ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ ಪ್ರಕಟ,ಕರ್ನಾಟಕದ ಯಾತ್ರಾರ್ಥಿಗಳಿ ಸಹಾಯ ಧನ

-ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಅವರಿಂದ ಅನುಮೋದನೆ
- ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ
-1 ನೇ ಏಪ್ರಿಲ್‌ 2022 ರಿಂದ ಪೂರ್ವಾನ್ವಯವಾಗುವಂತೆ ಘೋಷಣೆ


ಬೆಂಗಳೂರು, (ಜೂನ್‌ 27): ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದಾರೆ. 

 ಈ ಬಗ್ಗೆ ಇಂದು(ಸೋಮವಾರ) ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ ಭವ್ಯತೆಯನ್ನ ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಿಂದ ಅಭಿವೃದ್ದಿಗೊಳಿಸಲಾಗಿದೆ. ಈ ಭವ್ಯ ಕಾಶಿಯ ಯಾತ್ರೆ ಬಹಳಷ್ಟು ಜನರ ಜೀವನದ ಅಭಿಲಾಷೆಯಾಗಿರುತ್ತದೆ. ಈ ಯಾತ್ರೆಯ ಅಭಿಲಾಷೆಯನ್ನು ಪೂರೈಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ಯೋಜನೆಯನ್ನು ಪ್ರಾರಂಭಿಸಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಇದಕ್ಕೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಆಯವ್ಯಯದಲ್ಲಿ ಘೋಷಣೆ ಮಾಡಿದ್ದರು. 

Latest Videos

ಕರ್ನಾಟಕದ 30 ಸಾವಿರ ಭಕ್ತರಿಗೆ ಉಚಿತ ಕಾಶಿ ಯಾತ್ರೆ: ಸಚಿವೆ ಜೊಲ್ಲೆ

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿಗಳಂತೆ ಸಹಾಯಧನ ನೀಡುವ ಯೋಜನೆಗೆ ಮಾರ್ಗಸೂಚಿಗಳನ್ನು ಇಂದು ಅಂತಿಮಗೊಳಿಸಿದ್ದು, ಸರಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್‌ 1, 2022 ಕ್ಕೆ ಪೂರ್ವಾನ್ವಯವಾಗುವಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ಸೂಕ್ತ ದಾಖಲಾತಿಗಳೊಂದಿಗೆ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾನ್ಯ ಸಚಿವರು ಹೇಳಿದ್ದಾರೆ. 

ಮಾರ್ಗಸೂಚಿಯ ಅಂಶಗಳು: 
1. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ ರೂ 5,೦೦೦/-ಗಳನ್ನು ಸಹಾಯ ಧನವಾಗಿ ನೀಡಲಾಗುವುದು.
2. ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈ ಉದ್ದೇಶಕ್ಕಾಗಿ ಕೆಳಕಂಡ ಯಾವುದಾದರೂ ಒಂದು ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು.

• ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನೀಡಿರುವ "ಗುರುತಿನ ಚೀಟಿ' ಅಥವಾ 
• ಆಧಾರ್‌ ಗುರುತಿನ ಚೀಟಿ ಅಥವಾ 
• ರೇಷನ್ ಕಾರ್ಡ್

3. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್‌ 1 ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು, 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸುವುದು,

4. ದಿನಾಂಕ: 01-o4- 2022ರಿಂದ ದಿನಾಂಕ: 30-6-2022 ರವರೆಗೆ ಕಾಶಿ ಶ್ರೀ ವಿಶ್ವನಾಥ ಸ್ವಾಮಿಯ ದರ್ಶನಕ್ಕೆ ತೆರಳಿದ ಯಾತ್ರಾರ್ಥಿಗಳು ಸಂಬಂಧಿಸಿದ ದಾಖಲಾತಿ (ಕಾಶಿ ಶ್ರೀ ವಿಶ್ವನಾಥ ಸ್ವಾಮಿ ದೇವಾಲಯಕ್ಕೆ ತೆರಳಲು ಮುಂಗಡವಾಗಿ ಕಾಯ್ದಿರಿಸಿದ ಮತ್ತು ಹಿಂದಿರುಗಿದ ಬಗ್ಗೆ ಕಾಯ್ದಿರಿಸಿದ ಟಿಕೇಟ್, ಛಾಯಾಚಿತ್ರ ಪೂಜಾ ರಶೀದಿ, ಅಥವಾ ದೇವಾಲಯಕ್ಕೆ ತೆರಳಿ ಮರಳಿದ ಬಗ್ಗೆ ಯಾವುದಾದರೂ ಇತರೆ ದಾಖಲೆ)ಗಳನ್ನು ಮುದ್ದಾಂ ಆಗಿ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಇವರ ಕಛೇರಿಗೆ ಸಲ್ಲಿಸತಕ್ಕದ್ದು.

5. ದಿನಾಂಕ: ೦೧.೦೭.೨೦೨೨ರಿಂದ ಅನ್ವಯವಾಗುವಂತೆ ಯಾತ್ರಾರ್ಥಿಗಳು ಕಾಶಿ ಯಾತ್ರೆ ಕೈಗೊಂಡಿರುವ ಬಗ್ಗೆ ಸಂಬಂಧಿಸಿದ ದಾಖಲೆಗಳನ್ನು ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ಕಛೇರಿಯಿಂದ ಬಯೋಮೆಟ್ರಿಕ್‌ ದೃಢೀಕರಣದೊಂದಿಗೆ, ಆನ್‌ಲೈನ್‌ ಅಥವಾ ಮುದ್ಧಾಂ/ನೊಂದಾಯಿತ ಅಂಚೆ ಮೂಲಕ, ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಇವರ ಕಛೇರಿಗೆ ಸಲ್ಲಿಸತಕ್ಕದ್ದು ಒಂದು ವೇಳೆ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ದೃಢೀಕರಣ ಇಲ್ಲದಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

6. ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ, ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸಲಾಗುವುದಿಲ್ಲ.

7. ಸರ್ಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳ ಬ್ಯಾಂಕ್‌ ಖಾತೆಯು ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಾಗಿರಬೇಕು ಮತ್ತು ಕಡ್ಡಾಯವಾಗಿ ಆಧಾರ್ ಲಿಂಕ್‌ ಆಗಿರತಕ್ಕದ್ದು,

8. ಸದರಿ ಸಹಾಯಧನವನ್ನು ಯಾತ್ರೆಯನ್ನು ಪೂರ್ಣಗೊಳಿಸಿ ಸಂಬಂಧಿಸಿದ ದಾಖಲೆಗಳನ್ನು ನಿಗಧಿತ ನಮೂನೆ ಅರ್ಜಿಯನ್ನು ಭರ್ತಿ ಮಾಡಿ ಒದಗಿಸಿದ ನಂತರ ಸದರಿ ಅರ್ಜಿಗಳನ್ನು ಧಾರ್ಮಿಕ ದತ್ತಿ ಆಯುಕ್ತರು ಸ್ವೀಕರಿಸಿ, ಪರಿಶಿಲಿಸಿ ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದು.

ಸದರಿ ಯೋಜನೆಯ ಜೊತೆಯಲ್ಲಿ “ಭಾರತ್‌ ಗೌರವ್‌” ಯೋಜನೆ ಅಡಿಯಲ್ಲಿ ಕಾಶಿ ಯಾತ್ರೆಗೆ ವಿಶೇಷ ರೈಲು 
30 ಸಾವಿರ ಜನರಿಗೆ ತಲಾ 5 ಸಾವಿರದಂತೆ ಸಹಾಯಧನ ನೀಡುವ ಯೋಜನೆ ಅಲ್ಲದೆ, ಮತ್ತೊಂದು ವಿಶೇಷ ಯೋಜನೆಯನ್ನು ಮುಜರಾಯಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ. 

ಕೇಂದ್ರ ಸರಕಾರದ “ಭಾರತ ಗೌರವ” ಯೋಜನೆಯ ಅಡಿಯಲ್ಲಿ ಮುಜರಾಯಿ ಇಲಾಖೆಯ ರೈಲ್ವೇ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಾಶಿಗೆ ವಿಶೇಷ ರೈಲಿನ ಕಾರ್ಯಾಚರಣೆ ಸದ್ಯದಲ್ಲೇ ಪ್ರಾರಂಭಿಸಲು ಸಿದ್ದತೆಗಳನ್ನು ಭರದಿಂದ ಮಾಡಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ರೈಲ್ವೇ ಇಲಾಖೆಯಲ್ಲಿ ನೊಂದಣಿ ಮಾಡಿಸಿದ್ದು ಇನ್ನು ಕೆಲವೇ ತಿಂಗಳುಗಳಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ ಎಂದು ಮಾನ್ಯ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

click me!