
ಬೆಂಗಳೂರು (ಸೆ.22): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ಬಳ್ಳಾರಿ ರಸ್ತೆಯ ಅಗಲೀಕರಣಕ್ಕೆ ಕೈಗೊಳ್ಳುವ ಕ್ರಮಗಳ ಕುರಿತು ಮಾಹಿತಿ ನೀಡಿ ಮೂರು ವಾರದಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ರಸ್ತೆ ಅಗಲೀಕರಣ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮರ್ಪಣಾ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಹೊಸಮನಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ, ಅರ್ಜಿ ಕುರಿತು ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸಲ್ಲಿಸಿರುವ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ರಸ್ತೆ ಅಗಲೀಕರಣಕ್ಕೆ ಈಗಾಗಲೇ ಭೂಮಿ ನೀಡಿರುವ ಮಾಲಿಕರಿಗೆ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣ ಪತ್ರ ವಿತರಣೆಗೆ ಸಂಬಂಧಿಸಿದ ವ್ಯಾಜ್ಯ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ.
ರಸ್ತೆ ಅಗಲೀಕರಣ ಕಾಮಗಾರಿ ನಡೆಸುವ ಮುನ್ನ ಭೂ ಮಾಲಿಕರಿಗೆ ಟಿಡಿಆರ್ ನೀಡಲು ದೊಡ್ಡ ಪ್ರಮಾಣದ ಹಣ ಅಗತ್ಯವಿದೆ. ಒಂದು ವೇಳೆ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್ ರಾಜ್ಯ ಸರ್ಕಾರದ ಪರ ತೀರ್ಪು ನೀಡಿದರೆ, ವಿತರಿಸಿದ ಟಿಡಿಆರ್ ವಸೂಲಿ ಮಾಡಲು ಕಷ್ಟವಾಗುತ್ತದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.
ಸದ್ಯ ರಾಜ್ಯ ಸರ್ಕಾರದ ಬಳಿ ಲಭ್ಯವಿರುವ ಭೂಮಿಯಲ್ಲಿ ಕೂಡಲೇ ರಸ್ತೆ ಅಗಲೀಕರಣ ಕಾಮಗಾರಿ ಪ್ರಾರಂಭಿಸಲಾಗುವುದು. ಅಗತ್ಯವಿರುವಲ್ಲಿ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ನಿರ್ಮಿಸಲು ಪರಿಶೀಲಿಸಲಾಗುವುದು. ಅರಮನೆ ಮೈದಾನದಲ್ಲಿರುವ ಕಲ್ಯಾಣ ಮಂಟಪಗಳ ಪ್ರವೇಶಕ್ಕೆ ಪರ್ಯಾಯ ಮಾರ್ಗ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.
Kempegowda International Airport: ಬೆಂಗ್ಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ಲ್ಲಿ ಅರಣ್ಯ ಘಟಕವೇ ಇಲ್ಲ..!
ಈ ಪ್ರಮಾಣ ಪತ್ರ ಪರಿಶೀಲಿಸಿದ ನ್ಯಾಯಪೀಠ, ರಸ್ತೆ ಅಗಲೀಕರಣ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಹೇಳಿದೆ, ಆದರೆ, ಸರ್ಕಾರದ ಬಳಿ ಎಷ್ಟುಭೂಮಿ ಲಭ್ಯವಿದೆ? ಎಲ್ಲಿಂದ-ಎಲ್ಲಿಯವರೆಗೆ ಮತ್ತು ಹೇಗೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟಮಾಹಿತಿ ನೀಡಿಲ್ಲ. ಆದ್ದರಿಂದ ಅಗಲೀಕರಣಕ್ಕೆ ಕೈಗೊಳ್ಳುವ ಕ್ರಮಗಳ ಕುರಿತು ವಿವರವಾದ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅ.17ಕ್ಕೆ ಮುಂದೂಡಿತು.
ತುಮಕೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸಚಿವ ನಿರಾಣಿ
ನಿತ್ಯ 75 ಸಾವಿರ ವಾಹನ ಸಂಚಾರ: ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಬಳ್ಳಾರಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಪರೀತ ವಾಹನ ದಟ್ಟಣೆ ಸಮಸ್ಯೆ ಉಂಟಾಗುತ್ತಿದೆ. 2016ರಲ್ಲಿ ಸರ್ಕಾರ ತಿಳಿಸಿರುವಂತೆ ರಸ್ತೆಯಲ್ಲಿ ನಿತ್ಯವೂ 60ರಿಂದ 75 ಸಾವಿರ ವಾಹನಗಳು ಸಂಚರಿಸುತ್ತವೆ. ಸಂಜೆ ಮತ್ತು ಬೆಳಗ್ಗೆ ಸಮಯದಲ್ಲಿ ಹೆಬ್ಬಾಳದಿಂದ ಬಿಡಿಎ ಜಂಕ್ಷನ್‌ವರೆಗೆ ವಾಹನಗಳ ಸಂಚರಿಸುವುದೇ ಕಷ್ಟವಾಗಿದೆ. ಆದ್ದರಿಂದ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ