Anti Conversion Bill ಕರ್ನಾಟಕ ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಸಹಿ

By Kannadaprabha NewsFirst Published May 18, 2022, 4:06 AM IST
Highlights

- ಕೆಲ ಸಂಘಟನೆಗಳು, ಕ್ರೈಸ್ತರ ವಿರೋಧದ ನಡುವೆಯೇ ಒಪ್ಪಿಗೆ
- ಮೇಲ್ಮನೆಯಲ್ಲಿ ಬಾಕಿಯಿದ್ದ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿ
- ಬಲವಂತದ ಮತಾಂತರಕ್ಕೆ 10 ವರ್ಷ ಜೈಲು

ಬೆಂಗಳೂರು(ಮೇ.18): ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆಯ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಧಿಕೃತವಾಗಿ ಕಾಯ್ದೆ ಜಾರಿಗೆ ಬಂದಿದೆ.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ರಾಜ್ಯಪಾಲರು ಮಂಗಳವಾರ ಅಂಕಿತ ಹಾಕಿದ್ದಾರೆ. ಕೆಲ ಸಂಘಟನೆಗಳು ಹಾಗೂ ಕೈಸ್ತ್ರ ಸಮುದಾಯದ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಕಾಯ್ದೆಯನ್ನು ಅನುಷ್ಠಾನ ಮಾಡಲಾಗಿದೆ. ಕಳೆದ ವರ್ಷ ಡಿಸೆಂಬರ್‌ ತಿಂಗಳಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರಗೊಂಡಿತ್ತು. ಆದರೆ, ವಿಧಾನಪರಿಷತ್‌ನಲ್ಲಿ ಆಡಳಿತಾರೂಢ ಬಿಜೆಪಿಯ ಸಂಖ್ಯಾಬಲ ಇಲ್ಲದಿರುವ ಹಿನ್ನೆಲೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವ ಸ್ವರೂಪದಲ್ಲಿಯೇ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿದೆ.

Anti Conversion Bill ಮತಾಂತರ ನಿಷೇಧ ಸುಗ್ರೀವಾಜ್ಞೆ ತಿರಸ್ಕಾರಕ್ಕೆ ಸಿದ್ದು ಆಗ್ರಹ!

ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿರುವ ಉದ್ದೇಶಿತ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಪರಿಷತ್‌ನಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗುತ್ತದೆ.

ಬಲವಂತದ ಮತಾಂತರಕ್ಕೆ 10 ವರ್ಷ ಜೈಲು
ಉದ್ದೇಶಿತ ಕಾಯ್ದೆಯಲ್ಲಿ ಬಲವಂತ, ವಂಚನೆ, ಒತ್ತಾಯ ಮತ್ತು ಆಮಿಷದ ಮೂಲಕ ನಡೆಸುವ ಮತಾಂತರ ಮತ್ತು ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧ ಇದೆ. ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳು ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್‌ಐಆರ್‌ ದಾಖಲಿಸುವ ಅವಕಾಶ ಇದೆ. ಬಲವಂತ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ ಮತ್ತು 25 ಸಾವಿರ ರು. ದಂಡ ವಸೂಲಾತಿಗೆ ಅವಕಾಶ ಇದೆ. ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್‌ಸಿ/ಎಸ್‌ಟಿ ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶ ಇದೆ. ಅಷ್ಟೇ ಅಲ್ಲ 50 ಸಾವಿರ ರು. ದಂಡ ವಸೂಲಿಗೂ ಅವಕಾಶ ಇದೆ.

Anti Conversion Bill: ಮತಾಂತರ ನಿಷೇಧ ಕಾಯ್ದೆ ಬಸವ ತತ್ವಕ್ಕೆ ವಿರುದ್ಧ: ಡಿಕೆಶಿ

ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಎರಡು ತಿಂಗಳು ಮೊದಲು ಜಿಲ್ಲಾಧಿಕಾರಿಗೆ ತಿಳಿಸಬೇಕು. ಮತಾಂತರ ಮಾಡುವ ವ್ಯಕ್ತಿಯೂ ಜಿಲ್ಲಾಧಿಕಾರಿಗೆ 30 ದಿನಗಳ ಮೊದಲೇ ಮಾಹಿತಿ ನೀಡಬೇಕು. ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ 30 ದಿನಗಳೊಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ. ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲಧರ್ಮ, ಮತಾಂತರಗೊಂಡ ಧರ್ಮ ಮತ್ತು ಇತರೆ ಮಾಹಿತಿಗಳನ್ನು ಜಿಲ್ಲಾಧಿಕಾರಿಗೆ ನೀಡಬೇಕು. ಅಪರಾಧಕ್ಕೆ ನೆರವು ಮತ್ತು ಪ್ರೇರಣೆ ನೀಡಿದ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. 

ಭಾರಿ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರಲಿದೆ.

click me!