Karnataka Rains: ಕರಾವಳಿ, ಮಲೆನಾಡಿಗೆ 2 ದಿನ ರೆಡ್‌ ಅಲರ್ಟ್‌; ಬಿರುಗಾಳಿ ಸಹಿತ ಮಳೆ, 4 ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ

Ravi Janekal   | Kannada Prabha
Published : Aug 18, 2025, 05:28 AM IST
Red Alert In Karnataka

ಸಾರಾಂಶ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭರ್ಜರಿ ಮಳೆ ಸುರಿದಿದ್ದು, ಶೃಂಗೇರಿಗೆ ಜಲದಿಗ್ಬಂಧನ ಉಂಟಾಗಿದೆ. ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರು (ಆ.18): ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭರ್ಜರಿ ಮಳೆ ಸುರಿದಿದೆ. ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿದ್ದು, ಅಣೆಕಟ್ಟೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಈ ನಡುವೆ ಹಾಸನ ಜಿಲ್ಲೆಯ ಶಿರಾಡಿಯಲ್ಲಿ ಎರಡೇ ತಾಸಿನಲ್ಲಿ 40 ಸೆಂ.ಮೀ. ಮಳೆಯಾಗಿದೆ. ವರುಣನ ಅಬ್ಬರದಿಂದ ಚಿಕ್ಕಮಗಳೂರು ಜಿಲ್ಲೆಯ ಪುಣ್ಯ ಕ್ಷೇತ್ರ ಶೃಂಗೇರಿಗೆ ಜಲದಿಗ್ಬಂಧನ ಆಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗುಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಹಲವೆಡೆ ರಸ್ತೆಗಳಿಗೂ ನೀರು ನುಗ್ಗಿ ಸಂಪರ್ಕ ಕಡಿತಗೊಂಡಿದೆ. ಕೆಲವೆಡೆ ಗುಡ್ಡ ಕುಸಿತದ ವರದಿ ಆಗಿದೆ.

ಗೋಡೆಗಳು ಕುಸಿತ:

ಶೃಂಗೇರಿ ತಾಲೂಕಿನಾದ್ಯಂತ ಅಬ್ಬರಿಸಿದ ಮಳೆಗೆ ತುಂಗಾನದಿಯಲ್ಲಿ ಉಂಟಾದ ಪ್ರವಾಹದಿಂದ ಜಲದಿಗ್ಬಂಧನ ಏರ್ಪಟ್ಟಿದೆ. ಅಲ್ಲಲ್ಲಿ ಗುಡ್ಡ, ಭೂಮಿ ಕುಸಿತ, ಮನೆಗಳ ಗೋಡೆ ಬಿದ್ದಿವೆ. ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳು ಬಂದ್ ಆಗಿವೆ. ಆವೆಗುಂದ ಸಮೀಪ ಗುಡ್ಡದ ಮೇಲಿನ ಕೆಲ ಮನೆಗಳ ಗೋಡೆಗಳು ಕುಸಿದು ಬೀಳುತ್ತಿವೆ. ತಗ್ಗು ಪ್ರದೇಶಗಳು, ಹೊಲಗದ್ದೆ, ತೋಟಗಳು ಜಲಾವೃತಗೊಂಡಿವೆ. ತುಂಗಾನದಿ ತೀರದ ಕಪ್ಪೆಶಂಕರ ದೇವಾಲಯ ಸಂಪೂರ್ಣ ಮುಳುಗಡೆಯಾಗಿ, ನರಸಿಂಹವನದ ತುಂಗಾನದಿ ತೀರದ ಸಂಧ್ಯಾವಂದನಾ ಮಂಟಪಕ್ಕೂ ನೀರು ನುಗ್ಗಿದೆ. ಬೈಪಾಸ್ ರಸ್ತೆಗೆ ನೀರು ನುಗ್ಗಿದ್ದರಿಂದ ಗಾಂಧಿಮೈದಾನ ಅರ್ಧಮುಳುಗಡೆಯಾಗಿದೆ. ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಕುದುರೆಮುಖ ಸೇರಿದಂತೆ ಕಳಸ ತಾಲೂಕಿನಾದ್ಯಂತ ಮಳೆ ಜತೆಗೆ ಬಲವಾಗಿ ಗಾಳಿ ಬೀಸುತ್ತಿದೆ. ಹೀಗಾಗಿ ಧರೆ ಕುಸಿತ, ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದು ಹಲವೆಡೆ ರಸ್ತೆ ಸಂಪರ್ಕ ಅಸ್ತವ್ಯಸ್ತವಾಗಿದೆ.

ಇನ್ನು ಕೋಲಾರ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸಂಜೆಯ ನಂತರ ಜೋರು ಮಳೆ ಸುರಿದೆ. ಮಳೆಯಿಂದ ಜಿಲ್ಲೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದು, ಸಾರ್ವಜನಿಕರು ಕತ್ತಲೆಯಲ್ಲಿ ಕಾಲ ಕಳೆಯುವ ಪರಿಸ್ಥಿತಿ ಉಂಟಾಗಿದೆ.

ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭಾನುವಾರ ಬೆಳಗಿನಿಂದಲೇ ಮಳೆ ಸುರಿಯಲಾರಂಭಿಸಿತು. ಸಕಲೇಶಪುರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ೭೫ ರ ಶಿರಾಡಿಘಾಟ್‌ನಲ್ಲಿ ಶನಿವಾರ ಸಂಜೆ ಭಾರಿ ಮಳೆ ಸುರಿದ ಪರಿಣಾಮ ಘಾಟ್‌ ರಸ್ತೆಯಲ್ಲಿ ಹೊಳೆಯಂತೆ ನೀರು ಹರಿಯುತ್ತಿತ್ತು. ತೊರೆಗಳ ನೀರು ರಸ್ತೆಗೆ ಬೀಳುತ್ತಿದ್ದರಿಂದ ಘಾಟ್‌ನಲ್ಲಿ ಲಘುವಾಹನಗಳ ಸಂಚಾರ ಕಷ್ಟಕರವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಜೋಯಿಡಾ, ಮುಂಡಗೋಡ, ಭಟ್ಕಳ, ಶಿರಸಿ, ಸಿದ್ದಾಪುರಗಳಲ್ಲಿ ಭಾರಿ ಮಳೆಯಾಗಿದೆ.

ಇಂದು, ನಾಳೆ ರೆಡ್‌ ಅಲರ್ಟ್‌

ಭಾರತೀಯ ಹವಾಮಾನ ಇಲಾಖೆ ಆ.18 ಮತ್ತು 19ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗಿನಿಂದಲೇ ಹಗುರ ಮಳೆ ಕಾಣಿಸಿದೆ. ಆ.17ರಿಂದ 20ರವರೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್‌ ಮತ್ತು ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್‌ ಅಲರ್ಡ್‌ ಘೋಷಿಸಲಾಗಿದೆ. ಈ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, 204.5 ಮಿ.ಮೀ.ಗೂ ಹೆಚ್ಚಿನ ಪ್ರಮಾಣದ ಮಳೆ ಬೀಳುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಬಳ್ಳಾರಿ, ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಬಿರುಗಾಳಿ ಸಹಿತ 115ರಿಂದ 204 ಮಿ.ಮೀ. ವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ಧಾರವಾಡ, ಕೊಪ್ಪಳ, ವಿಜಯನಗರ ಮತ್ತಿತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ವಿವಿಧೆಡೆ 64ರಿಂದ 115 ಮಿ.ಮೀ. ವರೆಗೆ ಮಳೆ ಬೀಳುವ ಸಾಧ್ಯತೆ ಇದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆ ಎಚ್ಚರಿಕೆ ಕೊಡಲಾಗಿದೆ.

ಕರಾವಳಿ, ಮಲೆನಾಡಿಗೆ 2 ದಿನ ರೆಡ್‌ ಅಲರ್ಟ್‌; ಬಿರುಗಾಳಿ ಸಹಿತ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಎರಡು ದಿನ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಹಮಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಇನ್ನು ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲೂ ಎರಡು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಇದ್ದು, ಕೆಲ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಇನ್ನು ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

4 ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ

ಮುಂಜಾಗ್ರತಾ ಕ್ರಮವಾಗಿ ಸೋಮವಾರ ಚಿಕ್ಕಮಗಳೂರು ಜಿಲ್ಲೆಯ ಆರು ತಾಲೂಕುಗಳು, ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳು, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತಗಳು ರಜೆ ಘೋಷಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!