ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಏಪ್ರಿಲ್ 2 ರಿಂದ 4 ರವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು (ಏ.1) : ಬಿಸಿಲಿನ ಬೇಗೆಯ ನಡುವೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಏ.1 ಮತ್ತು 2ರಂದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಏ.3ರಿಂದ 5ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ಚದುರಿದಂತೆ ಹಗುರ ಮಳೆಯಾಗಬಹುದು.
ಇದನ್ನೂ ಓದಿ: ಕರ್ನಾಟಕದಲ್ಲಿ ಭಾರೀ ಮಳೆ: ಕರಾವಳಿ ಜಿಲ್ಲೆಗಳು, ಬೆಂಗಳೂರಿಗೆ ಯಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರಿನಲ್ಲಿ ಹಗುರ ಮಳೆ:
ಏ.2ರಿಂದ 4ರ ನಡುವೆ ಮೂರು ದಿನ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ತಾಪಮಾನದಲ್ಲಿ ಅಲ್ಪ ಇಳಿಕೆಯಾಗಲಿದೆ. ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.