
ಬೆಂಗಳೂರು: ‘ಕನ್ನಡಪ್ರಭ’ ಬಯಲಿಗೆ ಎಳೆದಿದ್ದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ಜಾರಿ ನಿರ್ದೇಶನಾಲಯವು (ಇ.ಡಿ) ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಸೇರಿ ನಾಲ್ವರು ಆರೋಪಿಗಳ ವಿರುದ್ಧ ಇ.ಡಿ ವಿಶೇಷ ನ್ಯಾಯಾಲಯಕ್ಕೆ 580ಕ್ಕೂ ಅಧಿಕ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಪ್ರಕರಣದ ಆರೋಪಿಗಳಾದ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಮಾಜಿ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್, ಕೆಪಿಎಸ್ಸಿ ಸದಸ್ಯೆ ಬಿ.ವಿ.ಗೀತಾ ಮತ್ತು ಮಧ್ಯವರ್ತಿ ಬಸವರಾಜ ಕನ್ನಾಳೆ ವಿರುದ್ಧ ಈ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ.
ಈ ದೋಷಾರೋಪಪಟ್ಟಿಯಲ್ಲಿ 50ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆ, ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳ ಹೇಳಿಕೆಗಳು, ಮಧ್ಯವರ್ತಿ ಬಸವರಾಜ ಕನ್ನಾಳೆ ಹಾಗೂ ಆತನ ಸಹಚರರು ಪರೀಕ್ಷೆ ಹಿಂದಿನ ದಿನ ಅಭ್ಯರ್ಥಿಗಳಿಗೆ ಉತ್ತರ ಸಹಿತ ಪ್ರಶ್ನೆಪತ್ರಿಕೆ ಕೊಟ್ಟು ಉತ್ತರಗಳನ್ನು ಕಂಠಪಾಠ ಮಾಡಿಸಿದ್ದ ದೇವನಹಳ್ಳಿ ಸಮೀಪದ ರೆಸಾರ್ಟ್‌ನ ಸಿಬ್ಬಂದಿ ಹೇಳಿಕೆಗಳು, ಅಭ್ಯರ್ಥಿಗಳಿಂದ ಲಂಚ ಹಣದ ವರ್ಗಾವಣೆ ಮಾಡಿಸಿಕೊಂಡಿದ್ದ ಬೀದರ್‌ನ ಸಹಕಾರಿ ಬ್ಯಾಂಕ್‌ನ ಸಿಬ್ಬಂದಿ ಹೇಳಿಕೆಗಳು, ಆರೋಪಿಗಳಿಗೆ ಲಂಚದ ಹಣ ನೀಡಿದ್ದ ಅಭ್ಯರ್ಥಿಗಳು ಹಾಗೂ ಅವರ ಪೋಷಕರ ಹೇಳಿಕೆಗಳು ಸೇರಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದೆ.
ಈ ಲಂಚದ ಹಣ ಬಳಸಿಕೊಂಡು ಆರೋಪಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಸ್ನೇಹಿತೆಗೆ ಸುಮಾರು 52 ಲಕ್ಷ ರು. ಮೌಲ್ಯದ ಚಿನ್ನಾಭರಣ ಖರೀದಿಸಿ ನೀಡಿದ್ದರ ಕುರಿತ ದಾಖಲೆಗಳು, ಹಣಕಾಸು ವಹಿವಾಟು, ಬ್ಯಾಂಕ್ ಸಿಬ್ಬಂದಿ ಹೇಳಿಕೆಗಳು, ಚಿನ್ನಾಭರಣ ಮಾರಾಟ ಅಂಗಡಿ ಸಿಬ್ಬಂದಿ ಹೇಳಿಕೆಗಳು, ಗಂಗ್ವಾರ್ ತನ್ನ ಸ್ನೇಹಿತೆ ಜತೆಗೆ ಚಿನ್ನಾಭರಣ ಅಂಗಡಿಗೆ ತೆರಳಿದ್ದ ಸಿಸಿಟಿವಿ ದೃಶ್ಯಾವಳಿಗಳು, ಫೋಟೋಗಳು ಸೇರಿ ನಾಲ್ವರು ಆರೋಪಿಗಳ ಕೋಟ್ಯಂತರ ರು. ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳ ವಿವರಗಳನ್ನು ದೋಷಾರೋಪಟ್ಟಿಯಲ್ಲಿ ಅಡಕಗೊಳಿಸಲಾಗಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ.
400 ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಇ.ಡಿ ಅಧಿಕಾರಿಗಳು ಕೆಪಿಎಸ್ಸಿ ಅಮಾನತುಗೊಂಡಿರುವ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಮಾಜಿ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್, ಕೆಪಿಎಸ್ಸಿ ಸದಸ್ಯೆ ಬಿ.ವಿ.ಗೀತಾ ಮತ್ತು ಮಧ್ಯವರ್ತಿ ಬಸವರಾಜ ಕನ್ನಾಳೆ ಅವರ ನಿವಾಸ, ಆಯೋಗದ ಕಚೇರಿ ಮತ್ತು ಸದಸ್ಯರ ನಿವಾಸ ಸೇರಿ ರಾಜ್ಯಾದ್ಯಂತ 21ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಶೋಧಿಸಿದ್ದರು.
ಶೋಧ ಕಾರ್ಯ ವೇಳೆ ಅಭ್ಯರ್ಥಿಗಳು ಸಹಿ ಮಾಡಿದ ಖಾಲಿ ಚೆಕ್‌ಗಳು ಮತ್ತು ಪ್ರಾಮಿಸರಿ ನೋಟ್‌ಗಳು ಪತ್ತೆಯಾಗಿದ್ದವು. ಆರೋಪಿಗಳು ಅಭ್ಯರ್ಥಿಗಳಿಂದ ಲಕ್ಷಾಂತರ ರು. ಲಂಚ ಪಡೆದಿರುವುದು ಬೆಳಕಿಗೆ ಬಂದಿತ್ತು. ಅಕ್ರಮ ಹಣದ ಮೂಲ ಮರೆಮಾಚಲು ಆ ಹಣವನ್ನು ಬ್ಯಾಂಕ್ ವರ್ಗಾವಣೆಗಳು, ಚಿನ್ನದ ಆಭರಣಗಳ ಖರೀದಿ, ವಿಮಾನ ಪ್ರಯಾಣದ ಟಿಕೆಟ್ ಖರಿದಿಗೆ ನಗದು ಪಾವತಿ ಸೇರಿ ಇತರೆ ನಗದು ವಹಿವಾಟು ನಡೆಸಿರುವುದು ಬಯಲಾಗಿತ್ತು. ಇದರ ಬೆನ್ನಲ್ಲೇ ಇ.ಡಿ.ಅಧಿಕಾರಿಗಳು ಈ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ