BJP Leadership Change: ತಾರಕಕ್ಕೇರಿದ ಬಿಜೆಪಿ ಬಣ ಜಗಳ; 'ವಿಜಯೇಂದ್ರ ಬದಲಾಗಲೇಬೇಕು' ಪಟ್ಟು ಹಿಡಿದ ಕುಮಾರ ಬಂಗಾರಪ್ಪ!

Kannadaprabha News   | Kannada Prabha
Published : Jun 24, 2025, 03:55 PM ISTUpdated : Jun 24, 2025, 03:58 PM IST
Kumar bangarappa

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾಯಿಸಬೇಕೆಂಬ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ. 

ಬೆಂಗಳೂರು (ಜೂ.24) ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂಬ ನಮ್ಮ ಬೇಡಿಕೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ರಾಜ್ಯ ಬಿಜೆಪಿಯ ಅತೃಪ್ತ ಬಣದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್ ಮತ್ತು ಶಾಸಕ ಬಿ.ಪಿ.ಹರೀಶ್ ಅವರು ದಾವಣಗೆರೆ ಜಿಲ್ಲೆಯ ಸಂಘಟನೆಗೆ ಸೀಮಿತವಾಗಿ ಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಮುಂದಿನ ಬಾರಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎಂದಾದಲ್ಲಿ ವಿಜಯೇಂದ್ರ ಅವರನ್ನು ಬದಲಾಯಿಸಬೇಕು ಎಂಬ ಅಭಿಪ್ರಾಯವನ್ನು ಈಗಾಗಲೇ ಪಕ್ಷದ ಹಿರಿಯ ನಾಯಕರಿಗೆ ತಿಳಿಸಿದ್ದೇವೆ. ಈಗ ನಮ್ಮ ಅಭಿಪ್ರಾಯವನ್ನು ನಾವು ಹೇಳಬೇಕಾಗಿದೆ. ಒಂದು ಬಾರಿ ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಂಡ ಬಳಿಕ ಮತ್ತೆ ಅದನ್ನು ಮಾರ್ಪಡಿಸಲು ಆಗುವುದಿಲ್ಲ. ಹೀಗಾಗಿಯೇ ನಾವು ನಮ್ಮ ಒತ್ತಾಯ ಮಂಡಿಸುತ್ತಲೇ ಇದ್ದೇವೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ತಟಸ್ಥ ಬಣ ಎಂದು ಗುರುತಿಸಿಕೊಳ್ಳುವ ಕೆಲ ನಾಯಕರು ತಮ್ಮ ಅಭಿಪ್ರಾಯ ಬಹಿರಂಗವಾಗಿ ಹೇಳಿಲ್ಲ. ನಾವು ಬಹಿರಂಗವಾಗಿಯೇ ನಮ್ಮ ನಿಲುವು ವ್ಯಕ್ತಪಡಿಸಿದ್ದೇವೆ ಎಂದು ಹೇಳಿದರು.

ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಸಹಕಾರ ಸಚಿವರ ಹನಿಟ್ರ್ಯಾಪ್‌ ಪ್ರಕರಣ, ಕ್ರಿಕೆಟ್ ಅಭಿಮಾನಿಗಳ ಕಾಲ್ತುಳಿತ ದುರಂತ ಸೇರಿ ಹಲವು ವಿಚಾರಗಳಲ್ಲಿ ನಮ್ಮ ಪಕ್ಷದ ನಾಯಕರು ಕೈಚೆಲ್ಲಿದರು. ರಾಜ್ಯ ಸರ್ಕಾರದ ವಿರುದ್ಧ ಯಾವುದೇ ಕಠಿಣ ನಿಲುವು ಕೈಗೊಳ್ಳದೆ ಒಳಒಪ್ಪಂದ ಮಾಡಿಕೊಂಡರು. ಇದನ್ನು ನಾವು ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರ ನಿರ್ಧಾರಕ್ಕೆ ಕಾಯುತ್ತಿದ್ದೇವೆ ಎಂದು ತಿಳಿಸಿದರು.

ವಕ್ಫ್ ಹೋರಾಟ ತಾರ್ಕಿಕ ಹಂತಕ್ಕೆ ಕೊಂಡೊಯ್ಯಲಿಲ್ಲ. ಅಕ್ರಮ ವಲಸಿಗರ ವಿಷಯವನ್ನು ಪಕ್ಷ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಕೇವಲ ಮಾಧ್ಯಮಗಳ ಮೂಲಕ ಹೇಳಿಕೆ ನೀಡುವುದರಿಂದ ಹೋರಾಟ ಮಾಡಿದಂತಾಗುವುದಿಲ್ಲ ಎಂಬುದನ್ನು ಪಕ್ಷದ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!