ಟಿಪ್ಪು ಜಯಂತಿಗೆ ತೊಂದರೆ ಮಾಡಿದರೆ ಹುಷಾರ್‌ : ಡಿಸಿಎಂ ವಾರ್ನಿಂಗ್

By Web DeskFirst Published Nov 5, 2018, 9:54 AM IST
Highlights

ಟಿಪ್ಪು ಜಯಂತಿಯನ್ನು ಸರ್ಕಾರ ಆಚರಣೆ ಮಾಡಿಯೇ ಮಾಡುತ್ತದೆ. ಇದಕ್ಕೆ ಯಾರೇ  ತೊಂದರೆ ಮಾಡಿದರೂ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು :  ಪ್ರತಿ ವರ್ಷದಂತೆ ಈ ವರ್ಷವೂ ಟಿಪ್ಪು ಜಯಂತಿ ಆಚರಿಸಲು ಸರ್ಕಾರ ಬದ್ಧವಾಗಿದೆ. ಟಿಪ್ಪು ಜಯಂತಿ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಯಾರೇ ಪ್ರಯತ್ನಿಸಿದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್‌ ಎಚ್ಚರಿಕೆ ನೀಡಿದ್ದಾರೆ.

ಭಾನುವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು 2019ರ ಲೋಕಸಭಾ ಚುನಾವಣೆ ಲಾಭಕ್ಕಾಗಿ ಅನಗತ್ಯವಾಗಿ ಟಿಪ್ಪು ಜಯಂತಿಯನ್ನು ವಿರೋಧ ಮಾಡುತ್ತಿದ್ದಾರೆ. ಅವರು ಎಷ್ಟೇ ವಿರೋಧಿಸಿದರೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಟಿಪ್ಪುವಿನ ಜಯಂತಿಯನ್ನು ಸರ್ಕಾರ ಮಾಡುತ್ತದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ರೀತಿಯ ಎಚ್ಚರಿಕೆಯನ್ನೂ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕದಂತೆ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಪತ್ರದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಿಷ್ಟಾಚಾರದ ಪ್ರಕಾರ ಅವರ ಹೆಸರು ಹಾಕಲಾಗಿದೆ. ಬರುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದರು.

ಭದ್ರತೆ ಬಗ್ಗೆ ಸಭೆ:

ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಸಂಬಂಧ ಸೋಮವಾರ ಪೊಲೀಸ್‌ ವರಿಷ್ಠರ ಜತೆ ಸಭೆ ನಡೆಸಲಿದ್ದೇವೆ. ಸಶಸ್ತ್ರ ಮೀಸಲು ಪಡೆ ಹಾಗೂ ನಗರ ಸಶಸ್ತ್ರ ಮೀಸಲು ಪಡೆಯನ್ನು ಕಾನೂನು ಸುವ್ಯವಸ್ಥೆ ಕಾಪಾಡಲು ಬಳಸಿಕೊಳ್ಳಲಾಗುವುದು ಎಂದು ಹೇಳಿದರು.

click me!