ಸರ್ಕಾರದ 'ಶಕ್ತಿ ಯೋಜನೆ'ಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲು 1,000 ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಲಾಗುವುದು.
ಬೆಂಗಳೂರು (ಫೆ.05): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೊಳಿಸಿದ ಮೊದಲ ಗ್ಯಾರಂಟಿ 'ಶಕ್ತಿ ಯೋಜನೆ'ಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ. ಮುಂದಿನ ವರ್ಷದೊಳಗೆ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲು 1,000 ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ ಬಸ್ಸುಗಳ (ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್) ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಈ ವರ್ಷ 1,000 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು, ಇಂದು 100 ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಹಾಗೂ ಬಿಎಂಟಿಸಿ ಸೇರಿದಂತೆ ಒಟ್ಟು 4 ಕಾರ್ಪೋರೇಷನ್‍ಗಳು ಬಸ್ಸುಗಳ ಸೇವೆಯನ್ನು ಒದಗಿಸುತ್ತಿವೆ. ಕಳೆದ ನಾಲ್ಕು ವರ್ಷಗಳಿಂದ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಈಗ ನಾವು ಹೊಸ ಬಸ್‌ಗಳ ಸೇರ್ಪಡೆಗೆ ಚಾಲನೆ ನೀಡಿದ್ದೇವೆ ಎಂದರು.
ಬೆಂಗಳೂರು ಎಳೇನಹಳ್ಳಿ ಕೆರೆ ಮುಚ್ಚುತ್ತಿರುವ ರಿಯಲ್ ಎಸ್ಟೇಟ್ ಉದ್ಯಮಿಗಳು: ಬಿಬಿಎಂಪಿ ಅಧಿಕಾರಿಗಳೇ ಶಾಮೀಲಾಗಿದ್ದೀರಾ?
ರಾಜ್ಯದಲ್ಲಿ ಕೋವಿಡ್ ಸಂದರ್ಭದಲ್ಲಿ 3,800 ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ ಸಂಸ್ಥೆಗೆ 5,800 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. ಈ ರಾಜ್ಯದ ಜನರಿಗೆ ಸುರಕ್ಷಿತ ಮತ್ತು ಸರಾಗ ಪ್ರಯಾಣ ಮಾಡಲು ಅಗತ್ಯ ಅನುಕೂಲಗಳನ್ನು ಮಾಡಿಕೊಡಲಿದೆ. ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ವಿಮಾ ಸೌಲಭ್ಯವನ್ನು 1 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಕರ್ತವ್ಯದ ವೇಳೆ ಮೃತಪಡುವ ಸಿಬ್ಬಂದಿಗಳಿಗೆ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಚುನಾವಣಾ ಪೂರ್ವದ ಭರವಸೆ ಈಡೇರಿಸಲಾಗಿದೆ: ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಕ.ರ.ಸಾ.ಸಂ ಮತ್ತು ಇತರೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸುತ್ತೇವೆ ಎಂದು ಹೇಳಿದ್ದೆವು. ಬೆಲೆಯೇರಿಕೆ, ಹಣದುಬ್ಬರು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವ ಪರಿಸ್ಥಿತಿಯಲ್ಲಿ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಿದ್ದೇವೆ ಎಂದರು.
ದಕ್ಷಿಣ ಭಾರತದಲ್ಲಿ ಚೆನ್ನಾಗಿ ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಿದ್ದೇವೆ; ಆದ್ರೂ ಅನುದಾನದಲ್ಲೇಕೆ ತಾರತಮ್ಯ: ಸಿದ್ದರಾಮಯ್ಯ
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಗುಬ್ಬಿ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಮೊದಲಾದವರು ಉಪಸ್ಥಿತರಿದ್ದರು.