
ಬೆಂಗಳೂರು: ಪದವಿ ಪೂರ್ವ (ಪಿಯು) ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಡಿ.25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
814 ಹುದ್ದೆಗಳ ಪೈಕಿ ಉಳಿಕೆ ಮೂಲ ವೃಂದಕ್ಕೆ 778 ಹಾಗೂ ಕಲ್ಯಾಣ ಕರ್ನಾಟಕ ವೃಂದದ 36 ಹುದ್ದೆಗಳಿವೆ. ಸ್ನಾತಕೋತ್ತರ ಪದವಿ ಜತೆಗೆ ಬಿ.ಇಡಿ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು. ಮಾರ್ಚ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಕನ್ನಡ ವಿಷಯದಲ್ಲಿ 89 ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಹಾಗೆಯೇ ಇಂಗ್ಲಿಷ್ 145, ಇತಿಹಾಸ 50, ಅರ್ಥಶಾಸ್ತ್ರ 90, ರಾಜ್ಯಶಾಸ್ತ್ರ 25, ಸಮಾಜಶಾಸ್ತ್ರ 25, ಭೂಗೋಳ ಶಾಸ್ತ್ರ 10, ವಾಣಿಜ್ಯ ಶಾಸ್ತ್ರ 150, ಭೌತಶಾಸ್ತ್ರ 30, ರಸಾಯನಶಾಸ್ತ್ರ 30, ಗಣಿತ 30, ಜೀವಶಾಸ್ತ್ರ 30, ಕಂಪ್ಯೂಟರ್ ಸೈನ್ಸ್ 110 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ ಸೇರಿ ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್ ವೀಕ್ಷಿಸಬಹುದು.
ಬೆಂಗಳೂರು: ಅಗ್ನಿಶಾಮಕ ಇಲಾಖೆ ಸೇರಿ ವಿವಿಧ ಇಲಾಖೆಗಳ ಒಟ್ಟು 1,531 ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಿದೆ. ಈ ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದ 1,311 ಹಾಗೂ ಕಲ್ಯಾಣ ಕರ್ನಾಟಕ ವೃಂದದ 220 ಹುದ್ದೆಗಳು ಸೇರಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ 171 ಮಹಿಳಾ ಮೇಲ್ವಿಚಾರಕಿ ಹುದ್ದೆಗೂ ಅರ್ಜಿ ಆಹ್ವಾನಿಸಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 35 ಕೈಗಾರಿಕಾ ವಿಸ್ತರಣಾಧಿಕಾರಿ, ಸರ್ಕಾರಿ ಅಭಿಯೋಜಕರು ಕಮ್ ಸಹಾಯಕ ಸರ್ಕಾರಿ ವಕೀಲರು (320 ಹುದ್ದೆ), ರೇಷ್ಮೆ ನಿರೀಕ್ಷಕರು (34), ಮಾರುಕಟ್ಟೆ ಮೇಲ್ವಿಚಾರಕರು (4), ಜವಳಿ ನಿರೀಕ್ಷಕರು (27), ಅರಣ್ಯ ರಕ್ಷಕರು (450), ಅಗ್ನಿಶಾಮಕ ಅಧಿಕಾರಿ (20), ಅಗ್ನಿಶಾಮಕ ಸಿಬ್ಬಂದಿ (470) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹುದ್ದೆಗೆ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಿಗೆ ಹತ್ತನೇ ತರಗತಿಯಲ್ಲಿ ಅಭ್ಯರ್ಥಿ ಗಳಿಸಿದ ಅಂಕಗಳ ಆಧಾರ ಮೇಲೆ ನೇಮಕಾತಿಗೆ ಅರ್ಹರಾಗುತ್ತಾರೆ.
ಈ ಎಲ್ಲ ಪರೀಕ್ಷೆಗಳಿಗೂ ಫೆಬ್ರುವರಿ-ಮಾರ್ಚ್ ತಿಂಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಹೀಗಾಗಿ ಈಗಿನಿಂದ ಸಿದ್ಧತೆ ಮಾಡಿಕೊಳ್ಳಲು ಸಲಹೆ ನೀಡಿದ್ದು, ನಿಖರವಾದ ದಿನಾಂಕಗಳನ್ನು ನಂತರ ತಿಳಿಸಲಾಗುತ್ತದೆ ಎಂದು ಪ್ರಸನ್ನ ಅವರು ತಿಳಿಸಿದ್ದಾರೆ. ಪೂರ್ಣ ಮಾಹಿತಿಗೆ ಪ್ರತಿ ಇಲಾಖೆಗಳ ಅಧಿಸೂಚನೆಗಳನ್ನು ಪ್ರತ್ಯೇಕವಾಗಿಯೇ ನೋಡಿ ನಂತರ ಅರ್ಜಿ ಭರ್ತಿ ಮಾಡಲು ಸಲಹೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ