ರಾಜ್ಯದ 15 ಜಿಲ್ಲೆಗಳ 55 ತಾಲೂಕುಗಳು ಪ್ರವಾಹ ಪೀಡಿತ

By Web DeskFirst Published Nov 8, 2019, 9:05 AM IST
Highlights

ರಾಜ್ಯ ಸರ್ಕಾರದಿಂದ 55 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿ ಹಾಗೂ ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾದ ಆದೇಶಗಳ ಅನುಸಾರ ನೆರೆ ಪರಿಹಾರ ಕಾರ್ಯಗಳನ್ನು ಆಯಾ ಜಿಲ್ಲಾಡಳಿತಗಳು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಬೆಂಗಳೂರು [ನ.08]:  ಕಳೆದ ಅಕ್ಟೋಬರ್ ತಿಂಗಳಲ್ಲಾದ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಎದುರಿಸಿದ 15 ಜಿಲ್ಲೆಗಳ 55 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ.

ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿರುವ ಸರ್ಕಾರ, ಅಕ್ಟೋಬರ್ ನಲ್ಲಾದ ಅತಿವೃಷ್ಟಿಯಿಂದ ಜೀವಹಾನಿ, ಬೆಳೆಹಾನಿ ಹಾಗೂ ಮೂಲ ಸೌಕರ್ಯಗಳು ಹಾನಿಯಾಗಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಈ 55 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿ ಹಾಗೂ ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾದ ಆದೇಶಗಳ ಅನುಸಾರ ನೆರೆ ಪರಿಹಾರ ಕಾರ್ಯಗಳನ್ನು ಆಯಾ ಜಿಲ್ಲಾಡಳಿತಗಳು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪ್ರಸಕ್ತ ವರ್ಷ ಮುಂಗಾರಿನ ಆಗಸ್ಟ್ ತಿಂಗಳಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗಗಳ ವಿವಿಧ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿದ್ದ 22 ಜಿಲ್ಲೆಗಳ 103 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇ ಶಗಳೆಂದು ಸರ್ಕಾರ ಈಗಾಗಲೇ ಘೋಷಿಸಿತ್ತು. ಇದೀಗ, ಅಕ್ಟೋಬರ್ ತಿಂಗಳು ಪ್ರವಾಹಕ್ಕೀಡಾದ 55 ತಾಲೂಕುಗಳನ್ನು ಪ್ರವಾಹಪೀಡಿತ ಪ್ರದೇಶಗಳೆಂದು ಹೊಸ ಆದೇಶ ಮಾಡಿದೆ.

ಯಾವ ತಾಲೂಕುಗಳು 
ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕು, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ, ಗುಬ್ಬಿ, ಹೊಳಲ್ಕೆರೆ, ಹೊಸದುರ್ಗ, ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ, ಹೊನ್ನಾಳಿ, ಬಳ್ಳಾರಿ ಜಿಲ್ಲೆಯ ಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಗೋಕಾಕ್, ಖಾನಾಪುರ, ಬಾಗಲಕೋಟೆ ಜಿಲ್ಲೆಯ ಮುಧೋಳ, ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು, ಶಿಗ್ಗಾಂವ್, ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ, ಸೊರಬ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ತರೀಕೆರೆ, ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರ ಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಪುತ್ತೂರು, ಉಡುಪಿ ಜಿಲ್ಲೆಯ ಕಾರ್ಕಳ, ಉಡುಪಿ, ಕುಂದಾಪುರ, ಉತ್ತರ ಕನ್ನಡ ಜಿಲ್ಲೆಯ ಅಂಕೋಲ, ಭಟ್ಕಳ, ಹಳಿಯಾಳ, ಹೊನ್ನಾವರ, ಕಾರವಾರ, ಕುಮಟ, ಸಿದ್ದಾಪುರ, ಶಿರಸಿ, ಜೊಯಿಡಾ
ಮತ್ತು ಯಲ್ಲಾಪುರ ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ.

click me!