
ಬೆಂಗಳೂರು (ಸೆ.6): ರಾಜ್ಯದಲ್ಲಿ ಆಯೋಜಿಸುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. 1953ರ ಭಾಷಾ ಅಧಿನಿಯಮ ಹಾಗೂ ಇತ್ತೀಚೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರ್ಕಾರಕ್ಕೆ ಬರೆದ ಪತ್ರದ ಆಧಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯಂತೆ ಮುಖ್ಯ ಕಾರ್ಯದರ್ಶಿಗಳು ಈ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಉಲ್ಲೇಖಿಸಿರುವಂತೆ, ಕನ್ನಡವನ್ನು ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು ಕನ್ನಾಟಕ ರಾಜ್ಯ ಭಾಷಾ ಅಧಿನಿಯಮ-1953ರಲ್ಲಿ ನಿರ್ದಿಷ್ಟಗೊಳಿಸಲಾಗಿರುತ್ತದೆ. ಕರ್ನಾಟಕದಲ್ಲಿ ಕನ್ನಡವು ಆಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆಯಾಗಿದೆ. ಕನ್ನಡವನ್ನು ರಾಜ್ಯದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ರಚನೆಯಾಗಿರುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರ ಮುಖೇನ 6.8.2022ರಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯನ್ನು ಬಳಸದಿರುವ ಬಗ್ಗೆ ಪ್ರಸ್ತಾಪಿಸಿರುತ್ತಾರೆ. ಈ ಬಗ್ಗೆ ವೇದಿಕೆ ಮೇಲೆ ಅಳವಡಿಸಲಾಗುವ ಪರದೆಗಳಲ್ಲಿ ಫಲಕಗಳಲ್ಲಿ ಹಾಗೂ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರಕಾರದ ಎಲ್ಲಾ ಇಲಾಖೆಯ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಕೋರಿರುತ್ತಾರೆ.
ಕನ್ನಡ ಶಾಲೆ ಮುಚ್ಚಿದರೆ ಮಾತೃಭಾಷೆಗೆ ಕುತ್ತು: ಡಾ.ಮಹೇಶ್ ಜೋಷಿ
ಕನ್ನಡ ಭಾಷೆ ನಮಗೆ ಆದ್ಯತೆ ಆಗಿರಬೇಕೇ ಹೊರತು ಆಯ್ಕೆಯಾಗಿರಬಾರದು ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆಯನ್ವಯ ಇನ್ನು ಮುಂದೆ ರಾಜ್ಯದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸತಕ್ಕದ್ದೆಂದು ಈ ಮೂಲಕ ಸೂಚಿಸಿದೆ. ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶ ಹೊರಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ