ಬೆಂಗಳೂರು (ಮೇ.17): ಕೋವಿಡ್‌ನಿಂದ ಚೇತರಿಸಿಕೊಂಡ ಕೆಲ ರೋಗಿಗಳಲ್ಲಿ ಕಂಡುಬರುತ್ತಿರುವ ಮಾರಣಾಂತಿಕ ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆ ನೀಡಲು ರಾಜಧಾನಿಯ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಬ್ಲಾಕ್ ಫಂಗಸ್ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಾಗಲೇ ನೇತ್ರ ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದೇವೆ. ಸೋಮವಾರದಿಂದಲೇ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಚಿಕಿತ್ಸೆ ನೀಡಲು ಆರಂಭಿಸಲಾಗುತ್ತಿದೆ. ನಂತರ ಎಲ್ಲ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗುವುದು ಎಂದರು.
'ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವ್ಯವಸ್ಥೆ' .
ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಸ್ಟಿರಾಯಿಡ್ ಅಧಿಕವಾಗಿ ಬಳಸಿರುವವರು ಮತ್ತು ಮಧುಮೇಹ ಹೆಚ್ಚಿರುವವರಿಗೆ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಇದೆ. ಮೂಗಿನಿಂದ ಆರಂಭವಾಗುವ ಈ ರೋಗ ಕಣ್ಣಿಗೆ ಹಾನಿ ಮಾಡುತ್ತದೆ. ದೃಷ್ಟಿಕೂಡ ಕಳೆದುಕೊಳ್ಳುವ ಅಪಾಯವಿರುತ್ತದೆ. ಸರಿಯಾದ ಚಿಕಿತ್ಸೆ ನೀಡದಿದ್ದರೆ ಸಾವು ಕೂಡ ಬರಬಹುದು ಎಂದು ಹೇಳಿದರು.
ಸಿಎಂ ಜೊತೆ ಚರ್ಚೆ: ಬ್ಲಾ ಕ್ ಫಂಗಸ್ ಕುರಿತು ರಾಜ್ಯದಲ್ಲಿ ನೇತ್ರ ತಜ್ಞರು ಸೇರಿದಂತೆ ಮೂರ್ನಾಲ್ಕು ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗುತ್ತಿದೆ. ಇದಕ್ಕೆ ಯಾವ ಬಗೆಯ ಚಿಕಿತ್ಸೆ ನೀಡಬೇಕೆಂದು ಈ ಸಮಿತಿ ಸಲಹೆ ನೀಡಲಿದೆ. ಬ್ಲ್ಯಾಕ್ ಫಂಗಸ್‌ಗೆ ಸತತ ಏಳು ವಾರಗಳ ಕಾಲ ಚಿಕಿತ್ಸೆ ನೀಡಬೇಕಿದ್ದು, 2ರಿಂದ 3 ಲಕ್ಷ ರು. ಖರ್ಚಾಗುತ್ತದೆ. ಚಿಕಿತ್ಸೆಯನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಇದಕ್ಕೆ ಬೇಕಿರುವ ಆಂಪೊಟೆರಿಸಿನ್ ಔಷಧಿಯನ್ನು ಕೇಂದ್ರ ಸರ್ಕಾರ ನೀಡಲಿದ್ದು, 20 ಸಾವಿರ ಡೋಸ್‌ಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.
ಯಾರೂ ವೈದ್ಯರ ಬಳಿ ಸಲಹೆ ಪಡೆಯದೆ ಸ್ಟಿರಾಯಿಡ್ ಮೊದಲಾದ ಔಷಧಿ ಪಡೆಯಬಾರದು. ವೈದ್ಯರು ಕೂಡ ಜನರಿಗೆ ರೋಗ ನಿರೋಧಕ ಹೆಚ್ಚಿಸುವ ಔಷಧಿಯನ್ನು ಅನಗತ್ಯವಾಗಿ ನೀಡಬಾರದು ಎಂದು ಸಚಿವ ಡಾ. ಸುಧಾಕರ್ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಗ್ರಾಮಗಳಲ್ಲಿ ಸೋಂಕು ಹೆಚ್ಚಳ: ‘ಸೆಮಿ ಲಾಕ್’ ವಿಸ್ತರಣೆ ಪಕ್ಕಾ! ...
ಡೆಂಘೀ ಬಗ್ಗೆ ಮುಂಜಾಗ್ರತೆ ಅಗತ್ಯ : ಸೊಳ್ಳೆಯಿಂದ ಹರಡುವ ಡೆಂಘೀ ರೋಗ ರಾಜ್ಯದಲ್ಲಿ ಪ್ರತಿ ವರ್ಷ 15ರಿಂದ 20 ಸಾವಿರ ಜನರಿಗೆ ಬರುತ್ತಿದೆ. ಮುಂಗಾರು ಆರಂಭವಾಗುತ್ತಿರುವುದರಿಂದ ಮಳೆಗಾಲದಲ್ಲಿ ಸೊಳ್ಳೆ ಹುಟ್ಟದಂತೆ ಜನರು ಕ್ರಮ ವಹಿಸಬೇಕು. ನೀರು ಸಂಗ್ರಹವಾಗುವ ಕಡೆಗಳಲ್ಲಿ ಎಚ್ಚರ ವಹಿಸಬೇಕು. ಒಂದು ವಾರ ಬಿಟ್ಟರೆ ಸೊಳ್ಳೆಗಳು ಹುಟ್ಟಿರೋಗ ಹರಡುತ್ತದೆ. ಈ ಸೊಳ್ಳೆ ಹಗಲಿನಲ್ಲಿ ಹೆಚ್ಚಾಗಿ ಕಚ್ಚಿ ವೈರಾಣು ಹರಡುತ್ತದೆ. ಮಹಿಳೆಯರು ಮತ್ತು ಮಕ್ಕಳ ವಿಚಾರದಲ್ಲಿ ಹೆಚ್ಚು ಎಚ್ಚರ ವಹಿಸಬೇಕು. ಯಾವುದೇ ರೀತಿ ಜ್ವರ, ಮೈ ಕೈ ನೋವು, ವಾಂತಿ, ಸ್ನಾಯುಸೆಳೆತ ಕಂಡುಬರುವುದು ಡೆಂಘೀ ಲಕ್ಷಣಗಳು. ಯಾವುದೇ ರೋಗ ಲಕ್ಷಣ ಕಂಡುಬಂದರೆ ವೈದ್ಯರ ಬಳಿ ಪರೀಕ್ಷೆ ಮಾಡಿಸಬೇಕು ಎಂದು ಡಾ. ಸುಧಾಕರ್ ಮನವಿ ಮಾಡಿದ್ದಾರೆ.
ಕಡಿಮೆಯಾಗದ ಪಾಸಿಟಿವಿಟಿ ದರ: ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರಕರಣ ಕಡಿಮೆ ಆಗಿರುವುದರಿಂದ ರಾಜ್ಯದ ಒಟ್ಟು ಪ್ರಕರಣ ಕಡಿಮೆ ಬರುತ್ತಿದೆ. ಆದರೆ ಹೊರ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚೇ ಇದೆ. ಈ ಕುರಿತು ಪ್ರತಿಪಕ್ಷ ನಾಯಕರಿಗೆ ಮನವರಿಕೆ ಮಾಡಲಾಗುವುದು. ಮೆಡಿಕಲ್ ಕಿಟ್‌ಗಳನ್ನು ಕೊಡುವಾಗ ಐಸಿಎಂಆರ್ ಮಾರ್ಗಸೂಚಿಯಡಿಯಲ್ಲಿ ಬರುವ ಔಷಧಿಗಳನ್ನು ಮಾತ್ರ ನೀಡಬೇಕು ಎಂದು ಹೇಳಿದರು
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona