ಅರಣ್ಯ ಭೂಮಿ ಸರ್ವೆಗೆ ಜಂಟಿ ಸಮೀಕ್ಷೆ, 1 ವರ್ಷದಲ್ಲಿ ಕಸ್ತೂರಿರಂಗನ್ ವರದಿ ಕೇಂದ್ರಕ್ಕೆ ಸಲ್ಲಿಸಲು ರಾಜ್ಯ ನಿರ್ಧಾರ

Gowthami K   | Kannada Prabha
Published : Nov 16, 2026, 09:54 AM IST
Ramalinga Reddy

ಸಾರಾಂಶ

ಇನ್ನು ಒಂದು ವರ್ಷದಲ್ಲಿ ಕಸ್ತೂರಿರಂಗನ್‌ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು. ಅರಣ್ಯ ಭೂಮಿ ಸರ್ವೆಗೆ ಜಂಟಿ ಸಮೀಕ್ಷೆ ಬಳಿಕ ಅಂತಿಮ ವರದಿ ಸಿದ್ದಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ.

ಮಂಗಳೂರು: ಕಸ್ತೂರಿರಂಗನ್‌ ವರದಿ ಜಾರಿ ವಿಚಾರದಲ್ಲಿ ಅರಣ್ಯ ಭೂಮಿಗೆ ಸಂಬಂಧಿಸಿದ ಗಡಿ ಹಾಗೂ ವಿಸ್ತೀರ್ಣದ ಗೊಂದಲಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಮಟ್ಟದ ಸಮಿತಿ ಹಾಗೂ ರಾಜ್ಯಮಟ್ಟದಲ್ಲಿ ಪ್ರತ್ಯೇಕ ಸಮಿತಿ ರಚಿಸಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಣ್ಯ ಇಲಾಖೆ ಮತ್ತು ಸರ್ವೇ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ, ಒಂದು ವರ್ಷದೊಳಗೆ ಅಂತಿಮ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಪಿಲಿಕುಳ ನಿಸರ್ಗಧಾಮದಲ್ಲಿ ಅವರು ಭಾನುವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಹಿಂದೆ ವಿಧಾನಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದ್ದು, ಎಲ್ಲ ಪಕ್ಷಗಳೂ ಬೆಂಬಲ ಸೂಚಿಸಿವೆ. ಆದರೆ, ಈವರೆಗೆ ಭೌತಿಕ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ಅಂತಿಮ ವರದಿ ಸಲ್ಲಿಸುವ ಕಾರ್ಯ ನಡೆದಿರಲಿಲ್ಲ. ಈ ಬಾರಿ ಸರ್ಕಾರ ಭೌತಿಕ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಈಗಾಗಲೇ ಬಹುತೇಕ ದಾಖಲೆಗಳು ಸರ್ಕಾರದ ಬಳಿ ಇವೆ. ಆದರೂ, ಅಂತಿಮಗೊಳಿಸುವ ಮೊದಲು ಮತ್ತೊಮ್ಮೆ ಜಂಟಿ ಸಮೀಕ್ಷೆ ನಡೆಸಿ ವ್ಯತ್ಯಾಸಗಳಿದ್ದರೆ ಸರಿಪಡಿಸಲಾಗುವುದು. ಇದರಿಂದ ಭವಿಷ್ಯದಲ್ಲಿ ಯಾವುದೇ ಗೊಂದಲ ಅಥವಾ ಆಕ್ಷೇಪಗಳಿಗೆ ಅವಕಾಶವಿರುವುದಿಲ್ಲ ಎಂದವರು ಸ್ಪಷ್ಟಪಡಿಸಿದರು. .

ಪರ್ಯಾಯ ಭೂಮಿ ಕೊಟ್ಟರೆ ಮಾತ್ರ ಮೇಕೆದಾಟುಗೆ ಅರಣ್ಯ ಜಾಗ:

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಯೋಜನೆಗೆ ಅಗತ್ಯವಿರುವ ಸುಮಾರು 13 ಸಾವಿರ ಎಕರೆ ಅರಣ್ಯ ಭೂಮಿಗೆ ಪರ್ಯಾಯ ಭೂಮಿ ಒದಗಿಸಿದರೆ ಮಾತ್ರ ಅದನ್ನು ಬಿಟ್ಟು ಕೊಡಲು ಸಾಧ್ಯ. ಯಾವುದೇ ಕಾರಣಕ್ಕೂ ಪರ್ಯಾಯ ಭೂಮಿ ಇಲ್ಲದೆ ಒಂದು ಅಡಿಯಷ್ಟು ಅರಣ್ಯ ಭೂಮಿಯನ್ನೂ ಬೇರೆ ಇಲಾಖೆಗೆ ಅಥವಾ ಖಾಸಗಿ ಉದ್ದೇಶಕ್ಕೆ ನೀಡಲು ಸಾಧ್ಯವಿಲ್ಲ. ಇದು ದೇಶಾದ್ಯಂತ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನೀತಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಅರಣ್ಯ ಪ್ರದೇಶಗಳ ಸುತ್ತಲಿನ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದಂತೆ ಕೆಲವೆಡೆ ಒಂದು ಕಿ.ಮೀ.ವ್ಯಾಪ್ತಿ ಅನ್ವಯವಾಗುತ್ತದೆ. ಹಳೆಯ ಗ್ರಾಮಗಳಿರುವ ಪ್ರದೇಶಗಳಲ್ಲಿ ಮಾತ್ರ ನಿಯಮಾವಳಿಗಳ ಪ್ರಕಾರ ವಿನಾಯಿತಿ ಪಡೆದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು. ಇದಕ್ಕೆ ಸಂಬಂಧಪಟ್ಟಂತೆ ವಿಭಾಗೀಯ ಆಯುಕ್ತರ ಅನುಮತಿಯ ಅಗತ್ಯವಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka Latest News Live: ಅರಣ್ಯ ಭೂಮಿ ಸರ್ವೆಗೆ ಜಂಟಿ ಸಮೀಕ್ಷೆ, 1 ವರ್ಷದಲ್ಲಿ ಕಸ್ತೂರಿರಂಗನ್ ವರದಿ ಕೇಂದ್ರಕ್ಕೆ ಸಲ್ಲಿಸಲು ರಾಜ್ಯ ನಿರ್ಧಾರ
ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಕೃತ್ಯ! ಸಂಬಳ ಕೇಳಿದ್ದಕ್ಕೆ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ