
ಬೆಂಗಳೂರು, (ಮೇ.28): ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು (ಗುರುವಾರ) ಸಿಎಂ ಬಿಎಸ್‌ವೈ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು / ಅನುಸೂಚಿತ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ತು ಸಭೆಯಲ್ಲಿ ಈ ಪಂಗಡಗಳ ಅಭಿವೃದ್ದಿಗೆ ಕೈಗೊಂಡಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಿದರು.
2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ರೂ. 19432.22 ಕೋಟಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ರೂ. 8267.30 ಕೋಟಿಗಳು ಒಟ್ಟಾರೆಯಾಗಿ ರೂ. 27,699.52 ಕೋಟಿ ಅನುದಾನ ಒದಗಿಸಲಾಗಿದ್ದು, ಎಲ್ಲಾ ಇಲಾಖೆಗಳ ಕ್ರಿಯಾ ಯೋಜನೆಗಳ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಯಿತು.
ಹೊಸ ಮಾರ್ಗಸೂಚಿಗಳೊಂದಿಗೆ ಶಾಲೆ ಪ್ರಾರಂಭಿಸಲು ಚಿಂತನೆ: ಯಾವಾಗಿನಿಂದ..?
ನಿಗದಿತ ಅವಧಿಯೊಳಗೆ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪ್ರಸಕ್ತ ವರ್ಷದ ಪರಿಸ್ಥಿತಿಯನ್ನು ಗಮನಿಸಿ ಆರ್ಥಿಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಜನರಿಗೆ ಸಹಾಯವಾಗುವಂತಹ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುವುದು ಎಂದು ಬಿಎಸ್‌ವೈ ತಿಳಿಸಿದರು.
ಜಾಬ್ ಕಾರ್ಡ್ ಕಡ್ಡಾಯ
ಕೋವಿಡ್ 19 ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಿಗೆ 25 – 30 ಸಾವಿರ ಜನ ಹಿಂದಿರುಗಿದ್ದಾರೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾರ್ಯಕ್ರಮದಡಿ ಪ್ರತಿಯೊಂದು ಪರಿಶಿಷ್ಟ ಜಾತಿ/ಪಂಗಡದ ಕುಟುಂಬಕ್ಕೆ ಜಾಬ್ ಕಾರ್ಡ್‍ಗಳನ್ನು ಕಡ್ಡಾಯವಾಗಿ ವಿತರಿಸುವಂತೆ ಖಡಕ್ ಸೂಚನೆ ಕೊಟ್ಟರು.
ಇದೇ ವೇಳೆ ಉದ್ಯೋಗ ಖಾತರಿ ಯೋಜನೆಯಡಿ, ಕಾರ್ಮಿಕರಿಗೆ ಪ್ರಸ್ತುತ ಕನಿಷ್ಟ 100 ದಿನಗಳಿರುವ ಕೆಲಸದ ದಿನಗಳನ್ನು 150 ಕೆಲಸದ ದಿನಗಳಿಗೆ ಹೆಚ್ಚಿಸಲು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಅಭಿವೃದ್ಧಿ ಪರಿಷತ್ತಿನ ಉಪಾಧ್ಯಕ್ಷ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ
ಮಾಧುಸ್ವಾಮಿ, ಆರ್‌ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ, ಕಂದಾಯ ಸಚಿವ ಆರ್. ಅಶೋಕ್, ಸಂಸದ ಉಮೇಶ್ ಜಾಧವ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ