ಕರ್ನಾಟಕ ಕಾಂಗ್ರೆಸ್ ನೂತನ ಮಹಿಳಾ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಮುಂದಿನ ಗುರಿ, ಉದ್ದೇಶ ಬಿಚ್ಚಿಟ್ಟಿದ್ದಾರೆ.
ಬೆಂಗಳೂರು (ಆ.14): ಕರ್ನಾಟಕ ಕಾಂಗ್ರೆಸ್ ಪ್ರದೇಶ ಸಮಿತಿ (ಕೆಪಿಸಿಸಿ) ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಮಾತನಾಡಿರುವ ಸೌಮ್ಯಾ ರೆಡ್ಡಿ ಅವರು, 135 ವರ್ಷ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ ಒಂದು ರಾಜ್ಯಕ್ಕೆ ಅಧ್ಯಕ್ಷೆ ಆಗಿದ್ದು, ನನಗೆ ಹೆಚ್ಚಿನ ಜವಾಬ್ದಾರಿಗಳಿವೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಮೂಲಕ ನನ್ನ ಕೆಲಸ ಮಾಡಿ ತೋರಿಸುತ್ತೇನೆ ಎಂದು ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್‌ಗೆ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡುವ ವಿಚಾರದಲ್ಲಿ ಭಾರಿ ಪೈಪೋಟಿ ಉಂಟಾಗಿತ್ತು. ಆದರೆ, ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಅವರು ಅಂತಿಮವಾಗಿ ಕೆಪಿಸಿಸಿ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನದ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯವಾಗಿದೆ. ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ವರಿಷ್ಠರು ಮತ್ತು ಹಿರಿಯ ನಾಯಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಆಯ್ಕೆ!
ನಮ್ಮ ರಾಜ್ಯದಲ್ಲಿ ಶೇ.50 ಮಹಿಳೆಯರು ಇದ್ದಾರೆ. ಈಗಾಗಲೇ ರಾಜ್ಯದಲ್ಲಿ ಒಂದು ಕಾಲು ವರ್ಷದಿಂದ ಗ್ಯಾರಂಟಿ ಯೋಜನೆಗಳು ಜಾರಿಯಾಗಿದೆ. ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದ ಮಹಿಳೆಯರಿಗೆ ಕೆಲವು ವಿಶೇಷ ಸವಲತ್ತುಗಳನ್ನು ನೀಡುವ ಮೂಲಕ ಮಹಿಳಾ ಸಬಲೀಕರಕ್ಕೆ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಎಲ್ಲ ಕುಟುಂಬ ಮನೆ ಒಡತಿಗೆ 2,000 ರೂ. ಹಣ ನೀಡಲಾಗುತ್ತಿದೆ. ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಬಸ್ಸುಗಳಲ್ಲಿ ಉದ್ಯೋಗ ಮತ್ತು ಲಕ್ಷಾಂತರ ವಿದ್ಯಾರ್ಥಿನಿಯರು ಶಾಲಾ-ಕಾಲೇಜುಗಳಿಗೆ ಹೋಗುತ್ತಿದ್ದಾರೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಅನ್ಯಾಯ ಆಗ್ತಾಯಿದೆ, ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಮೋಸ ಆಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಬರೋಬ್ಬರಿ 135 ವರ್ಷಗಳ ಇತಿಹಾಸ ಇದೆ. ಪಕ್ಷದಲ್ಲಿ ಎಲ್ಲರಿಗೂ ಸಮಾನತೆ ನೀಡಲಾಗಿದೆ, ಮಹಿಳಾ ಮೀಸಲಾತಿ ನೀಡಲಾಗಿದೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಮೂಲಕ ನಾನು ನನ್ನ ಕೆಲಸ ಮಾಡುತ್ತೆನೆ ಎಂದು ಕೆಪಿಸಿಸಿ ನೂತನ ಮಹಿಳಾ ಅಧ್ಯಕ್ಷೆ ಸೌಮ್ಯಾರೆಡ್ಡಿ ತಮ್ಮ ಮುಂದಿನ ಉದ್ದೇಶಗಳನ್ನು ಬಿಚ್ಚಿಟ್ಟರು.
ಮಹಿಳಾ ಕಾಂಗ್ರೆಸ್‌ನಲ್ಲಿ ರಾಜಕೀಯ ತಲ್ಲಣ, ಅಧ್ಯಕ್ಷೆ ಪುಷ್ಪಾ ಅಮರ್‌ನಾಥ್ ಬದಲಾವಣೆಗೆ ಹೆಚ್ಚಿದ ಒತ್ತಡ!
ಸೌಮ್ಯಾ ರೆಡ್ಡಿ ಪೂರ್ಣ ಪರಿಚಯ: ಸೌಮ್ಯಾ ರೆಡ್ಡಿ ಅವರು ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದು ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದರು. ನಂತರ 2023ರ ಚುನಾವಣೆಯಲ್ಲಿ ಕೆಲವೇ ಮತಗಳ ಅಂತರದಲ್ಲಿ ಸೋಲು ಅನುಭವಿಸಿದರು. ಪುನಃ 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅವರು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಪರಾಭವಗೊಂಡಿದ್ದರು. ರಾಜಕೀಯ ಕ್ಷೇತ್ರ ಪ್ರವೇಶಕ್ಕೂ ಮುನ್ನ ಅವರು ಪ್ರಾಣಿದಯಾ ಸಂಘದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿದ್ದರು. ಈಗ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ.