ತೆಲಂಗಾಣಕ್ಕೆ 1.5 ಟಿಎಂಸಿ ನೀರು: ಕಾಂಗ್ರೆಸ್ ಸರ್ಕಾರವನ್ನು ಮೀರ್ ಸಾಧಿಕ್‌ಗೆ ಹೋಲಿಸಿದ ವಿಪಕ್ಷ ನಾಯಕ ಆರ್‌.ಅಶೋಕ!

Published : Feb 27, 2025, 07:50 PM ISTUpdated : Feb 27, 2025, 08:06 PM IST
ತೆಲಂಗಾಣಕ್ಕೆ 1.5 ಟಿಎಂಸಿ ನೀರು: ಕಾಂಗ್ರೆಸ್ ಸರ್ಕಾರವನ್ನು ಮೀರ್ ಸಾಧಿಕ್‌ಗೆ ಹೋಲಿಸಿದ ವಿಪಕ್ಷ ನಾಯಕ ಆರ್‌.ಅಶೋಕ!

ಸಾರಾಂಶ

ರಾಜ್ಯದಲ್ಲಿ ನೀರಿನ ಸಮಸ್ಯೆ ಇದ್ದರೂ ತೆಲಂಗಾಣಕ್ಕೆ ನೀರು ಹರಿಸಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಮೀರ್ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಂತೆ ಎಂದು ಟೀಕಿಸಿದ್ದಾರೆ.

ಬೆಂಗಳೂರು (ಫೆ.27): ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. 

ಬೆಂಗಳೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಕಾಂಗ್ರೆಸ್‌ ಸರ್ಕಾರ ಹರಿಸಿದೆ. ಅಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕನ್ನಡಿಗರ ಹಿತವನ್ನು ಕಡೆಗಣಿಸಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಮಾಡುತ್ತಿದ್ದಾರೆ. ಈಗ ಅದೇ ಸರ್ಕಾರದ ಸಚಿವರು ನೀರು ಹರಿಸಿರುವುದು ಜನರಿಗೆ ಮಾಡಿರುವ ದ್ರೋಹ. ಮೀರ್‌ ಸಾಧಿಕ್‌ನಂತೆ ಸರ್ಕಾರ ವರ್ತಿಸಿರುವುದನ್ನು ರೈತರು ಕ್ಷಮಿಸುವುದಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಾಗ ನೀರು ಹರಿಸಿರುವುದರಿಂದ ಜನರಿಗೆ ತೊಂದರೆಯಾಗಲಿದೆ. ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು. 

ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಬ್ಬಂದಿಗೆ ಸರಿಯಾಗಿ ವೇತನ ಪಾವತಿಸಿಲ್ಲ. ಕಾಯಂ ಮಾಡುತ್ತೇವೆ, ಸಂಬಳ ನೀಡುತ್ತೇವೆಂದು ಭರವಸೆ ನೀಡಿ ಈಗ ಕೈ ಕೊಟ್ಟಿದ್ದಾರೆ. ಮೋಸದ ಆಶ್ವಾಸನೆಗಳಿಂದಾಗಿ ಭಿಕ್ಷೆ ಬೇಡುವ ಮಟ್ಟಕ್ಕೆ ಸರ್ಕಾರ ಬಂದಿದೆ. ಬೆಂಗಳೂರಿನ ಆಸ್ಪತ್ರೆಗಳ ವೈದ್ಯರಿಗೆ ವೇತನ ನೀಡಿಲ್ಲ. ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ. ಹಾಲಿನ ಪ್ರೋತ್ಸಾಹಧನದ ಬಾಕಿ ಉಳಿದಿದೆ. ಇದರ ಜೊತೆಗೆ ತೆರಿಗೆಗಳನ್ನು ಏರಿಸಲಾಗಿದೆ. ಬೆಂಗಳೂರಿನಲ್ಲಿ ಇ-ಖಾತಾ ಮಾಡಿಸಲು 12 ಸಾವಿರ ರೂ. ವಸೂಲಿ ಮಾಡಲಾಗುತ್ತಿದೆ. ಇದನ್ನು ಪ್ರಶ್ನೆ ಮಾಡಿದರೆ ಹೊಸ ವ್ಯವಸ್ಥೆಯಲ್ಲಿ ಇದು ಸಾಮಾನ್ಯ ಎಂದು ಹೇಳುತ್ತಾರೆ. ಏಜೆಂಟ್‌ಗಳು ಜನರಿಂದ ಹಣ ವಸೂಲಿ ಮಾಡುತ್ತಿದ್ದು, ಇಂತಹವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ತುಂಗಭದ್ರಾ ಅಣೆಕಟ್ಟಿಗೆ ನವಲಿ ಸಮಾನಾಂತರ ಅಣೆಕಟ್ಟು ಚರ್ಚೆ: ಡಿ.ಕೆ.ಶಿವಕುಮಾರ್‌

ಮಹಾ ಕುಂಭಮೇಳಕ್ಕೆ ಹೋಗುವುದು ಬಿಜೆಪಿಗೆ ಸಾಮಾನ್ಯ. ಡಿಸಿಎಂ ಡಿ.ಕೆ.ಶಿವಕುಮಾರ್‌ ಏಕೆ ಹೋಗುತ್ತಾರೆ ಎಂದು ಅವರ ಪಕ್ಷದವರೇ ಪ್ರಶ್ನಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಕೀಳಾಗಿ ಮಾತಾಡಿದ್ದು, ಆ ಮಾತನ್ನು ಡಿ.ಕೆ.ಶಿವಕುಮಾರ್‌ ಧಿಕ್ಕರಿಸಿದ್ದಾರೆ. ಈಶ ಫೌಂಡೇಶನ್‌ನ ಕಾರ್ಯಕ್ರಮಕ್ಕೂ ಹೋಗಿದ್ದಾರೆ. ಅವರ ಮನಸ್ಸಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಇದು ಪಕ್ಷದ ಆಂತರಿಕ ವಿಚಾರ. ಕಾಂಗ್ರೆಸ್‌ನಲ್ಲಿ ಕರಿ ಬೆಕ್ಕಿನ ಕಾಟ ಹೆಚ್ಚಾಗಿದೆ. ಅದರ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರೇ ಉತ್ತರಿಸಬೇಕು ಎಂದು ವ್ಯಂಗ್ಯವಾಡಿದರು. 

ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದಾಗಲೇ ಎಲ್ಲರೂ ಸುಮ್ಮನಿದ್ದರು. ಪಕ್ಷದೊಳಗಿನ ಆಂತರಿಕ ಕಚ್ಚಾಟ ಎಲ್ಲರಿಗೂ ಗೊತ್ತಾಗಿದೆ. ಇದು ಮುಖ್ಯಮಂತ್ರಿ ಬದಲಾಗುವ ಸ್ಥಿತಿಯ ಲಕ್ಷಣ. ಸಿಎಂ ಸಿದ್ದರಾಮಯ್ಯ ಅವರು ವೀಕ್‌ ಆಗಿದ್ದಾರೆ. ಆದ್ದರಿಂದ ತಾವೇ ಮಾಸ್‌ ಲೀಡರ್‌ ಎಂಬ ಸಂದೇಶವನ್ನು ಡಿ.ಕೆ.ಶಿವಕುಮಾರ್‌ ನೀಡಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌