
ಬೆಂಗಳೂರು (ಜ.22): ರಾಜ್ಯ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಬೃಹತ್ ಸಿಹಿಸುದ್ದಿ ನೀಡಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳ ಕಾಲ ಸಡಿಲಿಸಲು ಸಚಿವ ಸಂಪುಟ ಇಂದು ಮಹತ್ವದ ಅನುಮೋದನೆ ನೀಡಿದೆ.
ಈ ಸಡಿಲಿಕೆಯು ಮುಂದಿನ 31/12/2027 ರವರೆಗೆ ಹೊರಡಿಸಲಾಗುವ ಎಲ್ಲಾ ಸರ್ಕಾರಿ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯವಾಗಲಿದೆ. ಕಳೆದ ಕೆಲವು ವರ್ಷಗಳಿಂದ ಕೋವಿಡ್ ಹಾಗೂ ಇತರೆ ಕಾರಣಗಳಿಂದ ನೇಮಕಾತಿ ವಿಳಂಬವಾಗಿದ್ದರಿಂದ ವಯೋಮಿತಿ ಮೀರಿದ್ದ ಲಕ್ಷಾಂತರ ಅಭ್ಯರ್ಥಿಗಳಿಗೆ ಈ ನಿರ್ಧಾರವು ಸಂಜೀವಿನಿಯಾದಂತಾಗಿದೆ.
ಇದೇ ಸಚಿವ ಸಂಪುಟ ಸಭೆಯಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಸಂಬಂಧಿಸಿದ ಮತ್ತೊಂದು ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳ 22 ಮಠಗಳಿಗೆ ಜಾಗ ಮಂಜೂರು ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ.
ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದ ಸರ್ವೇ ನಂಬರ್ 57 ಮತ್ತು 58 ರಲ್ಲಿರುವ ಸರ್ಕಾರಿ ಜಮೀನನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುವುದು. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಮತ್ತು ಶೋಷಿತ ವರ್ಗಗಳ ಮಠಗಳ ಶೈಕ್ಷಣಿಕ ಹಾಗೂ ಧಾರ್ಮಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಈ ಮಂಜೂರಾತಿ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ನಿರ್ಧಾರವು ಮಠಾಧೀಶರು ಹಾಗೂ ಆಯಾ ಸಮುದಾಯಗಳ ಜನರ ದಶಕಗಳ ಬೇಡಿಕೆಗೆ ಸಿಕ್ಕ ಜಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ