
ಬೆಂಗಳೂರು (ಮೇ.13) : ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೃಢ ಹೆಜ್ಜೆಗಳನ್ನು ಇಟ್ಟಿದ್ದು, ದೇಶದ ಮೇಲೆ ದಾಳಿ ನಡೆಸಿದ ನೆರೆ ರಾಷ್ಟಕ್ಕೆ ಸೇನಾಪಡೆಗಳು ತಕ್ಕ ಪಾಠ ಕಲಿಸಿವೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸೋಮವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕಾಶ್ಮೀರದ ಪಹಲ್ಗಾಂನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ದೇಶದ ಪ್ರವಾಸಿಗರ ಮೇಲೆ ಪೈಶಾಚಿಕ ದಾಳಿ ನಡೆಸಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾಪಡೆಗಳು ಆ ದೇಶದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ನಾಶ ಮಾಡಿವೆ. ನೆರೆ ದೇಶದ ಸೇನೆ ಉಗ್ರ ಪೋಷಣೆ ಮಾಡಿ ದಾಳಿ ನಡೆಸಿದ್ದಕ್ಕೆ ಭಾರತ ಪ್ರಬಲ ತಿರುಗೇಟು ನೀಡಿದೆ ಎಂದು ಹೇಳಿದರು.
ಮೋದಿ ಅವರ ಧೃಢ ನಾಯಕತ್ವ ಹಾಗೂ ನಮ್ಮ ಹೆಮ್ಮೆಯ ಸೇನಾಪಡೆಗಳ ಶಕ್ತಿಯ ಮುಂದೆ ಪಾಕಿಸ್ತಾನ ಮಂಡಿಯೂರಿದೆ. ದೇಶದ ಎಲ್ಲ ಕಡೆ ಮೇಲುಗೈ ಸಾಧಿಸಿದೆ. ಪಾಕಿಸ್ತಾನಕ್ಕೆ ನಡುಕ ಉಂಟಾಗಿದ್ದು, ಉಗ್ರರ ಚಟುವಟಿಕೆಗಳಿಗೆ ಇತಿಶ್ರೀ ಹಾಡುವ ದೃಷ್ಟಿಯಿಂದ ದೇಶದ ಪ್ರಧಾನಿ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಎನ್ನುವುದು ಸರಿಯಲ್ಲ. ಜಾಗತಿಕ ಮಟ್ಟದಲ್ಲಿ ತನ್ನ ಮುಖ ಉಳಿಸಿಕೊಳ್ಳಲು ಪಾಕಿಸ್ತಾನ ನಾನಾ ಸರ್ಕಸ್ ಮಾಡಿದೆ. ಭಾರತ ಕಾಶ್ಮೀರ ವಿಷಯದಲ್ಲಿ ಮೂರನೇ ರಾಷ್ಟ್ರದ ಮಧ್ಯಸ್ಥಿಕೆಗೆ ಒಪ್ಪಿಲ್ಲ. ಅದಕ್ಕೆ ಅವಕಾಶವನ್ನು ಕೂಡ ಕೊಟ್ಟಿಲ್ಲ. ಪ್ರಧಾನಿಗಳು ಕೂಡ ಇದೇ ಮಾತನ್ನು ಸ್ಪಷ್ಟವಾಗಿ ಹೇಳಿದ್ದಾರೆ. ರಾಷ್ಟ್ರದ ಹಿತಾಸಕ್ತಿ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.
ಇದನ್ನೂ ಓದಿ: ಪಾಕ್‌ಗೆ ಕಾಶ್ಮೀರ ಸೇರಿಸಿ ಕಾಂಗ್ರೆಸ್ ಟ್ವೀಟ್ ಮಾಡಿ ಯಡವಟ್ಟು: ಸಿಬ್ಬಂದಿ ವಜಾ, ಇದೊಂದು ಸಣ್ಣ ತಪ್ಪು ಎಂದ ಡಿಕೆಶಿ
ಉಗ್ರ ಪೋಷಕ ಪಾಕಿಸ್ತಾನವನ್ನು ಮಟ್ಟ ಹಾಕುವ ದೃಷ್ಟಿಯಿಂದ ಪೂರ್ಣ ಪ್ರಮಾಣದ ಯುದ್ದ ಆಗಲೇಬೇಕಿತ್ತು ಎಂಬ ನಿಲುವು ಒಂದು ಕಡೆ ಇದೆ. ಮತ್ತೊಂದು ಕಡೆ ರಷ್ಯಾ, ಉಕ್ರೇನ್ ಯುದ್ಧದಿಂದ ಇವತ್ತು ಯಾವ ಸ್ಥಿತಿ ಉಂಟಾಗಿದೆ ಎನ್ನುವ ವಾದವೂ ಇನ್ನೊಂದೆಡೆ. ಈ ದೃಷ್ಟಿಯಲ್ಲಿ ಕೇಂದ್ರ ಸರ್ಕಾರ ಆಲೋಚನೆ ಮಾಡುತ್ತಿದೆ. ಆದರೆ, ಈಗಲಾದರೂ ಪಾಕಿಸ್ತಾನ ಎಚ್ಚೆತ್ತುಕೊಳ್ಳದಿದ್ದರೆ ಅದು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ