
ಬೆಂಗಳೂರು (ಮೇ.18) : ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ಪ್ರಸ್ತುತ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ತರಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಕರೆ ನೀಡಿದರು.
ನಗರದ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾನು ವಿತ್ತ ಸಚಿವನಾಗಿದ್ದರೂ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ. ಮುಖ್ಯಮಂತ್ರಿ ಆಗಿರುವುದರಿಂದ ಹೆಚ್ಚು ರಿವ್ಯೂ ಮೀಟಿಂಗ್ ಮಾಡಲು ಆಗುತ್ತಿಲ್ಲ. ಆದರೆ, ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹ ಗುರಿ ಸಾಧಿಸಲು ಪ್ರಯತ್ನಿಸಬೇಕು. ಬೆಂಗಳೂರಿನಲ್ಲಿ ಹೆಚ್ಚಿನ ಮಟ್ಟದಲ್ಲಿ ತೆರಿಗೆ ಸೋರಿಕೆಯಾಗುತ್ತಿದೆ ಎಂದರು.
ರಾಜ್ಯಾದ್ಯಂತ ತೆರಿಗೆ ಸೋರಿಕೆ ತಡೆಗೆ ಅಧಿಕಾರಿಗಳು ಶಕ್ತಿ ಮೀರಿ ಶ್ರಮಿಸಬೇಕು. ಇದಕ್ಕೆ ಪೂರಕವಾಗಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆ ತರಲು ಸರ್ಕಾರ ಬದ್ಧವಾಗಿದೆ. ಈಗ ಮಹಾರಾಷ್ಟ್ರ ತೆರಿಗೆ ಸಂಗ್ರಹದಲ್ಲಿ ಮೊದಲ ಸ್ಥಾನದಲ್ಲಿದೆ. ನಾವು ಎರಡನೇ ಸ್ಥಾನದಲ್ಲಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಅಧಿಕಾರಿಗಳು ಪ್ರಯತ್ನಿಸಬೇಕು. ಪ್ರಯತ್ನಿಸಿದರೆ ನಾವು ಮೊದಲ ಸ್ಥಾನಕ್ಕೆ ಹೋಗುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ: ಇನ್ನು ಕೋಮು ಗಲಭೆಗೆ ಆಸ್ಪದ ನೀಡಬೇಡಿ: ಸಿಎಂ ಸಿದ್ದರಾಮಯ್ಯ
ಗ್ಯಾರಂಟಿ ಯಶಸ್ಸಿನಲ್ಲಿ ಶ್ರಮ:ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಗುರಿ ಮೀರಿ ಶ್ರಮಿಸುತ್ತಿದ್ದಾರೆ. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿ ರು. ಗುರಿ ನಿಗದಿಪಡಿಸಲಾಗಿತ್ತು. ಆದರೆ, ನಮ್ಮ ಅಧಿಕಾರಿಗಳು ಹೆಚ್ಚುವರಿ 17,000 ಕೋಟಿ ರು. ತೆರಿಗೆ ಸಂಗ್ರಹಿಸಿದ್ದಾರೆ. ಈ ವರ್ಷ 1,20,000 ಕೋಟಿ ರು. ತೆರಿಗೆ ಸಂಗ್ರಹ ಗುರಿ ನೀಡಲಾಗಿದೆ. ಅ
ಧಿಕಾರಿಗಳು ಗುರಿಮೀರಿ ಸಾಧನೆ ಮಾಡಬೇಕು. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಆದರೆ, ಈ ವರ್ಷ 4,09,000 ಕೋಟಿ ರು. ಬಜೆಟ್ ಮಂಡಿಸಲಾಗಿದ್ದು, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರು. ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರು. ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಸರ್ಕಾರದ ಈ ಯಶಸ್ಸಿಗೆ ಇಲಾಖೆ ಅಧಿಕಾರಿಗಳ ಶ್ರಮ ಅಡಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ನಾಗರಾಜ ಯಾದವ್, ರಾಮೋಜಿ ಗೌಡ, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ ಉಪಸ್ಥಿತರಿದ್ದರು.-
ಇದನ್ನೂ ಓದಿ: ಸಿಎಂ, ಕಾಂಗ್ರೆಸ್ ಸರ್ಕಾರವನ್ನು ಯಾರೂ ಏನು ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್
ತೆರಿಗೆ ಅಧಿಕಾರಿಗಳ ಬೇಡಿಕೆಈಡೇರಿಕೆಗೆ ಸಿಎಂ ಭರವಸೆ
ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಪರಿಶೀಲಿಸಲಾಗುವುದು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಯಾವತ್ತಿಗೂ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತಿನ ಕ್ರಮವನ್ನೂ ಸರ್ಕಾರ ತೆಗೆದುಕೊಳ್ಳುತ್ತದೆ. ಪ್ರಸಕ್ತ ಸಾಲಿನಲ್ಲಿ 1.20 ಲಕ್ಷ ಕೋಟಿ ರು. ತೆರಿಗೆ ಸಂಗ್ರಹ ಗುರಿ ತಲುಪಿದರೆ ನಿಮ್ಮ ಬೇಡಿಕೆ ಈಡೇರಿಕೆಗೆ 4 ಕೋಟಿ ರು. ವ್ಯಯಿಸಲು ಸರ್ಕಾರಕ್ಕೇನೂ ಹೊರೆಯಾಗುವುದಿಲ್ಲ. ನಿಮ್ಮ ವೇತನದಲ್ಲೇನಾದರೂ ತಾರತಮ್ಯವಾಗಿದ್ದರೂ ಸರಿಪಡಿಸಲು ಬದ್ಧವಾಗಿದ್ದೇವೆ ಎಂದು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ