
ಬೆಂಗಳೂರು (ಡಿ.06): ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರೈತರಿಗೆ ‘ಒಂದು ಜಿಲ್ಲೆ, ಒಂದು ಉತ್ಪನ್ನ’ ತರಬೇತಿ ನೀಡಲು ಕೃಷಿ ಇಲಾಖೆ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ)ದ ಮುಖ್ಯಸ್ಥರು ಮತ್ತು ವಿಜ್ಞಾನಿಗಳ ಜತೆ ವಿಧಾನಸೌಧದಲ್ಲಿ ಸಭೆ ನಡೆಸಿದರು.
‘ಆತ್ಮನಿರ್ಭರ ಭಾರತ’ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಸಣ್ಣ ಆಹಾರ ಸಂಸ್ಕರಣ ಉದ್ಯಮಗಳನ್ನು ಪ್ರೋತ್ಸಾಹಿಸುವ ಯೋಜನೆಯನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ವಿಶೇಷವಾಗಿ ಮೆಕ್ಕೆಜೋಳ, ತೊಗರಿ, ಸಿರಿಧಾನ್ಯಗಳ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡುವ ಕುರಿತು ಸಮಾಲೋಚನೆ ನಡೆಸಿದರು.
ಮುಂದಿನ ವರ್ಷ ಜ.11ರಿಂದ ಮಾ.30ರವರೆಗೆ ತರಬೇತಿ ನಡೆಸಲು ಉದ್ದೇಶಿಸಲಾಗಿದೆ. ಕೃಷಿ ಇಲಾಖೆಯ ಕೆಪೆಕ್ (ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮ) ಮೂಲಕ 50 ಮಂದಿಯಂತೆ ಪ್ರತಿ ತಾಲೂಕಿನಿಂದ ಇಬ್ಬರು ರೈತರನ್ನು ಆಯ್ಕೆ ಮಾಡಿ, ಒಂದು ಗುಂಪು ರಚಿಸಿ ಒಟ್ಟು 500 ಜನರಿಗೆ ತರಬೇತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಆರು ದಿನ ನಡೆಯುವ ಈ ತರಬೇತಿಯಲ್ಲಿ ಕೊನೆಯ ಎರಡು ದಿನಗಳ ಕಾಲ ಮಾರ್ಕೆಟಿಂಗ್, ಬ್ರಾಂಡ್‌ಗಾಗಿ ಹೆಚ್ಚು ಆದ್ಯತೆ ನೀಡಬೇಕು ಎಂದು ಸಚಿವರು ಸಲಹೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಅಂಸಘಟಿತ ವಲಯದಲ್ಲಿನ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು, ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು, ಸ್ವಸಹಾಯ ಸಂಘಗಳು ಮತ್ತು ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಇಲಾಖೆಗಳು ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆಯಡಿ ಉತ್ಪನ್ನಗಳನ್ನು ಗುರುತಿಸಲಿವೆ. ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆಸಂಬಂಧ ತರಬೇತಿ ನೀಡಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ