
ಬೆಂಗಳೂರು(ಫೆ.20): ಸಂಪುಟ ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂಬ ವಿಚಾರಕ್ಕೆ ನಾವು ವಿರೋಧ ವ್ಯಕ್ತಪಡಿಸಿಲ್ಲ. ಮೀಸಲಾತಿ ಬೇಡಿಕೆಗೆ ನಮ್ಮ ಬೆಂಬಲವಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಈ ಬಗ್ಗೆ ಉಭಯ ನಾಯಕರು ಪ್ರತ್ಯೇಕವಾಗಿ ಪ್ರಕಟಣೆ ನೀಡಿದ್ದು, ಹೋರಾಟಕ್ಕೆ ರಾಜ್ಯ ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ ಎಂದು ತಿಳಿಸಿದ್ದಾರೆ.
ಲಕ್ಷ್ಮಣ ಸವದಿ ಹೇಳಿದ್ದು ಹೀಗೆ:
ನಾನು ಮೊದಲಿನಿಂದಲೂ ಪಂಚಮಸಾಲಿಗೆ ಮೀಸಲು ನೀಡಬೇಕೆಂಬ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸುತ್ತಲೇ ಬಂದಿದ್ದೇನೆ. ಹಿಂದೆ ಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನಡೆಸಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ (ಕಳೆದ ಅಕ್ಟೋಬರ್‌ನಲ್ಲಿ) ನಾನೂ ಕೂಡ ಭೇಟಿ ಕೊಟ್ಟು ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಅವರಿಗೆ ಬೆಂಬಲ ಸೂಚಿಸಿ ಆ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಮನವಿ ಮಾಡಿಕೊಂಡು ಶ್ರೀಗಳಿಗೆ ಎಳನೀರನ್ನು ಸೇವಿಸಲು ವಿನಂತಿಸಿಕೊಂಡಿದ್ದೆ. ಅದರಂತೆ ಶ್ರೀಗಳು ಅಂದು ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದರು. ವಾಸ್ತವ ಸ್ಥಿತಿ ಹೀಗಿರುವಾಗ ನಾನು ಇದಕ್ಕೆ ವ್ಯತಿರಿಕ್ತವಾಗಿ ಹೇಳಿಕೆ ನೀಡಲು ಹೇಗೆ ಸಾಧ್ಯ? ಮೊದಲಿನಿಂದಲೂ ನಾನು ಅನೇಕ ಸಂದರ್ಭಗಳಲ್ಲಿ ಪಂಚಮಸಾಲಿ ಸಮುದಾಯವು 2ಎ ಗೆ ಸೇರಬೇಕು ಎಂದು ಪ್ರತಿಪಾದಿಸುತ್ತಿದ್ದೇನೆ.
ಪಂಚಮಸಾಲಿ 2A ಮೀಸಲಾತಿಗೆ ಸಚಿವರು ವಿರೋಧಿಸಿದ್ರಾ? ಸ್ಪಷ್ಟನೆ ಕೊಟ್ಟ ಶೆಟ್ಟರ್
ಜಗದೀಶ್ ಶೆಟ್ಟರ್ ಹೇಳಿದ್ದು ಹೀಗೆ:
ಪಂಚಮಸಾಲಿ ಸಮುದಾಯಕ್ಕೆ ವಿರೋಧ ವ್ಯಕ್ತಪಡಿಸುವುದು ನಮ್ಮ ನಿಲುವಲ್ಲ. ಮೊದಲಿನಿಂದಲೂ ಈ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರಕಬೇಕು ಎನ್ನುವ ಅಭಿಲಾಷೆಯ ಹಾಗೂ ಪ್ರತಿಪಾದನೆಯನ್ನು ಮಾಡಿಕೊಂಡು ಬಂದಿದ್ದೇವೆ. ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳು ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಹೋರಾಟಕ್ಕೆ ಈಗಾಗಲೇ ರಾಜ್ಯ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾನೂನಾತ್ಮಕವಾಗಿ ನಡೆಯಬೇಕಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಹೋರಾಟಕ್ಕೆ ಬೇಕಾದ ಬೆಂಬಲವನ್ನು ನಾವು ನೀಡಲು ಸಿದ್ದರಿದ್ದೇವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ