
ಬೆಂಗಳೂರು (ಅ.12): ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗುವಂತೆ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಹಿಂದಿನ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳು ಹಾಗೂ ರಾಜ್ಯಾಧೀನ ಸೇವೆಗಳಲ್ಲಿ (ಸರ್ಕಾರಿ ಉದ್ಯೋಗ) ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ. 50 ರಿಂದ ಶೇ. 56 ಕ್ಕೆ ಏರಿಸಿ ಕಾಯ್ದೆ ಜಾರಿಗೊಳಿಸಿತ್ತು. ಈ ಕಾಯ್ದೆಯನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರಾ ಎಂಬುವವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಮೀಸಲಾತಿ ಪ್ರಮಾಣವನ್ನು ಶೇ. 50ರ ಮಿತಿಗಿಂತ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ಅನ್ನು ಪುರಸ್ಕರಿಸಿರುವ ನ್ಯಾಯಾಲಯ, ಸರ್ಕಾರದ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಈ ತೀರ್ಪಿನಿಂದಾಗಿ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಮಿತಿಯ ವಿಚಾರವಾಗಿ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಯಿದೆ. ಸರ್ಕಾರದ ಮುಂದಿನ ಕಾನೂನಾತ್ಮಕ ಹೆಜ್ಜೆಗಳು ಏನಿರಲಿವೆ ಎಂಬುದನ್ನು ಕಾದುನೋಡಬೇಕಿದೆ.
ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.50ಕ್ಕಿಂತ ಹೆಚ್ಚು ಮೀಸಲಾತಿ ಕಲ್ಪಿಸಿ 2023ರ ಜ.12 ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಮಹೇಂದ್ರ ಕುಮಾರ್ ಮಿತ್ರಾ ಸಲ್ಲಿಸಿದ್ದ ಅರ್ಜಿ ಸಲ್ಲಿಕೆ ಮಾಡಿದ್ದರು. ಪರಿಶಿಷ್ಟ ಜಾತಿಗೆ ಶೇ.15 ರಿಂದ 17 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3 ರಿಂದ ಶೇ.7ರವರೆಗೂ ಮೀಸಲು ಹೆಚ್ಚಳ ಮಾಡಿ ಒಟ್ಟು ಮೀಸಲನ್ನು 56ಕ್ಕೆ ಹೆಚ್ಚಳ ಮಾಡಲಾಗಿತ್ತು
ಬಸವರಾಜ್ ಬೊಮ್ಮಾಯಿ ಸರಕಾರ 2023ರ ಜನವರಿ 12 ರಂದು ಹೊರಡಿಸಿದ್ದ ಕಾಯಿದೆಯ ಗೆಜೆಟ್ ಅಧಿಸೂಚನೆ ಹೊರಡಿಸಿತ್ತು. ಅಧಿಸೂಚನೆ ರದ್ದು ಕೋರಿ ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಶೇ.56 ಹೆಚ್ಚಳ ಮೀಸಲಾತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ