
ಬೆಂಗಳೂರು (ಮಾ.01): ಟ್ಯಾಟೂ ಹಾಕುವ ಇಂಕ್ನಿಂದ ಮಾರಣಾಂತಿಕ ಕಾಯಿಲೆ ಹಾಗೂ ಗಂಭೀರ ಚರ್ಮರೋಗ ಬರುವ ಸಾಧ್ಯತೆಯಿದೆ. ಹೀಗಾಗಿ ಕೇಂದ್ರ ಸರ್ಕಾರ ಇಂಕ್ ಅನ್ನು ನಿಷೇಧಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ಗುಣಮಟ್ಟದ ಕುರಿತಂತೆ ಇತ್ತೀಚಿನ ಬೆಳವಣಿಗೆಗಳ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಟ್ಯಾಟೂ ಇಂಕ್‌ಗೆ ಸಂಬಂಧಿಸಿದಂತೆ ಯಾವುದೇ ಗುಣಮಟ್ಟ ಮಾನದಂಡ ಇರುವುದಿಲ್ಲ.
ಔಷಧ ಮತ್ತು ಕಾಂತಿವರ್ಧಕ ಅಧಿನಿಯಮಗಳ ವ್ಯಾಪ್ತಿಗೆ ಇದು ಒಳಪಟ್ಟಿಲ್ಲ. ಈ ಟ್ಯಾಟೂ ಇಂಕ್ನಲ್ಲಿ ಇರುವ ರಾಸಾಯನಿಕ ಮತ್ತು ಇತರೆ ಅಂಶಗಳು ಚರ್ಮದ ಮೂಲಕ ದೇಹವನ್ನು ಪ್ರವೇಶಿಸುತ್ತವೆ. ಇದರಿಂದ ಅನೇಕ ಚರ್ಮ ರೋಗಗಳು ಉಲ್ಬಣಗೊಳ್ಳುವ ಸಾಧ್ಯತೆಗಳಿವೆ. ಈ ಕುರಿತಂತೆ ನಿಯಮಗಳನ್ನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ಟ್ಯಾಟೂ ಇಂಕ್ ಅನ್ನು ಕಾಂತಿ ವರ್ಧಕಗಳ ಅಡಿಯಲ್ಲಿ ತರಲು ಹಾಗೂ ಬಿಐಎಸ್ ಪ್ರಕಾರ ಮಾನದಂಡಗಳನ್ನು ರೂಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಇಡ್ಲಿಯಲ್ಲಿ ಡೆಡ್ಲಿ ಕ್ಯಾನ್ಸರ್: ಪ್ಲಾಸ್ಟಿಕ್ ಬಳಕೆ ನಿಷೇಧಿಸುತ್ತಿದ್ದೇವೆ ಎಂದ ಸಚಿವ ದಿನೇಶ್ ಗುಂಡೂರಾವ್
ಇನ್ನು ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಕಾರಣ ಎನ್ನಲಾಗಿದ್ದ ರಿಂಗರ್ ಲ್ಯಾಕ್ಟೇಟ್ ದ್ರಾವಣಕ್ಕೆ ಸಂಬಂಧಿಸಿದಂತೆ 246 ಬ್ಯಾಚ್‌ನ ಮಾದರಿಗಳಲ್ಲಿ 113 ಬಳಕೆಗೆ ಅರ್ಹವಲ್ಲವೆಂದು ಘೋಷಿತವಾಗಿದೆ. ಈ ಸಂಬಂಧ ತಯಾರಿಕಾ ಸಂಸ್ಥೆಯಾದ ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ವಿರುದ್ಧ ವಿವಿಧ ನ್ಯಾಯಾಲಯಗಳಲ್ಲಿ 9 ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಇನ್ನುಳಿದ 25 ಪ್ರಕರಣಗಳಲ್ಲಿ ಮೊಕದ್ದಮೆ ಹೂಡಲು ಅನುಮತಿ ನೀಡಲಾಗಿದ್ದು, ಮೊಕದ್ದಮೆ ಹೂಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವಿವರಣೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ