಹೇಳಿಕೆಗಳು ಪಕ್ಷದ ಒಗ್ಗಟ್ಟಿಗೆ ಧಕ್ಕೆ ತಂದಿವೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಹಿರಿಯ ಮಂತ್ರಿಯಾಗಿದ್ದರೂ ರಾಜಣ್ಣ ಪದೇ ಪದೇ ವಿವಾದಾತ್ಮಕ ಹೇಳಿಕೆಗಳ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್ ಪಕ್ಷವು ರಾಜಣ್ಣ ಅವರ ವರ್ತನೆಯನ್ನು ಬಹುಕಾಲ ಸಹಿಸಿಕೊಂಡಿದ್ದು, ಇದೀಗ ಕೂಡಲೇ ಶಿಸ್ತು ಕ್ರಮ ಕೈಗೊಂಡು ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಉಚ್ಛಾಟಿಸಬೇಕೆಂದು ಕಾರ್ಯಕರ್ತರು ವಿನಂತಿಸಿದ್ದಾರೆ. ಈ ಘಟನೆಯಿಂದ ಕಾಂಗ್ರೆಸ್ ಪಕ್ಷದ ಒಳಗಿನ ಒಡಕು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಣ್ಣ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬುದು ಕುತೂಹಲ ಕೆರಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ